ಬೆಂಗಳೂರು(ಏ.04): ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಬಗ್ಗೆ ಏಕ ವಚನದಲ್ಲಿ ಟೀಕೆ ಮಾಡುವ ಮೂಲಕ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ತಮ್ಮ ಸಂಸ್ಕೃತಿಯನ್ನು ರಾಜ್ಯದ ಜನತೆಯ ಮುಂದಿಟ್ಟಿದ್ದಾರೆ ಎಂದು ಬಿಡಿಎ ಅಧ್ಯಕ್ಷ ಎಸ್‌.ಆರ್‌.ವಿಶ್ವನಾಥ್‌ ವ್ಯಂಗ್ಯವಾಡಿದ್ದಾರೆ.

ಕೊರೋನಾದಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಯಡಿಯೂರಪ್ಪ ಅವರು ಅದನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ. ರಾಜ್ಯದಲ್ಲಿ ಯಾರೊಬ್ಬರೂ ಹಸಿವಿನಿಂದ ಬಳಲಬಾರದು ಎಂದು ಪ್ರತಿಯೊಬ್ಬ ನಾಗರಿಕರಿಗೂ ಊಟ ವಸತಿ ಸೌಲಭ್ಯವನ್ನು ಕಲ್ಪಿಸಿದರು. ಅಸಂಖ್ಯಾತ ಕುಟುಂಬಗಳಿಗೆ ಉಚಿತವಾಗಿ ಆಹಾರ ಧಾನ್ಯಗಳು ತಲುಪುವಂತೆ ಮಾಡಿ ರಾಷ್ಟ್ರ ಮಟ್ಟದಲ್ಲಿ ಒಳ್ಳೆಯ ಹೆಸರನ್ನು ತೆಗೆದುಕೊಂಡರು. ಆದರೆ, ಸಿದ್ದರಾಮಯ್ಯ ಮೊಸರಲ್ಲಿ ಕಲ್ಲು ಹುಡುಕುವಂತೆ ವಿನಾ ಕಾರಣ ಯಡಿಯೂರಪ್ಪ ವಿರುದ್ಧ ಟೀಕೆ ಮಾಡುತ್ತಿದ್ದಾರೆ ಎಂದು ವಿಶ್ವನಾಥ್‌ ಆಕ್ರೋಶ ವ್ಯಕ್ತಪಡಿಸಿದರು.

ಸಿಡಿ ಪ್ರಕರಣ: ಎಸ್‌ಐಟಿಯಿಂದ ಸತ್ಯಾಂಶ ಹೊರಬರಲು ಸಾಧ್ಯವಿಲ್ಲ, ಸಿದ್ದರಾಮಯ್ಯ

ಅನ್ನಭಾಗ್ಯದ ವಿಚಾರದಲ್ಲಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಅವರ ಬಗ್ಗೆ ಏಕವಚನದಲ್ಲಿ ಮಾತನಾಡಿದ್ದಾರೆ. ಬಡವರಿಗೆ 7 ಕೆಜಿ ಅಕ್ಕಿ ಕೊಡುತ್ತಿದ್ದೆ. ಯಡಿಯೂರಪ್ಪ ಅದನ್ನು 5 ಕೆಜಿಗೆ ಇಳಿಸಿದ್ದಾನೆ ಎಂದು ಹೇಳುವ ಮೂಲಕ ಸಿದ್ದರಾಮಯ್ಯ ತಮ್ಮ ಸಂಸ್ಕೃತಿಯನ್ನು ರಾಜ್ಯದ ಜನತೆ ಮುಂದಿಟ್ಟಿದ್ದಾರೆ. ಯಡಿಯೂರಪ್ಪ ಏನು ಅವರಪ್ಪನ ಮನೆಯಿಂದ ದುಡ್ಡು ತರುತ್ತಾರಾ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಅಲ್ಲದೆ, ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಆಗಿದ್ದಾಗ ಅವರಪ್ಪನ ಮನೆಯಿಂದ ಹಣ ತಂದು ಆಡಳಿತ ನಡೆಸಿದ್ದರಾ? ಸಿದ್ದರಾಮಯ್ಯ ಅವರಿಗಿಂತ ಎರಡು ಪಟ್ಟು ಮಾತನಾಡಲು ಬಿಜೆಪಿ ನಾಯಕರಿಗೂ ಬರುತ್ತದೆ. ಆದರೆ, ನಾವು ಸಿದ್ದರಾಮಯ್ಯನವರ ಮಟ್ಟಕ್ಕೆ ಇಳಿಯುವುದಿಲ್ಲ. ಅಂತಹ ಸಂಸ್ಕೃತಿಯನ್ನು ಪಕ್ಷ ಕಲಿಸಿಕೊಟ್ಟಿದೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.