ನಿಫಾ ಹಿನ್ನೆಲೆಯಲ್ಲಿ ಕೇರಳ ಗಡಿಯಲ್ಲಿ ಕಟ್ಟೆಚ್ಚರ ವಹಿಸಲು ಸೂಚನೆ
- ನಿಫಾ ಹಿನ್ನೆಲೆಯಲ್ಲಿ ಕೇರಳ ಗಡಿಯಲ್ಲಿ ಕಟ್ಟೆಚ್ಚರ
- ಮೈಸೂರು ಮತ್ತು ಚಾಮರಾಜನಗರ ಜಿಲ್ಲಾಡಳಿತಕ್ಕೆ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಸೂಚನೆ
ಮೈಸೂರು (ಸೆ.10): ನಿಫಾ ಹಿನ್ನೆಲೆಯಲ್ಲಿ ಕೇರಳ ಗಡಿಯಲ್ಲಿ ಕಟ್ಟೆಚ್ಚರ ವಹಿಸುವಂತೆ ಮೈಸೂರು ಮತ್ತು ಚಾಮರಾಜನಗರ ಜಿಲ್ಲಾಡಳಿತಕ್ಕೆ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಸೂಚಿಸಿದ್ದಾರೆ.
ಕೇರಳ ರಾಜ್ಯದಲ್ಲಿ ನಿಫಾ ವೈರಸ್ ಕಾಣಿಸಿಕೊಂಡಿರುವ ಹಾಗೂ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಗಡಿ ಭಾಗಗಳಲ್ಲಿ ತೀವ್ರ ಕಟ್ಟೆಚ್ಚರ ವಹಿಸಬೇಕು. ಚೆಕ್‌ಪೋಸ್ವ್‌ಗಳಲ್ಲಿ ತಪಾಸಣಾ ಕಾರ್ಯವನ್ನು ಇನ್ನಷ್ಟುಕಟ್ಟುನಿಟ್ಟಾಗಿ ಮುಂದುವರೆಸಬೇಕು. ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ತೆಗೆದುಕೊಂಡು ಹೆಚ್ಚಿನ ನಿಗಾ ವಹಿಸಿದರೆ ರಾಜ್ಯಕ್ಕೆ ಈ ವೈರಸ್ ಹರಡದಂತೆ ತಡೆಯಲು ಸಾಧ್ಯವಿದೆ ಎಂದು ಅವರು ತಿಳಿಸಿದ್ದಾರೆ.
ಕೊರೋನಾಗಿಂತ ಡೇಂಜರ್ ನಿಪಾ, ಮರಣ ಪ್ರಮಾಣವೂ ಅತೀ ಹೆಚ್ಚು!
ಈ ಹಿನ್ನೆಲೆಯಲ್ಲಿ ಮೈಸೂರು ಮತ್ತು ಚಾಮರಾಜನಗರ ಜಿಲ್ಲಾಡಳಿತಗಳು ತಮ್ಮ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಗಡಿ ಪ್ರದೇಶಗಳ ಮೂಲಕ ರಾಜ್ಯ ಪ್ರವೇಶಿಸುವ ಪ್ರತಿಯೊಬ್ಬರ ತಪಾಸಣೆ ನಡೆಸಿ, ಕಟ್ಟೆಚ್ಚರ ವಹಿಸಬೇಕು. ನಿಫಾ ಸೋಂಕಿನ ಲಕ್ಷಣ ಇರುವ ಪ್ರವಾಸಿಗರು, ಪ್ರಯಾಣಿಕರಿಗೆ ರಾಜ್ಯ ಪ್ರವೇಶಕ್ಕೆ ಅವಕಾಶ ನೀಡಬಾರದು. ಜಿಲ್ಲೆಯ ಗಡಿ ಭಾಗಗಳ ಮೂಲಕ ರಾಜ್ಯ ಪ್ರವೇಶಿಸುವ ಪ್ರತಿಯೊಬ್ಬರು 72 ಗಂಟೆಯೊಳಗೆ ಮಾಡಿಸಿದ ಆರ್‌ಟಿಪಿಸಿಆರ್ ನೆಗೆಟಿವ್ ವರದಿ ಇರುವುದನ್ನು ಖಾತರಿಪಡಿಸಿಕೊಳ್ಳಬೇಕು. ಸೂಕ್ತ ತಪಾಸಣೆ ಹಾಗೂ ಪರಿಶೀಲನೆಯನ್ನು ಕಟ್ಟುನಿಟ್ಟಾಗಿ ಮಾಡಬೇಕು ಎಂದು ಅವರು ಸೂಚಿಸಿದ್ದಾರೆ.