ಬೆಂಗಳೂರಿನ ಕೆಲವು ಐಟಿ ಕಂಪನಿಗಳಲ್ಲಿ ಕನ್ನಡಿಗ ಉದ್ಯೋಗಾಕಾಂಕ್ಷಿಗಳನ್ನು ಕಡೆಗಣಿಸಲಾಗುತ್ತಿದೆ ಎಂದು ಯುವತಿಯೊಬ್ಬರು ವಿಡಿಯೋ ಮೂಲಕ ಆರೋಪಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಡಿ.ಕೆ. ಶಿವಕುಮಾರ್, ಕನ್ನಡಿಗರಿಗೆ ಅನ್ಯಾಯವೆಸಗುವ ಕಂಪನಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರು: ಬೆಂಗಳೂರಿನ ಕೆಲವು ಮಾಹಿತಿ ತಂತ್ರಜ್ಞಾನ (IT) ಕಂಪನಿಗಳಲ್ಲಿ ಕನ್ನಡಿಗ ಉದ್ಯೋಗಾಕಾಂಕ್ಷಿಗಳ ವಿರುದ್ಧ ತಾರತಮ್ಯ ಎಸಗಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಈ ಕುರಿತು ಸೋಷಿಯಲ್​ ಮೀಡಿಯಾದಲ್ಲಿ ಯುವತಿಯೊಬ್ಬರು ಮಾಡಿದ್ದ ವಿಡಿಯೋ ಸಿಕ್ಕಾಪಟ್ಟೆ ವೈರಲ್​ ಆಗುತ್ತಿದೆ. ಇದಕ್ಕೀಗ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್​ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಎಕ್ಸ್​ ಖಾತೆಯಲ್ಲಿ ಅವರು, ಬೆಂಗಳೂರಿನ ಐಟಿ ಕಂಪನಿಗಳಲ್ಲಿ ಕನ್ನಡಿಗರು ಉದ್ಯೋಗಾವಕಾಶಗಳಲ್ಲಿ ಅನ್ಯಾಯ ಎದುರಿಸುತ್ತಿದ್ದಾರೆ ಎಂಬ ದೂರುಗಳು ಕೇಳಿ ಬರುತ್ತಿರುವುದು ಬೇಸರದ ಸಂಗತಿ. ಕರ್ನಾಟಕದಲ್ಲಿ, ಕನ್ನಡಿಗರು ಸಾರ್ವಭೌಮರು. ಯಾವುದೇ ಕಾರಣಕ್ಕೂ ಕನ್ನಡಿಗರ ಹಕ್ಕುಗಳು, ಘನತೆ ಮತ್ತು ಅವಕಾಶಗಳನ್ನು ಕಡೆಗಣಿಸಲು ಸರ್ಕಾರ ಬಿಡುವುದಿಲ್ಲ. ಜಗತ್ತು ಬೆಂಗಳೂರನ್ನು ಭಾರತದ ತಂತ್ರಜ್ಞಾನ ರಾಜಧಾನಿಯಾಗಿ ನೋಡುತ್ತದೆ ಮತ್ತು ನಮ್ಮ ಕನ್ನಡಿಗರ ಪ್ರತಿಭೆ, ಕೌಶಲ್ಯ ಮತ್ತು ಸಾಮರ್ಥ್ಯಗಳ ಬಗ್ಗೆ ನಮಗೆ ಅಪಾರ ಹೆಮ್ಮೆ ಇದೆ ಎಂದಿದ್ದಾರೆ.

ಕಠಿಣ ಕ್ರಮದ ಎಚ್ಚರಿಕೆ

ಯಾವುದೇ ಖಾಸಗಿ ಸಂಸ್ಥೆಯು ಉದ್ದೇಶಪೂರ್ವಕವಾಗಿ ಕನ್ನಡಿಗರನ್ನು ಕಡೆಗಣಿಸುತ್ತಿದೆ ಎಂದು ಕಂಡುಬಂದರೆ, ಸರ್ಕಾರ ಸೂಕ್ತ ಕ್ರಮ ಕೈಗೊಳ್ಳುತ್ತದೆ. ಕನ್ನಡಿಗರ ಹಿತಾಸಕ್ತಿಗಳ ಧ್ವನಿಯಾಗಿ, ಸರ್ಕಾರವು ಅವರ ಸಮಸ್ಯೆಗಳಿಗೆ ಸ್ಪಂದಿಸಲು ಯಾವಾಗಲೂ ಬದ್ಧವಾಗಿರುತ್ತದೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

ಯುವತಿ ಹೇಳಿದ್ದೇನು?

ಹೊರ ರಾಜ್ಯಗಳ ಅಭ್ಯರ್ಥಿಗಳಿಗೆ ಉದ್ಯೋಗ ನೀಡುತ್ತಿರುವ ಕೆಲವು ಕಂಪೆನಿಗಳು, ಕನ್ನಡಿಗ ಅಭ್ಯರ್ಥಿಗಳನ್ನು ಮಾತ್ರ ತಿರಸ್ಕರಿಸುತ್ತಿವೆ ಎಂದು ಯುವತಿ ದೂರಿದ್ದಾರೆ. ಬೆಂಗಳೂರಿನ ಕೆಲವು ಕಂಪನಿಗಳು ಬೆರಳೆಣಿಕೆಯಷ್ಟು ಕನ್ನಡಿಗರಿಗೆ ಮಾತ್ರ ಉದ್ಯೋಗ ನೀಡುತ್ತಿವೆ. ಬದಲಾಗಿ ಹೊರರಾಜ್ಯಗಳಲ್ಲಿ ಕ್ಯಾಂಪಸ್ ಸಂದರ್ಶನಗಳನ್ನು ನಡೆಸಿ ಕಡಿಮೆ ವೇತನಕ್ಕೆ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳುತ್ತಿವೆ ಎಂದು ಅವರು ದೂರಿದ್ದಾರೆ. ಇದರಿಂದ ಸ್ಥಳೀಯ ಕನ್ನಡಿಗರಿಗೆ ಉದ್ಯೋಗಾವಕಾಶಗಳು ಸಿಗುತ್ತಿಲ್ಲ ಎಂದು ಯುವತಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಯುವತಿಯು ತಮ್ಮ ವಿಡಿಯೊದಲ್ಲಿ ಅಸ್ಥೆನೋಸ್ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ (Asthenos Technologies Private Limited) ಕಂಪನಿಯ ಹೆಸರನ್ನು ಉಲ್ಲೇಖಿಸಿದ್ದಾರೆ. ಈ ಕಂಪನಿಯಲ್ಲಿ ತಮಿಳು ಮತ್ತು ತೆಲುಗು ಭಾಷೆಗಳಿಗೆ ಮಾನ್ಯತೆ ನೀಡುತ್ತಿದೆ. ಆದರೆ, ಕನ್ನಡ ಮಾತನಾಡುವ ಅಭ್ಯರ್ಥಿಗಳಿಗೆ ಅದೇ ರೀತಿಯ ಆದ್ಯತೆ ನೀಡುತ್ತಿಲ್ಲ ಎಂದು ಅವರು ಆರೋಪಿಸಿದ್ದಾರೆ. ಅಭ್ಯರ್ಥಿಗಳು ತಮ್ಮ ಬಯೋಡೇಟಾದಲ್ಲಿ ಮಾತೃಭಾಷೆ ಕನ್ನಡ ಎಂದು ನಮೂದಿಸಿದರೆ, ಸಂದರ್ಶನದ ಹಂತದಲ್ಲಿಯೇ ಅವರನ್ನು ತಿರಸ್ಕರಿಸುವ ಸಾಧ್ಯತೆಯಿದೆ ಎಂದು ಯುವತಿ ದೂರಿದ್ದಾರೆ. ಇದಲ್ಲದೆ, ಬೆಂಗಳೂರಿನ ಕಾಲೇಜುಗಳಲ್ಲಿ ಕ್ಯಾಂಪಸ್ ನೇಮಕಾತಿ ಅಭಿಯಾನಗಳನ್ನು ನಡೆಸುತ್ತಿಲ್ಲ. ಇದರಿಂದ ಸ್ಥಳೀಯ ಪದವೀಧರರಿಗೆ ಉದ್ಯೋಗಾವಕಾಶಗಳು ಸೀಮಿತವಾಗಿವೆ ಎಂದು ಅವರು ಆರೋಪಿಸಿದ್ದಾರೆ.

ಈ ವಿಚಾರದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಧ್ಯಪ್ರವೇಶಿಸಿ ಕನ್ನಡಿಗ ಉದ್ಯೋಗಾಕಾಂಕ್ಷಿಗಳು ಎದುರಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರ ಒದಗಿಸಬೇಕು ಎಂದು ಯುವತಿ ವಿಡಿಯೊ ಮೂಲಕ ಮನವಿ ಮಾಡಿದ್ದರಿಂದ, ಈ ವಿಡಿಯೋ ಕುರಿತು ಮುಖ್ಯಮಂತ್ರಿಗಳು ಪ್ರತಿಕ್ರಿಯೆ ನೀಡಿದ್ದಾರೆ.