ವಿದ್ಯಾರ್ಥಿಗಳು ಹೇಗೆ ಓದಬೇಕು ಅಂದ್ರೆ ರಿಸಲ್ಟ್ ದಿನ ಇಡೀ ಕರ್ನಾಟಕವೇ ನಿಮ್ಮ ಬಗ್ಗೆ ಓದಬೇಕು: ಪ್ರದೀಪ್ ಈಶ್ವರ್
ಮಹಿಳಾ ಕಾಲೇಜಿನ ಅನುಕೂಲವನ್ನು ಈ ಭಾಗದ ವಿದ್ಯಾರ್ಥಿಗಳು ಪಡೆಯಬೇಕು, ವಿದ್ಯಾರ್ಥಿಗಳು ಗುರು ಹಿರಿಯರಿಗೆ ಗೌರವ ನೀಡುವ ಜೊತೆಗೆ ಉತ್ತಮ ವಿದ್ಯಾವಂತರಾಗಬೇಕು ಎಂದು ಶುಭ ಹಾರೈಸಿ,ಕಾಲೇಜು ಉದ್ಘಾಟನೆಗೆ ಸಹಕರಿಸಿದ ಎಲ್ಲರಿಗೂ ಧನ್ಯವಾದಗಳನ್ನು ತಿಳಿಸಿದರು.
ಚಿಕ್ಕಬಳ್ಳಾಪುರ (ಆ.19): ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿಗೆ ಅಗತ್ಯವಾಗಿ ಬೇಕಾಗಿರುವ ಎಲ್ಲ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವ ಮೂಲಕ ಜಿಲ್ಲೆಯ ಶೈಕ್ಷಣಿಕ ಚಟುವಟಿಕೆಗಳಿಗೆ ಪೂರಕವಾದ ಉತ್ತಮ ವಾತಾವರಣ ಸೃಷ್ಟಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಸಿ ಸುಧಾಕರ್ ತಿಳಿಸಿದರು.
ಚಿಕ್ಕಬಳ್ಳಾಪುರ ನಗರದ ಹೊರವಲಯದ ಶಿಡ್ಲಘಟ್ಟರಸ್ತೆಯ ಫ್ಲೇ ಓವರ್ ಬಳಿ ನಿರ್ಮಾಣವಾಗಿರುವ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ನೂತನ ಕಟ್ಟಡವನ್ನು ಶುಕ್ರವಾರ ಉದ್ಘಾಟಿಸಿ ಮಾತನಾಡಿ, ಚಿಕ್ಕಬಳ್ಳಾಪುರ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಕಾಮಗಾರಿಯು ಹಲವು ತೊಡಕುಗಳು, ಕಾರಣಗಳಿಂದ ಅನೇಕ ವರ್ಷಗಳಿಂದ ನನೆಗುದಿಗೆ ಬಿದ್ದಿತ್ತು. ಆ ಎಲ್ಲ ತೊಡಕುಗಳನ್ನು ನಿವಾರಿಸಿ ಜಿಲ್ಲಾ ಕೇಂದ್ರಕ್ಕೆ ಅತ್ಯಗತ್ಯವಾಗಿ ಬೇಕಾಗಿರುವ ಈ ಕಟ್ಟಡವನ್ನು ನಿರ್ಮಿಸಲಾಗಿದೆ ಎಂದರು.
ಅಧಿಕಾರದಿಂದ ಪ್ರಧಾನಿ ಮೋದಿ ಕೆಳಗಿಳಿಸುವದೇ ನಮ್ಮ ಗುರಿ: ರಕ್ಷಾ ರಾಮಯ್ಯ
ಕಂಪ್ಯೂಟರ್, ವಾಹನ ಸೌಲಭ್ಯ: ಈ ಕಾಲೇಜಿನ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗಾಗಿ ಈಗಾಗಲೇ 5 ಲಕ್ಷ ರು.ಗಳನ್ನು ಮಂಜೂರು ಮಾಡಲಾಗಿದ್ದು, ಸುಮಾರು 20 ಗಣಕ ಯಂತ್ರಗಳನ್ನು ಪೂರೈಸಲಾಗಿದೆ. ಇನ್ನು ಕೆಲವೇ ದಿನಗಳಲ್ಲಿ ಮತ್ತಷ್ಟು ಗಣಕಯಂತ್ರಗಳನ್ನು ಪೂರೈಸಲಾಗುವುದು. ವಿದ್ಯಾರ್ಥಿಗಳು ಕಾಲೇಜಿಗೆ ಬಂದು ಹೋಗಲು ಅನುಕೂಲವಾಗುವಂತೆ ಕಾಲೇಜಿನ ಸಮಯಕ್ಕೆ ಅನುಗುಣವಾಗಿ ವಾಹನ ವ್ಯವಸ್ಥೆಯನ್ನು ಕಲ್ಪಿಸಲು ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದರು.
ವಿದ್ಯಾರ್ಥಿಗಳ ಉತ್ತಮ ಭವಿಷ್ಯವನ್ನು ರೂಪಿಸುವ ದಿಸೆಯಲ್ಲಿ ಉನ್ನತ ದರ್ಜೆಯ ಸೌಕರ್ಯಗಳನ್ನು ಕಲ್ಪಿಸಿ ಉತ್ತಮ ಶೈಕ್ಷಣಿಕ ವಾತಾವರಣವನ್ನು ಸೃಷ್ಟಿಸಲು ಬದ್ಧವಾಗಿದ್ದೇನೆ. ಇದೇ ತಿಂಗಳ 23ನೇ ತಾರೀಕು ಕಾಲೇಜಿನ ಮೂಲಸೌಕರ್ಯಗಳ ಬಗ್ಗೆ ಹಾಗೂ ಕಲಿಕಾ ಪ್ರಕ್ರಿಯೆಗಳ ಕುರಿತು ಪರಿಶೀಲಿಸಲು ನ್ಯಾಕ್ ಸಮಿತಿಯು ಭೇಟಿ ನೀಡುತ್ತಿದೆ. ಈ ಹಿನ್ನೆಲೆಯಲ್ಲಿ ತ್ವರಿತವಾಗಿ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ ಸರ್ಕಾರದ ಎಲ್ಲ ಅನುಮತಿಗಳನ್ನು ಪಡೆದು ಇಂದು ಕಾಲೇಜನ್ನು ಉದ್ಘಾಟಿಸಲಾಗಿದೆ. ವಿದ್ಯಾರ್ಥಿಗಳು ಈ ಕಾಲೇಜನ್ನು ಸದುಪಯೋಗಪಡಿಸಿಕೊಂಡು ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳುವಂತೆ ಕಿವಿ ಮಾತು ಹೇಳಿ,ಇರುವ ಸೌಲತ್ತುಗಳನ್ನು ಸದ್ಬಳಕೆ ಮಾಡಿಕೊಂಡು ಉತ್ತಮ ಬೋಧನ ಕಾರ್ಯಗಳನ್ನು ಕೈಗೊಂಡು ಉತ್ತಮ ಸೇವೆ ಸಲ್ಲಿಸುವಂತೆ ಬೋಧನಾ ವರ್ಗಕ್ಕೆ ತಿಳಿಸಿದರು.
ಕಾರ್ಯಕ್ರಮದಲ್ಲಿ ಶಾಸಕ ಪ್ರದೀಪ್ ಈಶ್ವರ್ ಮಾತನಾಡಿ ಉದ್ಘಾಟನೆ ಆಗಿರುವ ಈ ಮಹಿಳಾ ಕಾಲೇಜಿನ ಅನುಕೂಲವನ್ನು ಈ ಭಾಗದ ವಿದ್ಯಾರ್ಥಿಗಳು ಪಡೆಯಬೇಕು, ವಿದ್ಯಾರ್ಥಿಗಳು ಗುರು ಹಿರಿಯರಿಗೆ ಗೌರವ ನೀಡುವ ಜೊತೆಗೆ ಉತ್ತಮ ವಿದ್ಯಾವಂತರಾಗಬೇಕು ಎಂದು ಶುಭ ಹಾರೈಸಿ,ಕಾಲೇಜು ಉದ್ಘಾಟನೆಗೆ ಸಹಕರಿಸಿದ ಎಲ್ಲರಿಗೂ ಧನ್ಯವಾದಗಳನ್ನು ತಿಳಿಸಿದರು.
ಗಿರಿಧಾಮಕ್ಕೆ ರೋಪ್ ವೇ: ವಿಶ್ವವಿಖ್ಯಾತ ನಂದಿ ಗಿರಿಧಾಮಕ್ಕೆ ರೋಪ್ ವೇ ನಿರ್ಮಿಸುವ ಸಂಬಂಧ ಇತ್ತೀಚೆಗೆ ಉನ್ನತ ಮಟ್ಟದಲ್ಲಿ ಅಧಿಕಾರಿಗಳ ಸಭೆ ನಡೆಸಿದ್ದು, ಕಾಮಗಾರಿಗೆ ಇದ್ದ ತೊಡಕುಗಳನ್ನು ನಿವಾರಿಸಿ ಕಾಮಗಾರಿ ಮುಂದುವರಿಕೆಗೆ ಕ್ರಮಕೈಗೊಳ್ಳಲಾಗಿದೆ. ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಪೂರಕವಾದ ಕ್ರಮಗಳನ್ನು ಸರ್ಕಾರ ಕೈಗೊಳ್ಳುತ್ತದೆ ಜೊತೆಗೆ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಜಿಲ್ಲೆ ಹತ್ತಿರವಿರುವುದರಿಂದ ಕೈಗಾರಿಕೆಗಳ ಸ್ಥಾಪನೆಗೆ ಮುಂದಾಗಿದ್ದು ಉದ್ಯೋಗ ಸೃಷ್ಟಿಗೆ ಕ್ರಮ ವಹಿಸಲಾಗುತ್ತಿದೆ. ಅದರಲ್ಲೂ ಮಾಹಿತಿ ತಂತ್ರಜ್ಞಾನಕ್ಕೆ ಸಂಬಂಧಿಸಿದ ಕಂಪನಿಗಳ ಸ್ಥಾಪನೆಗೆ ಒತ್ತು ನೀಡಲಾಗುವುದು ಎಂದು ತಿಳಿಸಿದರು.
ಕೌನ್ಸೆಲಿಂಗ್ ಮೂಲಕ ವರ್ಗಾವಣೆಯಿಂದ ಸರ್ಕಾರದ ಇಮೇಜ್ ಹೆಚ್ಚಳ: ಬಸವರಾಜ ಹೊರಟ್ಟಿ
ಈ ಸಂದರ್ಭದಲ್ಲಿ ಕಾಲೇಜು ಶಿಕ್ಷಣ ಇಲಾಖೆ,ಪ್ರಾದೇಶಿಕ ಕಚೇರಿಯ ಜಂಟಿ ನಿರ್ದೇಶಕ ಕೆ.ರಾಮಕೃಷ್ಣ ರೆಡ್ಡಿ,ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಪ್ರಕಾಶ್.ಜಿ.ಟಿ.ನಿಟ್ಟಾಲಿ,ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಎಲ್.ನಾಗೇಶ್, ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ,ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಡಾ.ಎನ್.ಭಾಸ್ಕರ್, ಪ್ರಾಂಶುಪಾಲರಾದ ಚಂದ್ರಯ್ಯ,ಡಾ.ಮುನಿರಾಜು,ಡಿವೈಎಸ್‌ಪಿ ಎಸ್.ಶಿವಕುಮಾರ್, ಕಾಲೇಜಿನ ಬೋಧಕ ಬೋಧಕೇತರ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿನಿಯರು ಇದ್ದರು.