ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತಮ್ಮ ವಿರುದ್ಧ ಜಾರಿಗೊಳಿಸಿರುವ ಸಮನ್ಸ್‌ ರದ್ದುಪಡಿಸುವಂತೆ ಕೋರಿ ಸಚಿವ ವಿ.ಸೋಮಣ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆ 

ಬೆಂಗಳೂರು(ಸೆ.07): ಆದಾಯ ಮೀರಿ ಆಸ್ತಿ ಗಳಿಕೆ ಆರೋಪ ಸಂಬಂಧ ವಸತಿ ಸಚಿವ ವಿ.ಸೋಮಣ್ಣ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾರಿಗೊಳಿಸಿದ್ದ ಸಮನ್ಸ್‌ ರದ್ದುಪಡಿಸಿರುವ ಹೈಕೋರ್ಟ್‌, ಪ್ರಕರಣವನ್ನು ಮತ್ತೆ ವಿಶೇಷ ನ್ಯಾಯಾಲಯಕ್ಕೆ ವರ್ಗಾಯಿಸಿ ಹೊಸದಾಗಿ ವಿಚಾರಣೆ ನಡೆಸುವಂತೆ ಸೂಚಿಸಿದೆ.

ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತಮ್ಮ ವಿರುದ್ಧ ಜಾರಿಗೊಳಿಸಿರುವ ಸಮನ್ಸ್‌ ರದ್ದುಪಡಿಸುವಂತೆ ಕೋರಿ ಸಚಿವ ವಿ.ಸೋಮಣ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್‌.ಸುನಿಲ್‌ದತ್ತ ಯಾದವ್‌ ಅವರ ನ್ಯಾಯಪೀಠ ಈ ಆದೇಶ ಮಾಡಿದೆ.

ಮಳೆ ಪರಿಹಾರ ಸಮರೋಪಾದಿಯಲ್ಲಿ ನಿರ್ವಹಿಸಿ: ಸಚಿವ ಸೋಮಣ್ಣ

ಪ್ರಕರಣದ ವಿವರ:

ಸಚಿವ ವಿ.ಸೋಮಣ್ಣ ಆದಾಯ ಮೀರಿ ಆಸ್ತಿ ಗಳಿಸಿದ್ದಾರೆ ಎಂದು ಆರೋಪಿಸಿ ನಗರದ ರಾಮಕೃಷ್ಣ ಎಂಬುವರು 2013ರಲ್ಲಿ ಲೋಕಾಯುಕ್ತ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು. ದೂರಿನ ವಿಚಾರಣೆ ನಡೆಸಿದ ನ್ಯಾಯಾಲಯ ತನಿಖೆಗೆ ಆದೇಶಿಸಿತ್ತು. ತನಿಖೆ ನಡೆಸಿದ್ದ ಲೋಕಾಯುಕ್ತ ಪೊಲೀಸರು, ದೂರುದಾರರ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ತಿಳಿಸಿ ‘ಬಿ ರಿಪೋರ್ಟ್‌’ ಸಲ್ಲಿಸಿದ್ದರು.

ಈ ಮಧ್ಯೆ ಪ್ರಕರಣದ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ವರ್ಗಾವಣೆ ಆಗಿತ್ತು. ತನಿಖೆ ಅಸಮರ್ಪಕವಾಗಿದೆ, ಸೋಮಣ್ಣ ಶಾಸಕರಾಗುವ ಮೊದಲು ಹೊಂದಿದ್ದ ಆದಾಯ ಹಾಗೂ ಶಾಸಕರಾದ ನಂತರ ಹೊಂದಿದ ಆದಾಯ ಮತ್ತು ಆಸ್ತಿ ಕುರಿತು ತನಿಖಾಧಿಕಾರಿಗಳು ಸೂಕ್ತ ವಿವರಣೆ ನೀಡಿಲ್ಲ ಎಂದು ಅಭಿಪ್ರಾಯಪಟ್ಟಿದ್ದ ಜನ ಪ್ರತಿನಿಧಿಧಗಳ ವಿಶೇಷ ನ್ಯಾಯಾಲಯವು ಬಿ ರಿಪೋರ್ಟ್‌ ರದ್ದುಗೊಳಿಸಿತ್ತು. ಜತೆಗೆ, ನ್ಯಾಯಾಲಯದ ವಿಚಾರಣೆಗೆ ಹಾಜರಾಗುವಂತೆ ಸೋಮಣ್ಣ ಅವರಿಗೆ ಸಮನ್ಸ್‌ ಜಾರಿಗೊಳಿಸಿತ್ತು. ಈ ಆದೇಶ ರದ್ದು ಕೋರಿ ಸೋಮಣ್ಣ ಹೈಕೋರ್ಚ್‌ಗೆ ಅರ್ಜಿ ಸಲ್ಲಿಸಿದ್ದರು.