Tumakuru : ಬಾಲ್ಯ ವಿವಾಹ ನಡೆಯದಂತೆ ಅಧಿಕಾರಿಗಳು ಎಚ್ಚರಿಕೆ ವಹಿಸಿ
ಯಾವುದೇ ಧಾರ್ಮಿಕ ಸ್ಥಳಗಳಲ್ಲಿ ಬಾಲ್ಯ ವಿವಾಹಗಳು ನಡೆದಲ್ಲಿ ಆಯಾ ಧಾರ್ಮಿಕ ಸ್ಥಳ, ಟ್ರಸ್ಟ್‌ಗಳನ್ನು ಹೊಣೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಎಚ್ಚರಿಕೆ ನೀಡಿದರು.
ತುಮಕೂರು (ಅ.20): ಯಾವುದೇ ಧಾರ್ಮಿಕ ಸ್ಥಳಗಳಲ್ಲಿ ಬಾಲ್ಯ ವಿವಾಹಗಳು ನಡೆದಲ್ಲಿ ಆಯಾ ಧಾರ್ಮಿಕ ಸ್ಥಳ, ಟ್ರಸ್ಟ್‌ಗಳನ್ನು ಹೊಣೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಎಚ್ಚರಿಕೆ ನೀಡಿದರು.
ತುಮಕೂರಿನ (Tumakuru ) ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಹಿಳಾ (Women) ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಬಾಲ್ಯ ವಿವಾಹ ನಿಷೇಧ ಕಾಯ್ದೆ ಯೋಜನೆಯಡಿ ಜಿಲ್ಲೆಯ ಮುಜರಾಯಿ ದೇವಸ್ಥಾನ ಸೇರಿದಂತೆ ಯಾವುದೇ ಧಾರ್ಮಿಕ ಸ್ಥಳಗಳಲ್ಲಿ ಬಾಲ್ಯ ವಿವಾಹಗಳು ನಡೆಯದಂತೆ ಸೂಕ್ತ ಮುನ್ನೆಚ್ಚರಿಕೆವಹಿಸಿ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲೆಯ ಎಲ್ಲಾ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಗೆ ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಸೂಚಿಸಿದರು.
ದೇವಸ್ಥಾನಗಳಲ್ಲಾಗಲೀ, ಚಚ್‌ರ್ ಸೇರಿದಂತೆ ಯಾವುದೇ ಧಾರ್ಮಿಕ ಸ್ಥಳಗಳಲ್ಲಿ ಬಾಲ್ಯ ವಿವಾಹ ನಡೆದರೆ ಸಂಬಂಧಿಸಿದ ಟ್ರಸ್ಟ್ ಅವರೇ ಜವಾಬ್ದಾರಿಯಾಗಿರುತ್ತಾರೆ. ಬಾಲ್ಯವಿವಾಹ ನಡೆಯುವ ಮಾಹಿತಿ ಸಿಕ್ಕಲ್ಲಿ ಸ್ಥಳೀಯ ಅಂಗನವಾಡಿ ಕಾರ್ಯಕರ್ತೆಯರು ಕೂಡಲೇ ಎಚ್ಚೆತ್ತು ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೆ ತಂದು ಬಾಲ್ಯವಿವಾಹ ತಡೆಯಬೇಕು. ಗ್ರಾಮಪಂಚಾಯತಿಗಳಲ್ಲಿ ನಡೆಯುವ ಮಕ್ಕಳ ಗ್ರಾಮಸಭೆಯಲ್ಲೂ ಈ ಕುರಿತು ಚರ್ಚೆಯಾಗಬೇಕು ಎಂದು ತಿಳಿಸಿದರು.
ಸಮಾಲೋಚನೆ ಮೂಲಕ ಇತ್ಯರ್ಥಗೊಳಿಸಿ:
ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆಯಡಿ ಜಿಲ್ಲೆಯ ವಿವಿಧ ಸಾಂತ್ವನ ಕೇಂದ್ರಗಳಲ್ಲಿ ದಾಖಲಾಗುವ ಪ್ರಕರಣಗಳನ್ನು ನ್ಯಾಯಾಲಯದ ಹಂತದವರೆಗೆ ಹೋಗಲು ಬಿಡದೇ, ಸಮಾಲೋಚನೆ ನಡೆಸುವುದರ ಮೂಲಕ ಪ್ರಕರಣಗಳನ್ನು ಇತ್ಯರ್ಥಗೊಳಿಸುವತ್ತ ಆದ್ಯತೆ ನೀಡಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.
ವರದಕ್ಷಿಣೆ ವಿರೋಧಿ ಕಾಯ್ದೆ:
ವರದಕ್ಷಿಣೆ ನಿಷೇಧ ಕಾಯ್ದೆಯಡಿ 2022-23ನೇ ಸಾಲಿನ ಸೆಪ್ಟೆಂಬರ್-2022ರ ಅಂತ್ಯಕ್ಕೆ ದಾಖಲಾದ ಪ್ರಕರಣಗಳ ಕುರಿತು ಮಾತನಾಡಿದ ಅವರು, ಈವರೆಗೆ 27 ಪ್ರಕರಣಗಳು ದಾಖಲಾಗಿದ್ದು, 6 ಪ್ರಕರಣಗಳು ವಿಲೇವಾರಿಯಾಗಿ 21 ಪ್ರಕರಣಗಳು ಬಾಕಿ ಇರುತ್ತವೆ. ವರದಕ್ಷಿಣೆ ನಿಷೇಧ ಕಾಯ್ದೆಯಡಿ ದಾಖಲಾಗುವ ಪ್ರಕರಣಗಳನ್ನು ಕೂಡಲೇ ಇತ್ಯರ್ಥಗೊಳಿಸಿ ಸಂತ್ರಸ್ತರಿಗೆ ನ್ಯಾಯ ದೊರಕಿಸಿಕೊಡಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು ಎಂದು ತಿಳಿಸಿದರು.
ಪೌಷ್ಟಿಕ ಆಹಾರ ಕಾರ್ಯಕ್ರಮ:
ಪೌಷ್ಟಿಕ ಆಹಾರ ಕಾರ್ಯಕ್ರಮದಡಿ ತೀವ್ರ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ಆರೋಗ್ಯ ತಪಾಸಣೆ ನಡೆಸಿ ಹಾಲು, ಮೊಟ್ಟೆ, ಬಹುಮಿಶ್ರಿತ ಬಹುಧಾನ್ಯ ನ್ಯೂಟ್ರಿಮಿಕ್ಸ್‌ಗಳನ್ನು ನೀಡಿ ಮಕ್ಕಳನ್ನು ಆರೋಗ್ಯವಂತರನ್ನಾಗಿಸಬೇಕು. ಈ ನಿಟ್ಟಿನಲ್ಲಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಸೂಚಿಸಿದರು.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ನ್ಯಾಯಾಧೀಶರಾದ ನೂರುನ್ನೀಸ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಕೆ ವಿದ್ಯಾಕುಮಾರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಎಂ.ಎಸ್.ಶ್ರೀಧರ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಪವಿತ್ರಾ ಸೇರಿದಂತೆ ಜಿಲ್ಲೆಯ ಎಲ್ಲಾ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಸಭೆಯಲ್ಲಿದ್ದರು.
ಸಖಿ ಒನ್‌ಸ್ಟಾಪ್ ಸೆಂಟರ್:
ಸಖಿ ಒನ್ ಸ್ಟಾಪ್ ಸೆಂಟರ್ ಯೋಜನೆಯಡಿ ಅತ್ಯಾಚಾರ/ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತ ಮಹಿಳೆಯರಿಗೆ ಮತ್ತು ಮಕ್ಕಳಿಗೆ ಒಂದೇ ಸೂರಿನಡಿ ಸಮಾಲೋಚನೆ, ವೈದ್ಯಕೀಯ, ಕಾನೂನು ಸಲಹೆ, ಪೊಲೀಸ್ ನೆರವನ್ನು ಒದಗಿಸಲಾಗುತ್ತಿದೆ ಎಂದು ಡೀಸಿ ತಿಳಿಸಿದರು. ಮಹಿಳಾ ಸ್ವೀಕಾರ ಕೇಂದ್ರದಡಿ ನಿರಾಶ್ರಿತ, ರಕ್ಷಣೆ ಕೋರಿ ಬರುವ, ತೊಂದರೆಗೀಡಾದ, ಸ್ವ ಇಚ್ಛೆಯಿಂದ ಬಂದ, ಕೌಟುಂಬಿಕ ದೌರ್ಜನ್ಯಕ್ಕೆ ಒಳಗಾದ ಮಹಿಳೆಯರನ್ನು ದಾಖಲು ಮಾಡಿಕೊಂಡು ಮಹಿಳೆಯರಿಗೆ ಕೌಶಲ್ಯ ತರಬೇತಿ ನೀಡುವುದು ಮತ್ತು ಆಪ್ತ ಸಮಾಲೋಚನೆ ನಡೆಸುವ ಮೂಲಕ ಪುನರ್ವಸತಿ ಕಲ್ಪಿಸುವುದು ಸಂಸ್ಥೆಯ ಉದ್ದೇಶವಾಗಿದೆ ಎಂದು ತಿಳಿಸಿದರು.
ಬಾಕ್ಸ -2
ಸಾಧಾರ ಗೃಹ ಯೋಜನೆ:
ಸ್ವಾಧಾರ ಗೃಹ ಯೋಜನೆಯಡಿ ಸಂಕಷ್ಟದಲ್ಲಿರುವ ಮಹಿಳೆಯರು ಗೌರವಯುತವಾಗಿ ಜೀವನ ನಡೆಸಲು ಹಾಗೂ ಆರ್ಥಿಕ ಹಾಗೂ ಸಾಮಾಜಿಕ ಭದ್ರತೆಯಿಂದ ಇರಲು ಅನುಕೂಲವಾಗುವಂತೆ ಊಟ, ವಸತಿ, ಬಟ್ಟೆ, ವೈದ್ಯಕೀಯ ಚಿಕಿತ್ಸೆ, ಕಾನೂನು ಸಲಹೆ, ಆಪ್ತ ಸಮಾಲೋಚನೆಯನ್ನು ಒದಗಿಸಲು ಹಾಗೂ ಪುನರ್ವಸತಿಗೊಳಿಸಲು ಪ್ರತಿ ಜಿಲ್ಲೆಯಲ್ಲಿಯೂ ಸ್ವಾಧಾರ ಗೃಹ ಯೋಜನೆಯನ್ನು ಸ್ವಯಂ ಸೇವಾ ಸಂಸ್ಥೆಗಳ ಮೂಲಕ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಪಾಟೀಲ ಹೇಳಿದರು.