ದೇವನಹಳ್ಳಿ ತಾಲ್ಲೂಕಿನ ಬೈಚಾಪುರ-ಬೆಟ್ಟಕೋಟೆ ರಸ್ತೆಯಲ್ಲಿ ನಡೆದ ಭೀಕರ ಅಪಘಾತದಲ್ಲಿ ಮೂವರು ಕಾಲೇಜು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಬೈಕ್‌ನಲ್ಲಿ ತೆರಳುತ್ತಿದ್ದ ವಿದ್ಯಾರ್ಥಿಗಳು ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಬೈಚಾಪುರ–ಬೆಟ್ಟಕೋಟೆ ನಡುವಿನ ರಸ್ತೆ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿ, ಮೂವರು ಕಾಲೇಜು ವಿದ್ಯಾರ್ಥಿಗಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಶನಿವಾರ ನಡೆದಿದೆ. ಬೈಕ್ ಮತ್ತು ಟಿಪ್ಪರ್ ಲಾರಿ ನಡುವೆ ನಡೆದ ಈ ಅಪಘಾತದ ತೀವ್ರತೆಯಿಂದಾಗಿ ಮೃತರ ದೇಹಗಳು ಛಿದ್ರ ಛಿದ್ರವಾಗಿ ಬಿದ್ದಿದ್ದು ಈ ಸನ್ನಿವೇಶ ಮನಕಲಕುವ ದೃಶ್ಯವಾಗಿತ್ತು.

Add Asianetnews Kannada as a Preferred SourcegooglePreferred

ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಗಳು

ಮೃತರು ಹುಣಸಮಾರೇನಹಳ್ಳಿ ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಮೂವರು ವಿದ್ಯಾರ್ಥಿಗಳು ಎಂದು ತಿಳಿದುಬಂದಿದೆ. ದೇವನಹಳ್ಳಿಯಿಂದ ಬೂದಿಗೆರೆ ಕಡೆಗೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ, ನಿಯಂತ್ರಣ ತಪ್ಪಿದ ಬೈಕ್ ರಸ್ತೆ ಡಿವೈಡರ್‌ಗೆ ಡಿಕ್ಕಿ ಹೊಡೆದು, ಎದುರಿನಿಂದ ಬರುತ್ತಿದ್ದ ಟಿಪ್ಪರ್ ಲಾರಿಗೆ ಢಿಕ್ಕಿ ಹೊಡೆದಿದೆ. ಪರಿಣಾಮ ಮೂವರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ವೇಗದ ಚಾಲನೆ ಅಪಘಾತಕ್ಕೆ ಕಾರಣವಾಯ್ತಾ?

ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ದೇವನಹಳ್ಳಿ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಪಘಾತದಿಂದ ರಸ್ತೆ ಮೇಲೆ ಬಿದ್ದಿದ್ದ ಮೃತದೇಹಗಳನ್ನು ಪೊಲೀಸರು ಸ್ಥಳೀಯ ಆಸ್ಪತ್ರೆಗೆ ರವಾನಿಸಿದರು. ಅಪಘಾತದ ನಂತರ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದ್ದು, ಪೊಲೀಸರು ಸಂಚಾರವನ್ನು ನಿಯಂತ್ರಿಸಿದರು. ಪ್ರಾಥಮಿಕ ತನಿಖೆಯಲ್ಲಿ ವೇಗ ಹಾಗೂ ನಿಯಂತ್ರಣ ತಪ್ಪಿದ ಚಾಲನೆಯೇ ಅಪಘಾತಕ್ಕೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಈ ಕುರಿತು ದೇವನಹಳ್ಳಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಮುಂದುವರೆದಿದೆ. ಈ ದುರ್ಘಟನೆ ದೇವನಹಳ್ಳಿ ಪ್ರದೇಶದಲ್ಲಿ ಶೋಕದ ವಾತಾವರಣ ಮೂಡಿಸಿದ್ದು, ಮೃತ ವಿದ್ಯಾರ್ಥಿಗಳ ಕುಟುಂಬಗಳಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ.