ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ಬಳಿ ಎರಡು ಕಾರುಗಳ ನಡುವೆ ನಡೆದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆಂಧ್ರ ಮೂಲದ ಸಾಫ್ಟ್‌ವೇರ್ ಇಂಜಿನಿಯರ್ ಕುಟುಂಬ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು, ಮಕ್ಕಳು ಸೇರಿದಂತೆ ಹಲವರು ಗಾಯಗೊಂಡಿದ್ದಾರೆ.

ತುಮಕೂರು (ಜೂ.04): ತುಮಕೂರು ಜಿಲ್ಲೆಯ ಗಡಿಭಾಗದಲ್ಲಿ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದ್ದು, ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ದುರ್ಮರಣಕ್ಕೀಡಾಗಿರುವ ಘಟನೆ ಬೆಳಕಿಗೆ ಬಂದಿದೆ. ಎರಡು ಕಾರುಗಳ ನಡುವೆ ನಡೆದ ಈ ಮುಖಾಮುಖಿ ಡಿಕ್ಕಿಯ ರಭಸಕ್ಕೆ ಇಬ್ಬರು ಮಕ್ಕಳು ಸೇರಿದಂತೆ ಮೂವರು ತೀವ್ರವಾಗಿ ಗಾಯಗೊಂಡಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮೃತರ ಹಿನ್ನೆಲೆ ಮತ್ತು ಅಪಘಾತದ ವಿವರ:

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಪೊಲೀಸ್ ಠಾಣಾ ವ್ಯಾಪ್ತಿಯ ಕೆಂಕೆರೆ ಬಳಿ ಈ ಭೀಕರ ದುರಂತ ನಡೆದಿದೆ. ಮೃತ ದುರ್ದೈವಿಗಳನ್ನು ಆಂಧ್ರಪ್ರದೇಶದ ಆದೋನಿ ಮೂಲದ ಸಾಫ್ಟ್‌ವೇರ್ ಇಂಜಿನಿಯರ್ ರವಿ ಎಂಬುವವರ ಕುಟುಂಬಸ್ಥರು ಎಂದು ಗುರುತಿಸಲಾಗಿದೆ. ಟೆಕ್ಕಿ ರವಿ ಅವರು ತಮ್ಮ ಹೆಂಡತಿ, ತಂದೆ, ತಾಯಿ ಹಾಗೂ ಇಬ್ಬರು ಮಕ್ಕಳೊಂದಿಗೆ ಇನೋವಾ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಈ ಕುಟುಂಬವು ಹಿರಿಯೂರು ಮಾರ್ಗವಾಗಿ ಹುಳಿಯಾರು ಕಡೆಗೆ ಬರುತ್ತಿದ್ದ ವೇಳೆ ಎದುರಿನಿಂದ ಬಂದ ಓಮ್ನಿ ಕಾರು ಇನೋವಾಕ್ಕೆ ಭೀಕರವಾಗಿ ಡಿಕ್ಕಿ ಹೊಡೆದಿದೆ.

ಡಿಕ್ಕಿಯಾದ ರಭಸ ಎಷ್ಟು ತೀವ್ರವಾಗಿತ್ತೆಂದರೆ, ಕಾರು ನಿಯಂತ್ರಣ ತಪ್ಪಿ ರಸ್ತೆ ಪಕ್ಕಕ್ಕೆ ಪಲ್ಟಿಯಾಗಿದೆ. ಈ ಘೋರ ಅಪಘಾತದಲ್ಲಿ ಕಾರಿನಲ್ಲಿದ್ದ ರವಿ ಅವರ ಹೆಂಡತಿ, ತಾಯಿ ಹಾಗೂ ತಂದೆ ತೀವ್ರ ರಕ್ತಸ್ರಾವದಿಂದಾಗಿ ಘಟನಾ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಮೂವರಿಗೆ ಗಂಭೀರ ಗಾಯ, ಆಸ್ಪತ್ರೆಗೆ ರವಾನೆ:

ಇನ್ನು ಕಾರಿನಲ್ಲಿದ್ದ ಇಬ್ಬರು ಅಪ್ರಾಪ್ತ ಮಕ್ಕಳು ಹಾಗೂ ಮತ್ತೊಬ್ಬರು ಸೇರಿದಂತೆ ಒಟ್ಟು ಮೂವರಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ. ಅಪಘಾತ ನಡೆದ ತಕ್ಷಣ ಸ್ಥಳೀಯರು ಹಾಗೂ ಪೊಲೀಸರು ಗಾಯಾಳುಗಳನ್ನು ರಕ್ಷಿಸಿ ಚಿಕಿತ್ಸೆಗಾಗಿ ತುಮಕೂರು ಜಿಲ್ಲಾಸ್ಪತ್ರೆಗೆ ರವಾನಿಸಿದ್ದಾರೆ. ಇತ್ತ ಡಿಕ್ಕಿ ಹೊಡೆದ ಚಿಕ್ಕನಾಯಕನಹಳ್ಳಿಯ ಎಳನಾಡು ಮೂಲದ ಓಮ್ನಿ ಕಾರು ಚಾಲಕನಿಗೂ ಕೂಡ ಗಂಭೀರ ಗಾಯಗಳಾಗಿದ್ದು, ಆತನನ್ನು ಹೆಚ್ಚಿನ ಚಿಕಿತ್ಸೆಗಾಗಿ ಹಾಸನದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಸ್ಥಳಕ್ಕೆ ಪೊಲೀಸರ ಭೇಟಿ:

ದುರಂತದ ಸುದ್ದಿ ತಿಳಿಯುತ್ತಿದ್ದಂತೆಯೇ ಹುಳಿಯಾರು ಠಾಣೆಯ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಘಟನಾ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಸಾರ್ವಜನಿಕರ ಸಹಾಯದಿಂದ ಜರ್ಜರಿತವಾಗಿದ್ದ ಕಾರುಗಳಿಂದ ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಸದ್ಯ ಮೃತದೇಹಗಳನ್ನು ಹುಳಿಯಾರು ಸರ್ಕಾರಿ ಆಸ್ಪತ್ರೆಯ ಶವಗಾರಕ್ಕೆ ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ.

ಅಪಘಾತದ ಭೀಕರತೆಗೆ ರಸ್ತೆಯುದ್ದಕ್ಕೂ ರಕ್ತದ ಮಡುವಿನಂತಾಗಿದ್ದು, ಕಾರುಗಳು ಸಂಪೂರ್ಣ ಜಖಂಗೊಂಡಿವೆ. ಘಟನೆಗೆ ಸಂಬಂಧಿಸಿದಂತೆ ಹುಳಿಯಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮಗಳನ್ನು ಕೈಗೊಂಡಿದ್ದಾರೆ. ಆಂಧ್ರ ಮೂಲದ ಸಾಫ್ಟ್‌ವೇರ್ ಇಂಜಿನಿಯರ್ ಕುಟುಂಬದಲ್ಲಿ ನಡೆದ ಈ ಕರುಣಾಜನಕ ಘಟನೆ ಇಡೀ ಭಾಗದಲ್ಲಿ ತೀವ್ರ ಕಣ್ಣೀರು ತರಿಸಿದೆ.