ಮಧುಗಿರಿ ತಾಲ್ಲೂಕು ಪಂಚಾಯಿತಿಯಲ್ಲಿ, ನಿವೃತ್ತ ಮತ್ತು ಮೃತ ನೌಕರರ ಗಳಿಕೆ ರಜೆ ನಗದೀಕರಣದ 4.27 ಕೋಟಿ ರೂ.ಗಳನ್ನು ದುರ್ಬಳಕೆ ಮಾಡಿದ ಆರೋಪದ ಮೇಲೆ ದ್ವಿತೀಯ ದರ್ಜೆ ಸಹಾಯಕಿ ಸೌಮ್ಯ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.

ತುಮಕೂರು (ಏ.10): ಮಧುಗಿರಿ ತಾಲ್ಲೂಕು ಪಂಚಾಯಿತಿಯಲ್ಲಿ ಬರೋಬ್ಬರಿ 4.27 ಕೋಟಿ ರೂಪಾಯಿ ಸರ್ಕಾರಿ ಹಣ ದುರ್ಬಳಕೆ ಮಾಡಿಕೊಂಡಿರುವ ಗಂಭೀರ ಆರೋಪದ ಹಿನ್ನೆಲೆಯಲ್ಲಿ, ದ್ವಿತೀಯ ದರ್ಜೆ ಸಹಾಯಕಿ (SDA) ಸೌಮ್ಯ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.

Add Asianetnews Kannada as a Preferred SourcegooglePreferred

ಏನಿದು ಪ್ರಕರಣ?

ಮಧುಗಿರಿ ತಾಲ್ಲೂಕು ಪಂಚಾಯಿತಿಯಲ್ಲಿ ಎಸ್‌ಡಿಎ ಆಗಿ ಕಾರ್ಯನಿರ್ವಹಿಸುತ್ತಿದ್ದ ಸೌಮ್ಯ ಅವರು, ನಿವೃತ್ತಿ ಹೊಂದಿದ ಅಥವಾ ಮರಣ ಹೊಂದಿದ ಸರ್ಕಾರಿ ನೌಕರರ 'ಗಳಿಕೆ ರಜೆ ನಗದೀಕರಣ' (Earned Leave Encashment) ಮಂಜೂರಾತಿ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ ಎಸಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಸರ್ಕಾರದ ನಿಯಮಗಳನ್ನು ಗಾಳಿಗೆ ತೂರಿ, ಅರ್ಹ ಫಲಾನುಭವಿಗಳಿಗೆ ಸೇರಬೇಕಿದ್ದ ಹಣವನ್ನು ವಿವಿಧ ಖಾಸಗಿ ಬ್ಯಾಂಕ್ ಖಾತೆಗಳಿಗೆ ಅಕ್ರಮವಾಗಿ ವರ್ಗಾವಣೆ ಮಾಡಿರುವುದು ತನಿಖೆಯಲ್ಲಿ ಪತ್ತೆಯಾಗಿದೆ.

ತನಿಖೆಯಲ್ಲಿ ಬಯಲಾದ ಸತ್ಯ:

ಸುಮಾರು 4 ಕೋಟಿ 27 ಲಕ್ಷ ರೂಪಾಯಿಗಳಷ್ಟು ಮೊತ್ತವನ್ನು ದುರ್ಬಳಕೆ ಮಾಡಿಕೊಂಡಿರುವುದು ಜಿಲ್ಲಾ ಪಂಚಾಯಿತಿ ಅಧಿಕಾರಿಗಳು ನಡೆಸಿದ ಪ್ರಾಥಮಿಕ ತನಿಖೆಯಲ್ಲಿ ಮೇಲ್ನೋಟಕ್ಕೆ ಸಾಬೀತಾಗಿದೆ. ಇಲಾಖಾ ತನಿಖೆಯ ವೇಳೆ ಈ ಅಕ್ರಮದ ಆಳ ಮತ್ತು ವಿಸ್ತಾರ ಬೆಳಕಿಗೆ ಬಂದಿದ್ದು, ಸೌಮ್ಯ ಅವರು ವ್ಯವಸ್ಥಿತವಾಗಿ ಹಣವನ್ನು ಬೇರೆ ಬೇರೆ ಖಾತೆಗಳಿಗೆ ವರ್ಗಾಯಿಸಿರುವುದು ಪತ್ತೆಯಾಗಿದೆ.

ಅಮಾನತು ಆದೇಶ:

ಈ ಗಂಭೀರ ಆರ್ಥಿಕ ಶಿಸ್ತು ಉಲ್ಲಂಘನೆ ಮತ್ತು ಭ್ರಷ್ಟಾಚಾರದ ಹಿನ್ನೆಲೆಯಲ್ಲಿ, ತುಮಕೂರು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ (CEO) ಅಶ್ವಿಜಾ ಬಿ.ವಿ. ಅವರು ಸೌಮ್ಯ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿ ಆದೇಶಿಸಿದ್ದಾರೆ. ಸರ್ಕಾರದ ಹಣವನ್ನು ಸ್ವಂತ ಲಾಭಕ್ಕೆ ಬಳಸಿಕೊಂಡಿರುವ ಈ ಪ್ರಕರಣ ಜಿಲ್ಲಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ. ಸದ್ಯ ಪ್ರಕರಣದ ಬಗ್ಗೆ ಹೆಚ್ಚಿನ ತನಿಖೆ ಮುಂದುವರಿದಿದ್ದು, ಈ ಅಕ್ರಮದಲ್ಲಿ ಇನ್ನೂ ಯಾರಾದರೂ ಭಾಗಿಯಾಗಿದ್ದಾರೆಯೇ ಎಂಬ ಬಗ್ಗೆ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.