ಉಡುಪಿ(ಫೆ.01): ಕೊರೊನಾ ವೈರಸ್‌ ಬಗ್ಗೆ ಸಾರ್ವಜನಿಕರು ಯಾವುದೇ ವದಂತಿಗಳಿಗೆ ಕಿವಿಗೊಟ್ಟು ಆತಂಕ ಅಥವಾ ಭಯಪಡುವ ಅಗತ್ಯವಿಲ್ಲ, ಆದರೆ ರೋಗದ ಲಕ್ಷಣಗಳನ್ನು ತಿಳಿದುಕೊಂಡು ಈ ಬಗ್ಗೆ ಎಚ್ಚರ ಹೊಂದಿರಬೇಕು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್‌ ತಿಳಿಸಿದ್ದಾರೆ.

ಅವರು ಶುಕ್ರವಾರ, ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಆರೋಗ್ಯ ಇಲಾಖೆಯ ಜಿಲ್ಲಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕರ್ನಾಟಕದಲ್ಲಿ ಇದುವರೆಗೂ ಕೊರೊನಾ ವೈರಸ್‌ ಸೋಂಕಿತ ಯಾವುದೇ ಪ್ರಕರಣ ವರದಿಯಾಗಿಲ್ಲ, ಆದರೆ ನೆರೆಯ ಕೇರಳದಲ್ಲಿ ಈಗಾಗಲೇ ಪ್ರಕರಣ ಪತ್ತೆಯಾಗಿರುವುದರಿಂದ ಜಿಲ್ಲೆಯಲ್ಲಿ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ದೇಶಕ್ಕೊಂದೇ ಮೀನುಗಾರಿಕಾ ನೀತಿ ಜಾರಿ..?

ವಿದೇಶದಿಂದ ಅದರಲ್ಲೂ ಚೀನಾದಿಂದ ಆಗಮಿಸುವ ಜಿಲ್ಲೆಯ ಸಾರ್ವಜನಿಕರು ಸೂಕ್ತ ವೈದ್ಯಕೀಯ ಪರೀಕ್ಷೆ ಮಾಡಿಸಿಕೊಳ್ಳುವಂತೆ ಹಾಗೂ ರೋಗ ಲಕ್ಷಣ ಕಂಡು ಬಂದಲ್ಲಿ ಕೂಡಲೇ ಆರೋಗ್ಯ ಇಲಾಖೆಗೆ ಮಾಹಿತಿ ನೀಡುವಂತೆ ತಿಳಿಸಿದರು.

ಕೊರೊನಾ ವೈರಸ್‌ ಹರಡುವುದನ್ನು ತಡೆಯುವ ಕುರಿತಂತೆ ರಾಜ್ಯ ಆರೋಗ್ಯ ಇಲಾಖೆಯಿಂದ ತುರ್ತು ಕಾರ್ಯಪಡೆ ರಚಿಸುವಂತೆ ಸೂಚನೆ ಬಂದಿದ್ದು, ಜಿಲ್ಲೆಯಲ್ಲಿ ಈಗಾಗಲೇ ತುರ್ತು ಕಾರ್ಯಪಡೆ ರಚಿಸಲು ಕ್ರಮ ಕೈಗೊಳ್ಳಲಾಗಿದೆ. ಮಣಿಪಾಲದ ಆಸ್ಪತ್ರೆಯ ವೈದ್ಯರು ಸೇರಿದಂತೆ ವಿವಿಧ ಖಾಸಗಿ ವೈದ್ಯಕೀಯ ಸಂಸ್ಥೆಗಳ ಮುಖ್ಯಸ್ಥರೊಂದಿಗೆ ಸಭೆ ನಡೆಸಲಾಗುತ್ತಿದೆ.

ಆಗುಂಬೆಯಲ್ಲಿ 5 ವರ್ಷದ ಬಾಲಕಿ ಗ್ರೇಟ್‌ ಎಸ್ಕೇಪ್‌!

ಜಿಲ್ಲಾದ್ಯಂತ ವ್ಯಾಪಕ ಅರಿವು ಕಾರ್ಯಕ್ರಮಗಳನ್ನು ಆಯೋಜಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುಧೀರ್‌ ಚಂದ್ರ ಸೂಡಾ ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ರೋಗವಾಹಕ ನಿಯಂತ್ರಣಾಧಿಕಾರಿ ಡಾ. ಪ್ರಶಾಂತ್‌ ಭಟ್‌, ಆರ್‌ಸಿಎಚ್‌ ಅಧಿಕಾರಿ ಡಾ. ಎಂ.ಜಿ. ರಾಮ, ಏಡ್ಸ್‌ ನಿಯಂತ್ರಣಾಧಿಕಾರಿ ಡಾ. ಚಿದಾನಂದ ಸಂಜು, ಡಿಡಿಪಿಐ ಶೇಷ ಶಯನ ಕಾರಿಂಜ, ಆರೋಗ್ಯ ಇಲಾಖೆ ಮತ್ತು ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.Udupi dc gives guidelines to follow as people feared about Corona viruses