ಬೆಳಗಾವಿ(ಜ.16): ಇತ್ತೀಚೆಗಷ್ಟೇ ರಾಜ್ಯದ ಐದು ಪ್ರಮುಖ ವಿಮಾನ ನಿಲ್ದಾಣಗಳಿಗೆ ಐತಿಹಾಸಿಕ ಹಿನ್ನೆಲೆಯುಳ್ಳ ವ್ಯಕ್ತಿಗಳ ಹೆಸರಿಡುವಂತೆ ಆಯಾ ಜಿಲ್ಲಾಡಳಿತಕ್ಕೆ ರಾಜ್ಯ ಸರ್ಕಾರ ಪತ್ರ ಬರೆದ ಬೆನ್ನ ಹಿಂದೆಯೇ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಅವರು ಬೆಳಗಾವಿ ಜಿಲ್ಲಾಡಳಿತಕ್ಕೆ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ರಾಣಿ ಚನ್ನಮ್ಮನ ಹೆಸರಿಡುವಂತೆ ಶಿಫಾರಸು ಪತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. 

ಬೆಳಗಾವಿ, ಮೈಸೂರು, ಧಾರವಾಡ, ಮಂಗಳೂರು ಹಾಗೂ ಕಲಬುರ್ಗಿ ವಿಮಾನ ನಿಲ್ದಾಣಗಳಿಗೆ ನಾಮಕರಣ ಮಾಡುವ ಹಿನ್ನೆಲೆಯಲ್ಲಿ ಐತಿಹಾಸಿಕ ಹಿನ್ನೆಲೆಯುಳ್ಳ ವ್ಯಕ್ತಿಗಳ, ಮಹಾಪುರುಷರ ಹೆಸರುಗಳನ್ನು ಶಿಫಾರಸು ಮಾಡುವಂತೆ ಆಯಾ ಜಿಲ್ಲಾಧಿಕಾರಿಗೆ ರಾಜ್ಯ ಸರ್ಕಾರ 13-12-2019 ರಂದು ಪತ್ರ ಬರೆದಿತ್ತು. ಆದರೆ, ಈವರೆಗೂ ವಿಮಾನ ನಿಲ್ದಾಣಗಳಿಗೆ ನಾಮಕರಣ ಮಾಡುವ ಸಂಬಂಧ ಯಾವುದೇ ಹೆಸರನ್ನು ಶಿಫಾರಸು ಮಾಡಲಿಲ್ಲ. 

ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮತ್ತೆ ಜನವರಿ 7, 2020 ರಂದು ರಾಜ್ಯ ಸರ್ಕಾರದ ಮೂಲಸೌಲಭ್ಯ ಅಭಿವೃದ್ಧಿ ಇಲಾಖೆ ಅಧೀನ ಕಾರ್ಯದರ್ಶಿ ಪಾಪಣ್ಣ ಅವರು ಈ ಐದು ಜಿಲ್ಲೆಗಳ ಜಿಲ್ಲಾಧಿಕಾರಿಗೆ ನೆನಪೋಲೆ ಪತ್ರ ಬರೆದಿದ್ದಾರೆ. ಈ ಹಿಂದಿನ ಸಿದ್ದರಾಮಯ್ಯ ಸರ್ಕಾರ ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ವೀರರಾಣಿ ಕಿತ್ತೂರು ರಾಣಿ ಚನ್ನಮ್ಮನ ಹೆಸರನ್ನು ನಾಮಕರಣ ಮಾಡುವ ಸಂಬಂಧ ಕೇಂದ್ರಕ್ಕೆ ಶಿಫಾರಸು ಕಳುಹಿಸಿತ್ತು. ಆದರೆ, ಕೇಂದ್ರ ಸರ್ಕಾರ ವೀರರಾಣಿ ಕಿತ್ತೂರು ರಾಣಿ ಚನ್ನಮ್ಮನ ಹೆಸರಿನ ಶಿಫಾರಸು ತಿರಸ್ಕರಿಸಿತ್ತು. ಈ ವೇಳೆ ಜಿಲ್ಲೆಯ ಯಾರೊಬ್ಬರೂ ಈ ಬಗ್ಗೆ ಚಕಾರ ಎತ್ತಲಿಲ್ಲ. ಇದೀಗ ರಾಜ್ಯ ಸರ್ಕಾರ ಮತ್ತೆ ಐತಿಹಾಸಿಕ ಹಿನ್ನೆಲೆಯುಳ್ಳ ವ್ಯಕ್ತಿಗಳ ಹೆಸರನ್ನು ವಿಮಾನ ನಿಲ್ದಾಣಗಳಿಗೀಡುವ ಸಂಬಂಧ ಶಿಫಾರಸು ಕಳುಹಿಸುವಂತೆ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿತ್ತು. 

ಈ ಹಿನ್ನೆಲೆಯಲ್ಲಿ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಅವರ ಪತ್ರವೊಂದು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ವಿಮಾನ ನಿಲ್ದಾಣಕ್ಕೆ ವೀರರಾಣಿ ಕಿತ್ತೂರು ರಾಣಿ ಚನ್ನಮ್ಮನ ಹೆಸರಿಡುವಂತೆ ಕೋರಿದ್ದಾರೆ. 2017 ರ ಸೆಪ್ಟೆಂಬರ್ 14 ರಂದು ನಡೆದ ಸಾಂಬ್ರಾ ವಿಮಾನ ನಿಲ್ದಾಣದ ರನ್ ವೇ ಮತ್ತು ಹೊಸ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಅಂದಿನ ಸಿಎಂ ಸಿದ್ದರಾಮಯ್ಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಚನ್ನಮ್ಮ ಹೆಸರನ್ನು ಇಡುವಂತೆ ವಿಮಾನಯಾನ ಸಚಿವರಲ್ಲಿ ಮನವಿ ಮಾಡಿದ್ದರು.