ಬೆಳಗಾವಿ(ಡಿ.19): ಪೌರತ್ವ ತಿದ್ದುಪಡಿ ವಿಧೇಯಕ ಬಗ್ಗೆ ವಿರೋಧ ಪಕ್ಷಗಳು ಅಪಪ್ರಚಾರ ಮಾಡುತ್ತಿವೆ. ಶಾಂತತೆಯನ್ನು ಕಾಪಾಡಿಕೊಳ್ಳಬೇಕೆಂದು‌ ಜನರಲ್ಲಿ ಮನವಿ ಮಾಡುತ್ತೇನೆ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಹೇಳಿದ್ದಾರೆ. 

ಗುರುವಾರ ನಗರದಲ್ಲಿ ಸುವರ್ಣ ನ್ಯೂಸ್ ಜತೆ ಮಾತನಾಡಿದ ಅವರು, ಅಪ್ಘಾನಿಸ್ತಾನ, ಪಾಕಿಸ್ತಾನ, ಬಾಂಗ್ಲಾದಲ್ಲಿರುವ ಜೈನ್, ಸಿಖ್, ಪಾರ್ಸಿಗಳ ರಕ್ಷಣೆಗಾಗಿ ಈ ಕಾಯ್ದೆಯನ್ನು ತಂದಿದೆ. ಈ ಕಾಯ್ದೆಯಿಂದ ನಮ್ಮ ದೇಶದ ಯಾವುದೇ ನಾಗರಿಕರಿಗೂ ತೊಂದರೆಯಾಗುವುದಿಲ್ಲ. ಅಶಾಂತಿ ಕದಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರಕ್ಕೆ ಆಗ್ರಹಿಸುತ್ತೇನೆ ಎಂದು ತಿಳಿಸಿದ್ದಾರೆ. 

'ಕಂಡಲ್ಲಿ ಗುಂಡಿಕ್ಕಿ ಹೇಳಿಕೆಗೆ ಬದ್ಧ, ಆಸ್ತಿ-ಪಾಸ್ತಿ ಹಾನಿ ಮಾಡಿದ್ರೆ ಸುಮ್ಮನೆ ಕೂರಬೇಕಾ?'

ಯಾರೂ ಶಾಂತಿ ಕದಡುತ್ತಿದ್ದಾರೆ ಎಂಬುದು ಪೊಲೀಸರಿಗೆ ಗೊತ್ತಿದೆ, ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಈ ಹಿಂದೆ ಬೆಳಗಾವಿಯಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದರು. ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಇದೇ ವೇಳೆ ಆಗ್ರಹಿಸಿದ್ದಾರೆ. 

ದೇಶದ ಯಾವುದೇ ನಾಗರಿಕನ ಹಕ್ಕನ್ನು ಕಸಿದುಕೊಂಡಿಲ್ಲ. ಈ ದೇಶದ ಪ್ರತಿಯೊಬ್ಬ ನಾಗರಿಕನ ಹಕ್ಕು ಸುರಕ್ಷಿತವಾಗಿದೆ. ಈಗಾಗಲೇ ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮನವಿ ಮಾಡಿದ್ದಾರೆ. ಶಾಂತತೆ ಕಾಪಾಡಿಕೊಳ್ಳಲು ನಾನೂ ಸಹ ಜನರಲ್ಲಿ ಮನವಿ ಮಾಡುತ್ತೇನೆ. ಬಿಜೆಪಿ ಸರ್ಕಾರ ಇರುವ ರಾಜ್ಯಗಳಲ್ಲಿ ಈ ಕಾಯ್ದೆ  ಬಗ್ಗೆ  ಜನರಿಗೆ ತಿಳಿಸುವ ವ್ಯವಸ್ಥೆ ಮಾಡಲಾಗಿದೆ. ಬಿಜೆಪಿ ಸರ್ಕಾರ ಇರುವ ರಾಜ್ಯಗಳಲ್ಲಿ ಯಾವುದೇ ಗಲಾಟೆ ಆಗುತ್ತಿಲ್ಲ. ವಿರೋಧ ಪಕ್ಷಗಳು, ಕಾಂಗ್ರೆಸ್ ಸರ್ಕಾರ ಇರುವ ರಾಜ್ಯಗಳಲ್ಲಿ ವೋಟ್ ಬ್ಯಾಂಕ್ ರಾಜಕಾರಣ ಮಾಡುತ್ತಿವೆ ಎಂದು ವಿಪಕ್ಷಗಳ ವಿರುದ್ಧ ಹರಿಹಾಯ್ದಿದ್ದಾರೆ. 

ರೈಲ್ವೆ ಆಸ್ತಿಗೆ ಹಾನಿ ಮಾಡಿದರೆ ಕಂಡಲ್ಲಿ ಗುಂಡಿಕ್ಕಿ, ಅಂಗಡಿ ಸಲಹೆ!

ಜನರಲ್ಲಿ ಗೊಂದಲ ಸೃಷ್ಟಿ ಮಾಡದಂತೆ ವಿಪಕ್ಷಗಳಲ್ಲಿ ಮನವಿ ಮಾಡುತ್ತೇನೆ. ಸಾರ್ವಜನಿಕ ಆಸ್ತಿ ಹಾನಿ ಮಾಡುವವರ ವಿರುದ್ಧ ಕಂಡಲ್ಲಿ ಗುಂಡಿಕ್ಕಿ ಅಂತಾ ಹೇಳಿದ್ದು ನಿಜ, ಸಾರ್ವಜನಿಕ ಆಸ್ತಿಪಾಸ್ತಿ ಹಾನಿ ಮಾಡುವವರು ದೇಶದ್ರೋಹಿಗಳು ಎಂದು ತಿಳಿಸಿದ್ದಾರೆ.