ನೆರೆ ಹಾಗೂ ಪ್ರಾಕೃತಿಕ ವಿಕೋಪ ಸಂದರ್ಭಗಳಲ್ಲಿ ಪರಿಹಾರ ಕಾರ್ಯಗಳನ್ನು ತುರ್ತು ಕೈಗೊಳ್ಳಿ: ಡಿಸಿ ಕೂರ್ಮಾರಾವ್ ಸೂಚನೆ

ಮಳೆಯಿಂದ ಉಂಟಾಗುವ ನೆರೆ ಸೇರಿದಂತೆ ಪ್ರಕೃತಿ ವಿಕೋಪಗಳಲ್ಲಿ ಮಾನವ ಹಾನಿ ಹಾಗೂ ಹೆಚ್ಚಿನ ಆಸ್ತಿ ಹಾನಿ ಉಂಟಾಗದಂತೆ ತಪ್ಪಿಸಲು ಅಗತ್ಯವಿರುವ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಸೂಚನೆ ನೀಡಿದರು.

Urgently carry out relief work in case of natural disasters Says Udupi DC Kurma Rao M gvd

ಉಡುಪಿ (ಮೇ.24): ಮಳೆಯಿಂದ ಉಂಟಾಗುವ ನೆರೆ ಸೇರಿದಂತೆ ಪ್ರಕೃತಿ ವಿಕೋಪಗಳಲ್ಲಿ ಮಾನವ ಹಾನಿ ಹಾಗೂ ಹೆಚ್ಚಿನ ಆಸ್ತಿ ಹಾನಿ ಉಂಟಾಗದಂತೆ ತಪ್ಪಿಸಲು ಅಗತ್ಯವಿರುವ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಸೂಚನೆ ನೀಡಿದರು. ಅವರು ಇಂದು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಾನ್ಸೂನ್‌ನಲ್ಲಿ ಹೆಚ್ಚಿನ ಮಳೆ ಗಾಳಿ ಸೇರಿದಂತೆ ಮತ್ತಿತರ ಪ್ರಕೃತಿ ವಿಕೋಪದ ಮುನ್ಸೂಚನೆಗಳು ಈಗಾಗಲೇ ದೊರೆಯುತ್ತಿದ್ದು, ಅದಕ್ಕೆ ಅನುಗುಣವಾಗಿ ಪೂರ್ವ ತಯಾರಿಗಳನ್ನು ಮಾಡಿಕೊಳ್ಳುವುದರ ಜೊತೆಗೆ, ಕಳೆದ ವರ್ಷಗಳಲ್ಲಿ ಸಂಭವಿಸಿರುವ ನೆರೆ ಪ್ರದೇಶಗಳನ್ನು ಗುರುತಿಸಿ ಅಗತ್ಯವಿರುವ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವುದರೊಂದಿಗೆ, ವಿಕೋಪಗಳನ್ನು ನಿರಾಯಾಸವಾಗಿ ನಿಭಾಯಿಸಲು ಮುಂದಾಗಬೇಕು ಎಂದರು. 

ತಾಲೂಕು ಮಟ್ಟದಲ್ಲಿ ಮತ್ತು ಗ್ರಾಮ ಪಂಚಾಯತ್ ಮಟ್ಟದಲ್ಲಿ ಪ್ರಕೃತಿ ವಿಕೋಪ ನಿರ್ವಹಣಾ ಸಮಿತಿ ಸಭೆಗಳನ್ನು ಮಾಡುವುದರ ಜೊತೆಗೆ ಸಕಲ ಪೂರ್ವ ಸಿದ್ದತೆಗಳನ್ನು ಮಾಡಿಕೊಂಡು, ತೊಂದರೆಗೊಳಗಾದವರಿಗೆ ತಕ್ಷಣದಲ್ಲಿ ಸ್ಪಂದಿಸಲು ಮುಂದಾಗಬೇಕು ಎಂದರು. ಪ್ರತೀ ತಾಲೂಕಿನಲ್ಲಿಯೂ ಪ್ರಕೃತಿ ವಿಕೋಪಗಳನ್ನು ಯಾವ ರೀತಿಯಲ್ಲಿ ತಂಡಗಳು ಎದುರಿಸಬೇಕು ಎಂಬ ಬಗ್ಗೆ ಅಣುಕು ಪ್ರದರ್ಶನ ಅಭ್ಯಾಸಗಳನ್ನು ಕೈಗೊಳ್ಳುವುದರಿಂದ, ವಿಕೋಪ ಸಂದರ್ಭವನ್ನು ಸಮರ್ಥವಾಗಿ ಎದುರಿಸಲು ಅನುಕೂಲವಾಗುವುದರ ಜೊತೆಗೆ ತಮಗೆ ಅಗತ್ಯವಿರುವ ಸುರಕ್ಷಿತಾ ಪರಿಕರಗಳ ಉಪಯೋಗದ ಬಗ್ಗೆಯೂ ಸಹ ಅನುಭವ ದೊರೆಯಲಿದೆ ಎಂದರು. 

ಒಪ್ಪಂದ ಉಲ್ಲಂಘನೆಗೆ ಪೃಥ್ವಿ ಬಿಲ್ಡರ್ಸ್‍ಗೆ ಬಡ್ಡಿ ಸಮೇತ ಪರಿಹಾರ ಕೊಡುವಂತೆ ಆದೇಶಿಸಿದ ಗ್ರಾಹಕರ ಆಯೋಗ!

ಪ್ರಕೃತಿ ವಿಕೋಪಗಳಿಂದ ಉಂಟಾಗುವ ಹಾನಿಗೆ 48 ಗಂಟೆಯೊಳಗೆ ಪರಿಹಾರವನ್ನು ಒದಗಿಸಬೇಕು. ವಿಕೋಪಗಳಿಂದ ತೊಂದರೆ ಉಂಟಾದವರು ತಕ್ಷಣ ಸ್ಪಂದಿಸಲು ಅನುಕೂಲವಾಗುವಂತೆ ಜಿಲ್ಲಾ ಮಟ್ಟದಲ್ಲಿ ಕಂಟ್ರೋಲ್ ರೂಂ ತೆರೆಯಲಾಗಿದ್ದು, ಉಚಿತ ಸಹಾಯವಾಣಿ ಸಂಖ್ಯೆ 1077 ಅಥವಾ 0820-2574802, ಜಿಲ್ಲಾ ತುರ್ತು ಕಾರ್ಯಾಚರಣಾ ಕೇಂದ್ರಗಳನ್ನು 25 ಮೆಸ್ಕಾಂ ಗೆ ಸಂಬಂಧಪಟ್ಟ ಸಮಸ್ಯೆಗಳಿಗೆ ಸಹಾಯವಾಣಿ ಸಂಖ್ಯೆ 1912 ಅಲ್ಲದೇ ರಕ್ಷಣೆಗೆ ಸಂಬಂಧಿಸಿದಂತೆ ಸಹಾಯವಾಣಿ ಸಂಖ್ಯೆ 112 ಕ್ಕೆ ಸಾರ್ವಜನಿಕರು ಕರೆ ಮಾಡಬಹುದಾಗಿದೆ ಎಂದರು. ಮಳೆಯ ನೀರು ಸರಾಗವಾಗಿ ಹರಿದು ಹೋಗುವಂತೆ ಮಾಡಲು ನಗರ ಹಾಗೂ ಗ್ರಾಮ ಪಂಚಾಯತ್ ವ್ಯಾಪ್ತಿಗಳಲ್ಲಿ ಚರಂಡಿ ಹಾಗೂ ತೋಡುಗಳನ್ನು ಸ್ವಚ್ಛಗೊಳಿಸುವ ಕಾರ್ಯ ಕೈಗೊಳ್ಳಬೇಕು ಎಂದರು.

ಗ್ರಾಮಗಳಲ್ಲಿ ಇರುವ ತೆರೆದ ಕೆರೆಗಳು ಹಾಗೂ ನೀರಿನ ಗುಂಡಿಗಳ ಸುತ್ತ ತಡೆಬೇಲಿ ಹಾಕಿಸಿ, ಎಚ್ಚರಿಕಾ ಫಲಕಗಳನ್ನು ಅಳವಡಿಸಬೇಕು ಎಂದರು. ರಾಷ್ಟ್ರೀಯ ಹೆದ್ದಾರಿಯಲ್ಲಿ ಮಳೆ ನೀರಿನಿಂದ ವಾಹನಗಳ ಸುಗಮ ಸಂಚಾರಕ್ಕೆ  ತೊಂದರೆಯಾಗದಂತೆ ಅಗತ್ಯವಿರುವ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಬೇಕು. ಬೀದಿ ದೀಪಗಳನ್ನು ಅಳವಡಿಸಬೇಕು, ಕೆಲವು ಭಾಗಗಳಲ್ಲಿ ಮಣ್ಣು ಕುಸಿತಗಳಾಗುತ್ತವೆ ಈ ಬಗ್ಗೆ ಎಚ್ಚರವಹಿಸಬೇಕು ಎಂದ ಅವರು,  ಸಾರ್ವಜನಿಕ ದೂರುಗಳು ಬಂದಲ್ಲಿ ತಕ್ಷಣ ಸ್ಪಂದಿಸಬೇಕು ಎಂದರು. ಜಿಲ್ಲೆಯ ನಗರ ವ್ಯಾಪ್ತಿಯಲ್ಲಿ 14  ಹಾಗೂ ಗ್ರಾಮೀಣ ವ್ಯಾಪ್ತಿಯಲ್ಲಿ 32 ಟ್ಯಾಂಕರ್‌ಗಳ ಮೂಲಕ ಕುಡಿಯುವ ನೀರಿನ ಸರಬರಾಜು ಮಾಡಲಾಗುತ್ತಿದೆ ಎಂದರು. 

ಮಳೆಯ ನೀರು ಎಲ್ಲೆಂದರಲ್ಲಿ ನಿಲ್ಲುವುದರಿಂದ ಸೊಳ್ಳೆಗಳ ಉತ್ಪತ್ತಿ ಹೆಚ್ಚಾಗಿ ಸಾಂಕ್ರಮಿಕ ರೋಗಗಳು ಹರಡುವ ಸಾಧ್ಯತೆಯಿರುವ ಹಿನ್ನಲೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು, ಯಾವುದೇ ರೋಗ ಬಂದು ಚಿಕಿತ್ಸೆ ನೀಡುವ ಬದಲು ರೋಗ ಬಾರದಂತೆ ಅಗತ್ಯವಿರುವ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಸಾರ್ವಜನಿಕರಿಗೆ ಆರೋಗ್ಯ ಶಿಕ್ಷಣದ ಬಗ್ಗೆ ಅರಿವು ಮೂಡಿಸಬೇಕು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಶಾಲಾ-ಕಾಲೇಜು ಹಾಗೂ ಅಂಗನವಾಡಿಗಳು ಮುಂದಿನ ವಾರಗಳಿಂದ ಪ್ರಾರಂಭವಾಗಲಿದೆ. ಶಾಲಾ ಹಾಗೂ ಅಂಗನವಾಡಿ ಕಟ್ಟಡಗಳ ಪರಿಸ್ಥಿತಿಗಳನ್ನು ಪರಿಶೀಲಿಸಬೇಕು ಎಂದರು.

ಈಗಾಗಲೇ ಕೈಗೊಂಡಿರುವ ದುರಸ್ಥಿ ಕಾರ್ಯಗಳನ್ನು ಈ ವಾರದ ಅಂತ್ಯದ ಒಳಗೆ ಪೂರ್ಣಗೊಳಿಸಬೇಕೆಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು. ಹೊರ ಜಿಲ್ಲೆಗಳಿಂದ ಬರುವ ಪ್ರವಾಸಿಗರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಕಡಲ ತೀರಗಳಲ್ಲಿ ಎಚ್ಚರಿಕೆಯ ಸೂಚನಾ ಫಲಕಗಳನ್ನು ಅಳವಡಿಸಬೇಕು ಎಂದ ಅವರು, ಪ್ರವಾಸಿ ರಕ್ಷಣಾ ಸಿಬ್ಬಂದಿಗಳನ್ನು ನೇಮಕ ಮಾಡಬೇಕು ಎಂದರು. ರಸ್ತೆ ಬದಿಯ ಅಪಾಯಕಾರಿ ಮರಗಳನ್ನು ಶೀಘ್ರದಲ್ಲಿಯೇ ತೆರವುಗೊಳಿಸಬೇಕು. ಇತರೆ ಇಲಾಖೆಗಳ ಸಹಯೋಗದೊಂದಿಗೆ ಅಪಾಯಕಾರಿ ಮರಗಳನ್ನು ಗುರುತಿಸಿ, ಅವುಗಳನ್ನು ತೆರವುಗೊಳಿಸಲು ಸಹ ಮುಂದಾಗಬೇಕು ಎಂದು  ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಈ ಬಾರಿ 38,000 ಹೆಕ್ಟೇರ್ ಪ್ರದೇಶದಲ್ಲಿ ಭಿತ್ತನೆ ವಿಸ್ತಿರ್ಣದ ಗುರಿ ಹೊಂದಲಾಗಿದೆ. 

ಮೇಲುಕೋಟೆ ಅಭಿವೃದ್ಧಿಗೆ ಮಾಸ್ಟರ್‌ ಪ್ಲಾನ್‌ ಮಾಡಿ: ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಶಾಸಕ ದರ್ಶನ್‌

ರೈತರಿಗೆ ಅಗತ್ಯವಿರುವ ಭಿತ್ತನೆ ಬೀಜದ ದಾಸ್ತಾನು ಇಟ್ಟುಕೊಂಡು ಯಾವುದೇ ರೀತಿಯ ಕೊರತೆಯಾಗದಂತೆ ವಿತರಣೆಗೆ ಕ್ರಮ ಕೈಗೊಳ್ಳಬೇಕು.  ರಸಗೊಬ್ಬರ ದಾಸ್ತಾನು ಇರುವಂತೆ ಮುನ್ನೆಚ್ಚರಿಕೆ ವಹಿಸಬೇಕೆಂದು ಕೃಷಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಮಳೆ ಗಾಳಿಯಿಂದ ವಿದ್ಯುತ್ ಕಂಬಗಳು ಹಾಗೂ ಪ್ರಸರಣ ತಂತಿಗಳು ಹಾನಿ ಉಂಟಾದಾಗ ಕೂಡಲೇ ದುರಸ್ತಿ ಕಾರ್ಯಗಳನ್ನು ಕೈಗೊಂಡು ವಿದ್ಯುತ್ ಸಂಪರ್ಕ ಕಲ್ಪಿಸಬೇಕು ಎಂದರು. ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಹಾಕೆ ಅಕ್ಷಯ್ ಮಚ್ಚೀಂದ್ರ, ತರಬೇತಿ ನಿರತ ಐ.ಎ.ಎಸ್ ಅಧಿಕಾರಿ ಯತೀಶ್, ಅಪರ ಜಿಲ್ಲಾಧಿಕಾರಿ ಮದನ್ ಮೋಹನ್, ತಾಲೂಕಿನ ತಹಶೀಲ್ದಾರ್‌ಗಳು, ಸ್ಥಳೀಯ ಸಂಸ್ಥೆಗಳ ಮುಖ್ಯ ಅಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Latest Videos
Follow Us:
Download App:
  • android
  • ios