ಕೊಂಕಣ ರೈಲ್ವೆಯ ಸಮಗ್ರ ಅಭಿವೃದ್ಧಿಗೆ ಕೇಂದ್ರ ಸರ್ಕಾರ ₹7,760 ಕೋಟಿ ವಿಶೇಷ ಅನುದಾನ ನೀಡಿದೆ. ಈ ಬಗ್ಗೆ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಹರ್ಷ ವ್ಯಕ್ತಪಡಿಸಿದ್ದು, ರೈಲ್ವೆ ಸಚಿವರನ್ನು ಭೇಟಿಯಾಗಿ ಇತರ ಪ್ರಮುಖ ಯೋಜನೆಗಳ ತ್ವರಿತ ಅನುಷ್ಠಾನಕ್ಕೆ ಮನವಿ ಮಾಡಿದ್ದಾರೆ.

ಉತ್ತರ ಕನ್ನಡ (ಸೆ.20): ಕರಾವಳಿ ಹಾಗೂ ಮಲೆನಾಡು ಭಾಗದ ಜೀವನಾಡಿಯಾಗಿರುವ ಕೊಂಕಣ ರೈಲ್ವೆಯ ಸಮಗ್ರ ಅಭಿವೃದ್ಧಿಗೆ ₹7,760 ಕೋಟಿ ವಿಶೇಷ ಅನುದಾನ ನೀಡಲು ಕೇಂದ್ರ ಸಚಿವ ಸಂಪುಟ ಅಂತಿಮ ಅನುಮೋದನೆ ನೀಡಿರುವುದಕ್ಕೆ ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಹರ್ಷ ವ್ಯಕ್ತಪಡಿಸಿದ್ದಾರೆ.

ಈ ಭಾಗದ ಸಂಸದನಾಗಿ, ಕರಾವಳಿ ಭಾಗದ ಜನರ ದೀರ್ಘಕಾಲದ ಕನಸು ನನಸಾಗುತ್ತಿರುವುದು ಸಂತಸ ತಂದಿದೆ. ವಿಶೇಷ ಅನುದಾನದಿಂದ ಕೊಂಕಣ ರೈಲ್ವೆ ವ್ಯಾಪ್ತಿಯ ಮೂಲಸೌಕರ್ಯಗಳು ಬಲಪಡಲಿದ್ದು, ಪ್ರಯಾಣಿಕರ ಸುಗಮ ಹಾಗೂ ಸುರಕ್ಷಿತ ಸಂಚಾರಕ್ಕೆ ಅನುಕೂಲವಾಗಲಿದೆ. ಅಲ್ಲದೆ, ಆರ್ಥಿಕ ಪ್ರಗತಿ, ವಾಣಿಜ್ಯ ಚಟುವಟಿಕೆಗಳು ಹಾಗೂ ಪ್ರವಾಸೋದ್ಯಮದ ಬೆಳವಣಿಗೆಗೂ ಉತ್ತೇಜನ ದೊರೆಯಲಿದೆ ಎಂದು ಅವರು ತಿಳಿಸಿದ್ದಾರೆ.

ಈ ಮಹತ್ವದ ನಿರ್ಧಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹಾಗೂ ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ಅವರಿಗೆ ಜನತೆಯ ಪರವಾಗಿ ಅಭಿನಂದನೆ ಹಾಗೂ ಧನ್ಯವಾದ ಸಲ್ಲಿಸುವುದಾಗಿ ಕಾಗೇರಿ ಹೇಳಿದ್ದಾರೆ.

ರೈಲ್ವೆ ಸಚಿವರ ಭೇಟಿ: ಪ್ರಮುಖ ಯೋಜನೆಗಳಿಗೆ ಮನವಿ

ನವದೆಹಲಿಯಲ್ಲಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿ ಮಾಡಿದ ಕಾಗೇರಿ, ಕ್ಷೇತ್ರದ ಪ್ರಮುಖ ಬೇಡಿಕೆಗಳು ಹಾಗೂ ಬಾಕಿ ಇರುವ ರೈಲ್ವೆ ಯೋಜನೆಗಳ ಕುರಿತು ಚರ್ಚಿಸಿ ಮನವಿ ಪತ್ರ ಸಲ್ಲಿಸಿದರು.

ತಾಳಗುಪ್ಪ–ಹುಬ್ಬಳ್ಳಿ ರೈಲ್ವೆ ಯೋಜನೆಗೆ ವೇಗ ನೀಡಬೇಕು. ಅಂಕೋಲಾ–ಹುಬ್ಬಳ್ಳಿ, ತಾಳಗುಪ್ಪ–ಹೊನ್ನಾವರ ಹಾಗೂ ಧಾರವಾಡ–ಕಿತ್ತೂರು–ಬೆಳಗಾವಿ ರೈಲ್ವೆ ಯೋಜನೆಗಳನ್ನು ಆದ್ಯತೆಯ ಮೇರೆಗೆ ತ್ವರಿತವಾಗಿ ಅನುಷ್ಠಾನಗೊಳಿಸಬೇಕು ಎಂದು ಮನವಿ ಮಾಡಿದರು.

ಕೊಂಕಣ ರೈಲ್ವೆ ಮಾರ್ಗದಲ್ಲಿ ಸಂಚರಿಸುತ್ತಿರುವ ಆಯ್ದ ಪ್ರಮುಖ ರೈಲುಗಳ ಮಾರ್ಗವನ್ನು ಸಾರ್ವಜನಿಕರು ಹಾಗೂ ಪ್ರಯಾಣಿಕರ ಹಿತದೃಷ್ಟಿಯಿಂದ ವಿಸ್ತರಿಸಬೇಕು. ಕೇಂದ್ರದ ಅಮೃತ್ ಭಾರತ್ ಸ್ಟೇಷನ್ ಯೋಜನೆಯಡಿ ಖಾನಾಪುರ ರೈಲ್ವೆ ನಿಲ್ದಾಣವನ್ನು ಸೇರ್ಪಡೆಗೊಳಿಸಿ, ಆಧುನಿಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಬೇಕು. ಖಾನಾಪುರದಲ್ಲಿ ಪ್ರಮುಖ ರೈಲುಗಳಿಗೆ ನಿಲುಗಡೆ ಕಲ್ಪಿಸಬೇಕು ಎಂದು ಅವರು ಒತ್ತಾಯಿಸಿದರು.

ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವರು, ಉಲ್ಲೇಖಿಸಲಾದ ಯೋಜನೆಗಳು ಹಾಗೂ ಬೇಡಿಕೆಗಳ ಕುರಿತು ಅಧಿಕಾರಿಗಳ ಮಟ್ಟದಲ್ಲಿ ತ್ವರಿತ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ ಎಂದು ಕಾಗೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.