Asianet Suvarna News Asianet Suvarna News

ವಿಜಯಪುರ ಮಹಾನಗರ ಪಾಲಿಕೆ ಚುನಾವಣೆ, ಮತಗಟ್ಟೆ ವ್ಯಾಪ್ತಿಯ 100 ಮೀ.ಪ್ರದೇಶದಲ್ಲಿ ನಿಷೇಧಾಜ್ಞೆ

ವಿಜಯಪುರ ಮಹಾನಗರ ಪಾಲಿಕೆಗೆ ಇದೇ ಅಕ್ಟೋಬರ್ 28 ರಂದು ಮತದಾನ ನಡೆಯಲಿದ್ದು,   ಮತಗಟ್ಟೆ ವ್ಯಾಪ್ತಿಯ 100 ಮೀ. ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ದಂಡಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಅವರು ಆದೇಶ ಹೊರಡಿಸಿದ್ದಾರೆ.

Vijayapura Corporation Election on october 28th gow
Author
First Published Oct 25, 2022, 10:41 PM IST

ವರದಿ: ಷಡಕ್ಷರಿ‌ ಕಂಪೂನವರ್, ಏಷ್ಯಾನೆಟ್ ಸುವರ್ಣ ನ್ಯೂಸ್

ವಿಜಯಪುರ (ಅ.25) : ವಿಜಯಪುರ ಮಹಾನಗರ ಪಾಲಿಕೆಗೆ ಇದೇ ಅಕ್ಟೋಬರ್ 28 ರಂದು ಮತದಾನ ನಡೆಯಲಿದ್ದು, ಸುವ್ಯವಸ್ಥಿತವಾಗಿ ಮತದಾನ ನಡೆಸುವ ಹಿನ್ನೆಲೆಯಲ್ಲಿ ಮತಗಟ್ಟೆ ವ್ಯಾಪ್ತಿಯ 100 ಮೀ. ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ದಂಡಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಅವರು ಆದೇಶ ಹೊರಡಿಸಿದ್ದಾರೆ. ವಿಜಯಪುರ ಮಹಾನಗರ ಪಾಲಿಕೆಯ 35 ವಾರ್ಡುಗಳಿಗೆ ಅಕ್ಟೋಬರ್ 28ರಂದು ಮತದಾನ ನಡೆಯಲಿದ್ದು, ಮತಗಟ್ಟೆ ವ್ಯಾಪ್ತಿಯ 100 ಮೀಟರ್ ಪ್ರದೇಶವನ್ನ ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದೆ.  28-10-2022ರಂದು ಮತದಾನ ಮುಕ್ತಾಯವಾಗುವವರೆಗೂ ನಿಷೇಧಿತ ಪ್ರದೇಶವೆಂದು ಕೆಲವು ಷರತ್ತುಗಳನ್ನು ವಿಧಿಸಿ ನಿಷೇಧಾಜ್ಞೆ ಹೊರಡಿಸಿ ಆದೇಶಿಸಲಾಗಿದೆ. ಮತಗಟ್ಟೆಗಳ ವ್ಯಾಪ್ತಿಯಲ್ಲಿ 100 ಮೀಟರ್‌ಗಳ ಅಂತರದ ಪ್ರದೇಶದೊಳಗೆ ಪ್ರಚಾರಕ್ಕೆ ಸಂಬಂಧಿಸಿದ ಪೋಸ್ಟರ್, ಬ್ಯಾನರ್ ಗಳನ್ನು ಬಳಸುವಂತಿಲ್ಲ ಹಾಗೂ ಮತಕ್ಕಾಗಿ ಪ್ರಚಾರ ಮಾಡುವುದನ್ನು ನಿಷೇಧಿಸಲಾಗಿದೆ. ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಝರಾಕ್ಸ್ ಅಂಗಡಿ, ಬುಕ್‍ಸ್ಟಾಲ್, ಸೈಬರ್ ಕೆಫೆಗಳನ್ನು ತೆರೆಯದಂತೆ ನಿರ್ಬಂಧಿಸಲಾಗಿದೆ. ಮತಗಟ್ಟೆ ವ್ಯಾಪ್ತಿಯಲ್ಲಿ 5ಕ್ಕಿಂತ ಹೆಚ್ಚು ಜನರು ಗುಂಪುಗೂಡಿ ಓಡಾಡುವುದನ್ನು ನಿಷೇಧಿಸಲಾಗಿದೆ. ಮತದಾನ ದಿನದಂದು ಮತದಾರರನ್ನು ವಾಹನಗಳಲ್ಲಿ ಕರೆದುಕೊಂಡು ಬರುವುದು, ಅಲ್ಲಿಂದ ಕರೆದುಕೊಂಡು ಹೋಗುವುದು ನಿಷೇಧಿಸಲಾಗಿದೆ. 

ಸಭೆ, ಸಮಾರಂಭ, ಮೆರವಣಿಗೆಗಳಿಗೆ ಬ್ರೇಕ್..! 
ಸಭೆ, ಸಮಾರಂಭ, ಮೆರವಣಿಗೆ ಹಾಗೂ ಧ್ವನಿವರ್ಧಕಗಳ ಬಳಕೆ ಮತ್ತು ಪಟಾಕಿ ಸಿಡಿಸುವುದನ್ನು ನಿಷೇಧಿಸಲಾಗಿದೆ. ಮೊಬೈಲ್ ಫೋನ್, ಕಾರ್ಡಲೆಸ್ ಫೋನ್ ಅಥವಾ ಇನ್ನಿತರೆ ಇಲೆಕ್ಟ್ರಾನಿಕ್ ಉಪಕರಣಗಳನ್ನು ಬಳಸಲು ನಿಷೇಧ ಹೇರಲಾಗಿದೆ. ಆದರೆ ಚುನಾವಣಾ ಕಾರ್ಯದಲ್ಲಿ ಜಿಲ್ಲಾ ಚುನಾವಣಾಧಿಕಾರಿ ಅಥವಾ ಚುನಾವಣಾಧಿಕಾರಿಗಳಿಂದ ಅನುಮತಿ ಪಡೆದ ಅಧಿಕಾರಿ-ಸಿಬ್ಬಂದಿಗಳು ಬಳಕೆ ಮಾಡಬಹುದಾಗಿದೆ.

ಮಾರಕಾಸ್ತ್ರ ಹಿಡಿದು ಅಡ್ಡಾಡಿದ್ರೆ ಕ್ರಮ..!
ಶಸ್ತ್ರ, ಬಡಿಗೆ, ಬರ್ಚಿ, ಖಡ್ಗ, ಗದೆ, ಬಂದೂಕು, ಚೂರಿ, ಲಾಠಿ, ಡೊಣ್ಣೆ, ಚಾಕು ಅಥವಾ ದೇಹಕ್ಕೆ ಅಪಾಯವನ್ನುಂಟು ಮಾಡಬಹುದಾದ ಯಾವುದೇ ಮಾರಕಾಸ್ತ್ರಗಳನ್ನು ತೆಗೆದುಕೊಂಡು ಹೋಗುವುದು ಹಾಗೂ ಅವುಗಳೊಂದಿಗೆ ತಿರುಗಾಡುವುದನ್ನು ಪ್ರತಿಬಂಧಿಸಲಾಗಿದೆ. ಕಲ್ಲುಗಳನ್ನು, ಕ್ಲಾರಪದಾರ್ಥ ಇಲ್ಲವೆ ಸ್ಫೋಟಕ ವಸ್ತುಗಳು ಯಾವುದೇ ದಾಹಕ ವಸ್ತುಗಳು ಇತ್ಯಾದಿಗಳನ್ನು ಸದರಿ ಸ್ಥಳಕ್ಕೆ ತೆಗೆದುಕೊಂಡು ಹೋಗುವುದನ್ನು ಹಾಗೂ ಶೇಖರಿಸುವುದನ್ನು ನಿಷೇಧಿಸಲಾಗಿದೆ. ಕಲ್ಲುಗಳನ್ನು ಮತ್ತು ಎಸೆಯುವಂಥಹ ವಸ್ತುಗಳನ್ನು ಎಸೆಯುವ ಅಥವಾ ಬಿಡುವ ಸಾಧನಗಳನ್ನು ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ. ಮನುಷ್ಯ ಶವಗಳ ಅಥವಾ ಅವುಗಳ ಆಕೃತಿ ಅಥವಾ ಪ್ರತಿಮೆಗಳ ಪ್ರದರ್ಶನ / ದಹನ ಮಾಡುವುದನ್ನು ಪ್ರತಿಬಂಧಿಸಲಾಗಿದೆ. 

ನಿಷೇಧಿತ ಸ್ಥಳದಲ್ಲಿ ಹಾಡುವುದು, ವಾದ್ಯ ಬಾರಿಸೋದು ಬ್ಯಾನ್..!
ನಿಷೇಧಿತ ಸ್ಥಳಗಳಲ್ಲಿ ಬಹಿರಂಗವಾಗಿ ಘೋಷಣೆ ಮಾಡುವುದು, ಪದ ಹಾಡುವುದು, ವಾದ್ಯ ಬಾರಿಸುವುದು, ವ್ಯಾಖ್ಯಾನ ಕೊಡುವುದು, ಸನ್ನೆ ಅಥವಾ ನಕಲಿ ಪ್ರದರ್ಶನವನ್ನು ಹಾಗೂ ಸಾರ್ವಜನಿಕ ಸಭ್ಯತೆ ಅಥವಾ ನೀತಿಯನ್ನು ಆಕ್ರಮಿಸಬಹುದಾದ ಕೃತ್ಯಗಳನ್ನು ಮಾಡುವುದನ್ನು ನಿಷೇಧಿಸಲಾಗಿದೆ. ಸಾರ್ವಜನಿಕವಾಗಿ ಯಾವುದೇ ವ್ಯಕ್ತಿ ಪ್ರಚೋದನಾತ್ಮಕ ಹಾಗೂ ಉದ್ರೇಕಕಾರಿ ಹಾಡುಗಳು, ಕೂಗಾಟ ಮಾಡುವುದನ್ನು ಹಾಗೂ ವ್ಯಕ್ತಿಗಳ ತೇಜೋವಧೆ ಮಾಡುವಂತಹ ಚಿತ್ರಗಳು, ಚಿಹ್ನೆಗಳು, ಪ್ರತಿಕೃತಿಗಳು ಮುಂತಾದವುಗಳನ್ನು ಪ್ರದರ್ಶಿಸುವಾಗ ಹಾಗೂ ಸಾರ್ವಜನಿಕ ಗಾಂಭೀರ್ಯ ಹಾಗೂ ನೈತಿಕತೆಗೆ ಭಂಗ ತರುವಂತಹ ಅಥವಾ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತರುವಂತಹ ಯಾವುದೇ ಕೃತ್ಯಗಳಲ್ಲಿ ತೊಡಗುವುದನ್ನು ನಿಷೇಧಿಸಲಾಗಿದೆ. 

ವಿಜಯಪುರ ಮಹಾನಗರ ಪಾಲಿಕೆ ಚುನಾವಣೆ: ಬಿಜೆಪಿ, ಕಾಂಗ್ರೆಸ್‌ಗೆ ಬಿಸಿ ತುಪ್ಪವಾದ ಬಂಡಾಯ

ಅನುಮಾನ ಬಂದ್ರೆ ಅಂತವರು ಪೊಲೀಸ್ ವಶಕ್ಕೆ..!
ಯಾವುದೇ ವ್ಯಕ್ತಿ ಬಹಿರಂಗವಾಗಿ ಮೇಲೆ ವಿವರಿಸಿದ ಮಾರಕಾಸ್ತ್ರಗಳು, ಸ್ಫೋಟಕ ವಸ್ತುಗಳು, ವಿನಾಶಕಾರಿ ವಸ್ತುಗಳು ಹಾಗೂ ಇತರ ಆಕ್ಷೇಪಾರ್ಹ ವಸ್ತುಗಳನ್ನು ಹೊಂದಿದ್ದು ಕಂಡು ಬಂದ ಕೂಡಲೇ, ಅವುಗಳನ್ನು ವಶಪಡಿಸಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಅಧಿಕಾರ ಇರುತ್ತದೆ. ಅಂಥಹ ಮಾರಕಾಸ್ತ್ರಗಳನ್ನು ಸರಕಾರಕ್ಕೆ ಮುಟ್ಟುಗೋಲು ಮಾಡಿಕೊಳ್ಳಲಾಗುವುದು. ಅಲ್ಲದೇ ಸಂಬಂಧಿಸಿದ ವ್ಯಕ್ತಿಗಳ ಮೇಲೆ ಕಾನೂನು ರೀತ್ಯ ಕ್ರಮ ಜರುಗಿಸಲಾಗುವುದು ಎಂದು ಚುನಾವಣಾಧಿಕಾರಿಗಳು ಸ್ಪಷ್ಟಪಡೆಸಿದ್ದಾರೆ.

ವಿಜಯಪುರ ಪಾಲಿಕೆ ಚುನಾವಣೆ, ಬಿಜೆಪಿ ಅಭ್ಯರ್ಥಿಗಳಿಗೆ ಬಂಡಾಯದ ಬಿಸಿ

ಶವ ಸಂಸ್ಕಾರ, ಶುಭಕಾರ್ಯಗಳಿಗೆ ವಿನಾಯಿತಿ..!
ಶವ ಸಂಸ್ಕಾರಕ್ಕೆ ಅಥವಾ ಮದುವೆ ಮತ್ತು ಧಾರ್ಮಿಕ ಮೆರವಣಿಗೆಗಳಿಗೆ ಹಾಗೂ ಈ ಆಜ್ಞೆ ಅನ್ವಯಿಸುದಿಲ್ಲ. ಮದುವೆ ಮತ್ತು ಇತರೆ ಧಾರ್ಮಿಕ ಮೆರವಣಿಗೆಗಳು ಯಾವತ್ತೂ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಹಾಗೂ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತರದಂತೆ ಹಾಗೂ ಕೊವಿಡ್-19ರ ಮಾರ್ಗಸೂಚಿ ಹಾಗೂ ನಿಯಮಗಳನ್ನು ಪಾಲಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

Follow Us:
Download App:
  • android
  • ios