ವಿಜಯಪುರ(ಮಾ.14): ಕಲಬುರಗಿಯಲ್ಲಿ ಕೊರೋನಾ ಸೋಂಕಿನಿಂದ ಮೃತಪಟ್ಟ ವೃದ್ಧ ವಿದೇಶದಿಂದ ಮರಳಿದ ಮೇಲೆ ಜಿಲ್ಲೆಯ ತಾಳಿಕೋಟೆ ಪಟ್ಟಣಕ್ಕೆ ಬಂದು ಹೋಗಿದ್ದರು ಎಂಬ ಸುದ್ದಿಯೊಂದು ಹರಿದಾಡುತ್ತಿದೆ. ಇದರಿಂದ ಜಿಲ್ಲೆಯ ಜನ ಮತ್ತಷ್ಟು ಆತಂಕದಲ್ಲಿದ್ದಾರೆ. 

ಈ ಸುದ್ದಿ ವ್ಯಾಪಕವಾಗಿ ಹರಡುತ್ತಿದ್ದಂತೆ ಇಂದು(ಶನಿವಾರ) ಜಿಲ್ಲಾಧಿಕಾರಿ ವೈ. ಎಸ್. ಪಾಟೀಲ ಜಿಲ್ಲಾಡಳಿತ ಕಚೇರಿಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ತುರ್ತು ಸಭೆ ನಡೆಸಿ ಮಾಹಿತಿ ನೀಡಿದ ಅವರು, ಕೊರೋನಾ ವೈರಸ್‌ನಿಂದ ಸಾವನ್ನಪ್ಪಿದ ವ್ಯಕ್ತಿ ವಿಜಯಪುರ ಜಿಲ್ಲೆಗೆ ಭೇಟಿ ನೀಡಿರುವ ಸಾಧ್ಯತೆಗಳಿಲ್ಲ. ತಾಳಿಕೋಟೆ ಭಾಗದಲ್ಲಿ ಕೆಲವರು ಈ ಕುರಿತು ಸುಳ್ಳು ಸುದ್ದಿ ಹರಿಬಿಟ್ಟಿದ್ದಾರೆ. ಈ ಕುರಿತು ತನಿಖೆ ನಡೆಸುತ್ತಿದ್ದೇವೆ. ಕಲಬುರಗಿ ಜಿಲ್ಲಾಡಳಿತದಿಂದ ಮಾಹಿತಿ ಪಡೆಯುತ್ತಿದ್ದೇವೆ. ವದಂತಿ ಹರಡಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಈ ಸಂಬಂಧ ಜಿಲ್ಲಾಧಿಕಾರಿ ವೈ. ಎಸ್. ಪಾಟೀಲ ಅವರು ಕಲಬುರಗಿ ಜಿಲ್ಲಾಧಿಕಾರಿ ಶರತ್‌ ಅವರನ್ನ ದೂರವಾಣಿ ಮೂಲಕ ಸಂಪರ್ಕಿಸಿ ಮಾಹಿತಿ ಪಡೆದುಕೊಂಡಿದ್ದಾರೆ. ಜಿಲ್ಲೆಯಾದ್ಯಂತ ಕರೋನಾ ಭೀತಿ ಹಿನ್ನೆಲೆಯಲ್ಲಿ ಎರಡನೇ ಶನಿವಾರ ಸರ್ಕಾರಿ ರಜೆ ಇದ್ದರೂ ಸಹ ಜಿಲ್ಲಾಧಿಕಾರಿ ಅಧಿಕಾರಿಗಳ ಸಭೆ ನಡೆಸುತ್ತಿದ್ದಾರೆ. 

ಸಭೆಯಲ್ಲಿ ಎಡಿಸಿ ಔದ್ರಾಮ, ಸಿಇಒ ಗೋವಿಂದರೆಡ್ಡಿ, ಎಸ್ ಪಿ ಅನುಪಮ‌ ಅಗರವಾಲ, ಡಿಹೆಚ್ಒ ಡಾ. ಮಹೇಂದ್ರ ಕಾಪಸೆ, ಜಿಲ್ಲಾಸ್ಪತ್ರೆ ಶಸ್ತ್ರಚಿಕಿತ್ಸಕ ಡಾ. ಶರಣಪ್ಪ ಕಟ್ಟಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಮಲ್ಲನಗೌಡ ಬಿರಾದಾರ ಸೇರಿದಂತೆ ಆರೋಗ್ಯ ಇಲಾಖೆಯ ಎಲ್ಲ ಅಧಿಕಾರಿಗಳು ಭಾಗವಹಿಸಿದ್ದಾರೆ.