BSY, ಸಿದ್ದು, ರಾಮುಲು ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ
ಬಿಜೆಪಿ ಅಭ್ಯರ್ಥಿ ಗೆದ್ದರೆ ಹೆಚ್ಚಿನ ಅನುದಾನ ನೀಡಿ ಮಾದರಿ ಕ್ಷೇತ್ರ ಮಾಡಲಾಗುವುದು ಹಾಗೂ ಆರ್.ಶಂಕರ್ ರನ್ನು ಎಂಎಲ್‌ಸಿ ಮಾಡಿ ಸಚಿವ ಸ್ಥಾನ ನೀಡಲಾಗುವುದು ಎಂದಿದ್ದ ಯಡಿಯೂರಪ್ಪ| ಸಿದ್ದರಾಮಯ್ಯ ರಟ್ಟಿಹಳ್ಳಿಯಲ್ಲಿ ಪ್ರಚಾರ ಸಭೆಯಲ್ಲಿ ‘ಬಾಂಬೇ ನೋಟು, ಬನ್ನಿಕೋಡಗೆ ವೋಟು’ ಎಂಬ ಹೇಳಿಕೆ| ಪರಿಶಿಷ್ಟ ಪಂಗಡಕ್ಕೆ ಶೇ.7.5ರಷ್ಟುಮೀಸಲಾತಿ ಜಾರಿಗೊಳಿಸಲಾಗುವುದು ಎಂದು ಹೇಳಿಕೆ ನೀಡಿದ್ದ ಸಚಿವ ಬಿ.ಶ್ರೀರಾಮುಲು|
ಹಾವೇರಿ[ಡಿ.04]: ಮುಖ್ಯಮಂತ್ರಿ ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಬಿ.ಶ್ರೀರಾಮುಲು ಅವರ ವಿರುದ್ಧ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಾಗಿದೆ ಎಂದು ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ತಿಳಿಸಿದ್ದಾರೆ. ಜಿಲ್ಲೆಯ ಹಿರೇಕೆರೂರು ಮತ್ತು ರಾಣೆಬೆನ್ನೂರು ಕ್ಷೇತ್ರಗಳ ಉಪಚುನಾವಣೆ ಪ್ರಚಾರದ ವೇಳೆ ಮತದಾರರ ಮೇಲೆ ಪ್ರಭಾವ ಬೀರುವ ರೀತಿಯಲ್ಲಿ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಇವರ ಮೇಲೆ ಪ್ರತ್ಯೇಕ ಪ್ರಕರಣ ದಾಖಲಾಗಿದೆ.
ಬಿಜೆಪಿ ಅಭ್ಯರ್ಥಿ ಗೆದ್ದರೆ ಹೆಚ್ಚಿನ ಅನುದಾನ ನೀಡಿ ಮಾದರಿ ಕ್ಷೇತ್ರ ಮಾಡಲಾಗುವುದು ಹಾಗೂ ಆರ್.ಶಂಕರ್ ಅವರನ್ನು ಎಂಎಲ್‌ಸಿ ಮಾಡಿ ಸಚಿವ ಸ್ಥಾನ ನೀಡಲಾಗುವುದು ಎಂದು ಯಡಿಯೂರಪ್ಪ ಅವರು ಪ್ರಚಾರ ಭಾಷಣದ ವೇಳೆ ಪ್ರಸ್ತಾಪಿಸಿರುವ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದೆ. ಆದರೆ ಈ ಕುರಿತು ಎಫ್‌ಐಆರ್ ದಾಖಲಾಗಿಲ್ಲ. ಸಿದ್ದರಾಮಯ್ಯ ರಟ್ಟಿಹಳ್ಳಿಯಲ್ಲಿ ಪ್ರಚಾರ ಸಭೆಯಲ್ಲಿ ‘ಬಾಂಬೇ ನೋಟು, ಬನ್ನಿಕೋಡಗೆ ವೋಟು’ ಎಂಬ ಹೇಳಿಕೆಯ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ.
ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
ಪರಿಶಿಷ್ಟ ಪಂಗಡಕ್ಕೆ ಶೇ.7.5ರಷ್ಟುಮೀಸಲಾತಿ ಜಾರಿಗೊಳಿಸಲಾಗುವುದು ಎಂದು ಸಚಿವ ಬಿ.ಶ್ರೀರಾಮುಲು ಅವರು ಹೇಳಿಕೆ ನೀಡಿದ್ದ ಹಿನ್ನೆಲೆಯಲ್ಲಿ ಅವರ ಮೇಲೆ ಪ್ರಕರಣ ದಾಖಲಾಗಿದೆ. ಸಿದ್ದರಾಮಯ್ಯ ಮತ್ತು ಶ್ರೀರಾಮುಲು ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಸಿಎಂ ಯಡಿಯೂರಪ್ಪ ಅವರ ಹೇಳಿಕೆ ಕುರಿತು ಕಾನೂನು ಅಭಿಪ್ರಾಯ ಪಡೆಯಲಾಗುತ್ತಿದೆ ಎಂದು ಎಸ್ಪಿ ಕೆ.ಜಿ. ದೇವರಾಜ್ ತಿಳಿಸಿದ್ದಾರೆ.
ಡಿಸೆಂಬರ್ 5ರಂದು ಕರ್ನಾಟಕದಲ್ಲಿ 15 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದ್ದು, 9ರಂದು ಫಲಿತಾಂಶ ಪ್ರಕಟವಾಗಲಿದೆ.