ವಿರಾಜಪೇಟೆ (ಡಿ.09):  ಭಾರತೀಯ ಜನತಾ ಪಕ್ಷದ ಅರ್ಜಿ ವಲಯ ಮಹಿಳಾ ಮೋರ್ಚಾ ಅಧ್ಯಕ್ಷೆ ಪಕ್ಷ ತೊರೆದು ಅಧಿಕೃತವಾಗಿ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಗೊಂಡರು.

ವಿರಾಜಪೇಟೆ ನಗರದ ದೊಡ್ಡಟ್ಟಿ ಚೌಕಿಯಲ್ಲಿರುವ ವಿರಾಜಪೇಟೆ ಬ್ಲಾಕ್‌ ಕಾಂಗ್ರೆಸ್‌ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ವಿರಾಜಪೇಟೆ ಅರ್ಜಿ ವಲಯ ಭಾರತೀಯ ಜನತಾ ಪಕ್ಷದ ಮಹಿಳಾ ಮೋರ್ಚಾ ಅಧ್ಯಕ್ಷೆ ನಿಶಾ ವಿಜಯನ್‌ ಅವರನ್ನು ಪಕ್ಷಕ್ಕೆ ಸೇರ್ಪಡೆಗೊಳಿಸಲಾಯಿತು.

ಅಧಿಕೃತವಾಗಿ ಬಿಜೆಪಿ ಸೇರ್ಪಡೆ ದಿನಾಂಕ ಘೋಷಿಸಿದ ಮುಖಂಡ

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ವಿರಾಜಪೇಟೆ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ಕಾಂಗ್ರೆಸ್‌ ಪಕ್ಷದ ತತ್ವ ಸಿದ್ಧಾಂತಗಳನ್ನು ಮೆಚ್ಚಿ ವಿವಿಧ ಪಕ್ಷಗಳಲ್ಲಿ ಗುರುತಿಸಿಕೊಂಡ ಮುಂಚೂಣಿಯ ನಾಯಕರು ಕಾಂಗ್ರೆಸ್‌ ಸೇರ್ಪಡೆಗೊಳ್ಳುತ್ತಿರುವುದು ಸಂತೋಷದಾಯಕ ಬೆಳೆವಣಿಗೆಯಾಗಿದೆ. ಪಕ್ಷವು ಎಲ್ಲ ಜಾತಿ ಧರ್ಮಗಳನ್ನು ಸರಿಸಮಾನವಾಗಿ ಕಂಡು ಪದವಿ ಮತ್ತು ಪ್ರಾತಿನಿಧ್ಯ ನೀಡುತ್ತಾ ಬಂದಿದೆ. ಪಕ್ಷವು ಒಂದೂ ಧರ್ಮಕ್ಕೆ ಮಾತ್ರ ಸೀಮಿತವಾಗಿರದೆ ಎಲ್ಲ ಧರ್ಮಗಳನ್ನು ಸಮಾನವಾಗಿ ಕಾಣುವ ಮನೋಧರ್ಮ ಹೊಂದಿದೆ. ಬಿಜೆಪಿ ತೊರೆದು ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಗೊಂಡ ನಿಶಾ ವಿಜಯನ್‌ ಅವರನ್ನು ಕಾಂಗ್ರೆಸ್‌ ಪಕ್ಷವು ಆಧಾರಪೂರ್ವಕವಾಗಿ ಸ್ವಾಗತಿಸುತ್ತದೆ. ಅವರ ಮುಂದಿನ ರಾಜಕೀಯ ಭವಿಷ್ಯವು ಉತ್ತಮವಾಗಿರಲಿ ಎಂದು ಶುಭ ಹಾರೈಸಿದರು.

ಪಕ್ಷದ ಮುಖಂಡರ ಸಮ್ಮುಖದಲ್ಲಿ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷರು, ನಿಶಾ ವಿಜಯನ್‌ ಅವರಿಗೆ ಪಕ್ಷದ ಧ್ವಜ ನೀಡಿ ಬರಮಾಡಿಕೊಂಡರು. ನಗರ ಕಾಂಗ್ರೆಸ್‌ ಅಧ್ಯಕ್ಷ ಜಿ.ಜಿ. ಮೋಹನ್‌ ಕುಮಾರ್‌, ಪಟ್ಟಣ ಪಂಚಾಯಿತಿ ಸದಸ್ಯ ಮೊಹಮ್ಮದ್‌ ರಾಫಿ ಮಾತನಾಡಿದರು.