ವಿಜಯಪುರ (ಅ.22): ಪ್ರತಿಕೂಲ ಹವಾಮಾನದಿಂದಾಗಿ ಮುಖ್ಯಮಂತ್ರಿಗಳ ವಿಜಯಪುರ ಜಿಲ್ಲೆಯ ವೈಮಾನಿಕ ಸಮೀಕ್ಷೆ ರದ್ದಾದ ಹಿನ್ನೆಲೆಯಲ್ಲಿ ಅವರನ್ನು ನೆರೆ ಹಾನಿ ಪರಿಶೀಲನೆಗಾಗಿ ಜಿಲ್ಲೆಗೆ ಮತ್ತೊಮ್ಮೆ ಆಹ್ವಾನಿಸುವುದಾಗಿ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ.

ಆಲಮಟ್ಟಿಯಲ್ಲಿ ಸುದ್ದಿಗಾರರ ಜತೆಗೆ ಮಾತನಾಡಿ, ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪನವರು ವಿಜಯಪುರ ಜಿಲ್ಲೆಯಲ್ಲಿ ಮಳೆ, ಪ್ರವಾಹದಿಂದ ಆಗಿರುವ ಹಾನಿಯ ವೈಮಾನಿಕ ಸಮೀಕ್ಷೆ ನಡೆಸಲು ಉತ್ಸುಕರಾಗಿದ್ದರು. 

10000 ಕೋಟಿ ಕೊಡಿ, ವಿಶೇಷ ಪ್ಯಾಕೇಜ್‌ ನೀಡುವಂತೆ ಮೋದಿಗೆ ಸಿಎಂ ಪತ್ರ! ...

ಆದರೆ ಹವಾಮಾನ ವೈಪರೀತ್ಯದಿಂದಾಗಿ ಅದು ಸಾಧ್ಯವಾಗಿಲ್ಲ. ಕೊನೇ ಗಳಿಗೆಯಲ್ಲಿ ವೈಮಾನಿಕ ಸಮೀಕ್ಷೆ ಹಾಗೂ ಅಧಿಕಾರಿಗಳ ಸಭೆ ರದ್ದಾಗಿದೆ. ಅಧಿಕಾರಿಗಳಿಂದ ಜಿಲ್ಲೆಯ ನೆರೆ ಸ್ಥಿತಿಗತಿ ಕುರಿತು ಮಾಹಿತಿ ಪಡೆದುಕೊಂಡಿದ್ದೇನೆ.

ನಾಳೆ ಬೆಂಗಳೂರಿನಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಸುದೀರ್ಘವಾಗಿ ಚರ್ಚಿಸಿ ಜಿಲ್ಲೆಗೆ ಹೆಚ್ಚಿನ ನೆರವು ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಯಡಿಯೂರಪ್ಪ ಅವರನ್ನು ಮತ್ತೆ ವಿಜಯಪುರ ಜಿಲ್ಲೆಗೆ ಭೇಟಿ ನೀಡುವಂತೆ ಆಹ್ವಾನಿಸುತ್ತೇನೆ ಎಂದು ತಿಳಿಸಿದರು.