ಇನ್ನೊಂದು ವರ್ಷದಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣ ಬಳಕೆಗೆ ಸಿದ್ದ
ಎಲ್ಲವು ಅಂದುಕೊಂಡಂತೆ ಆದರೆ ಶಿವಮೊಗ್ಗ ಜಿಲ್ಲೆಯ ಜನರ ಬಹುದಿನಗಳ ಕನಸಾದ ವಿಮಾನ ನಿಲ್ದಾಣದ ಕನಸು ಇನ್ನೊಂದು ವರ್ಷದಲ್ಲಿ ನನಸಾಗಲಿದೆ. ಈ ಕುರಿತಾದ ಒಂದು ವರದಿ ಇಲ್ಲಿದೆ ನೋಡಿ.
ಶಿವಮೊಗ್ಗ(ಜೂ.16): ಶಿವಮೊಗ್ಗ ಜಿಲ್ಲೆಯ ಜನತೆಯ ಬಹುದಿನಗಳ ವಿಮಾನ ನಿಲ್ದಾಣದ ಕನಸು ನನಸಾಗುತ್ತಿದ್ದು, ತವರು ಜಿಲ್ಲೆಯಲ್ಲಿ ವಿಮಾನ ನಿಲ್ದಾಣದ ಕಾಮಗಾರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚಾಲನೆ ನೀಡಿದ್ದಾರೆ.
ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಸೋಮವಾರ ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿಗೆ ಆನ್‌ಲೈನ್ ಮೂಲಕ ಹಸಿರು ನಿಶಾನೆ ತೋರಿದರು. ಕಾಮಗಾರಿಯನ್ನು ಎರಡು ಹಂತದಲ್ಲಿ ಕೈಗೊಳ್ಳಲಾಗುತ್ತಿದ್ದು, ಪ್ರಥಮ ಹಂತದಲ್ಲಿ 2200 ಮೀ. ಉದ್ದದ ರನ್‌ವೇ, ಟ್ಯಾಕ್ಸಿ ವೇ, ಏಪ್ರಾನ್, ಅಪ್ರೋಚ್ ರಸ್ತೆ, ಪೆರಿಫೆರಲ್ ರಸ್ತೆ ಮತ್ತು ಕಾಂಪೌಂಡ್ ನಿರ್ಮಾಣ ಕಾರ್ಯ ಕೈಗೊಳ್ಳಲಾಗುವುದು. ಎರಡನೇ ಹಂತದಲ್ಲಿ ಟರ್ಮಿನಲ್ ಕಟ್ಟಡ, ಎಟಿಸಿ ಟವರ್, ಫೈರ್ ಸ್ಟೇಷನ್ ಕಟ್ಟಡ ಇತ್ಯಾದಿ ಕಾರ್ಯಗಳನ್ನು ಕೈಗೊಳ್ಳಲಾಗುವುದು.
ಶಿವಮೊಗ್ಗ ತಾಲೂಕಿನ ಸೋಗಾನೆ ಗ್ರಾಮದಲ್ಲಿ 220 ಕೋಟಿ ರು. ವೆಚ್ಚದಲ್ಲಿ 662.38 ಎಕರೆ ಪ್ರದೇಶದಲ್ಲಿ ಸುಸಜ್ಜಿತ ವಿಮಾನ ನಿಲ್ದಾಣ ನಿರ್ಮಿಸಲಾಗುತ್ತಿದೆ. ಕಾಮಗಾರಿಯನ್ನು ಎರಡು ಹಂತದಲ್ಲಿ ಕೈಗೊಳ್ಳಲಾಗುತ್ತಿದ್ದು, ಒಂದು ವರ್ಷದಲ್ಲಿ ಪೂರ್ಣಗೊಳ್ಳುವ ನಿರೀಕ್ಷೆ ಇದೆ. ಗುಣಮಟ್ಟದಲ್ಲಿ ಯಾವುದೇ ರಾಜಿ ಇಲ್ಲದೆ ನಿಗದಿತ ಸಮಯದೊಳಗಾಗಿ ಕಾಮಗಾರಿ ಪೂರ್ಣಗೊಳಿಸಬೇಕು. ಉಡಾನ್ ಯೋಜನೆಯಿಂದಾಗಿ ಜನಸಾಮಾನ್ಯರು ವಿಮಾನಯಾನ ಕೈಗೊಳ್ಳಬಹುದಾದ ವಾತಾವರಣ ಇದೆ ಎಂದು ಹೇಳಿದರು.
ಜಿಲ್ಲೆಯಲ್ಲಿ ಅನೇಕ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ನೀರಾವರಿ ಯೋಜನೆಗಳು, ಶಾಲೆಗಳಲ್ಲಿ ಮೂಲಭೂತ ಸೌಲಭ್ಯ, ಕುಡಿಯುವ ನೀರು, ರಸ್ತೆ ಸಂಪರ್ಕ ಅನುಷ್ಠಾನಗೊಳಿಸಲಾಗುತ್ತಿದೆ. ಸ್ಮಾರ್ಟ್‌ಸಿಟಿ ಯೋಜನೆಗೆ ವೇಗ ದೊರೆತಿದೆ. ಶಿವಮೊಗ್ಗ-ಶಿಕಾರಿಪುರ ರೈಲ್ವೈ ಮಾರ್ಗದ ಕಾಮಗಾರಿ ಪ್ರಗತಿಯಲ್ಲಿದೆ. ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿ ನೂತನ ವಿಭಾಗ ಕಚೇರಿ ಆರಂಭಿಸಿರುವುದರಿಂದ ರಸ್ತೆ ಮತ್ತು ಸೇತುವೆ ನಿರ್ಮಾಣ ಕಾಮಗಾರಿಗಳಿಗೆ ವೇಗ ದೊರೆಯಲಿದೆ. ಸಿಗಂದೂರು ಬಳಿ ಶರಾವತಿ ಹಿನ್ನೀರಿಗೆ ಸೇತುವೆ ನಿರ್ಮಾಣ ಕಾರ್ಯ ಆರಂಭಿಸುವ ಮೂಲಕ ಜಿಲ್ಲೆಯ ಈ ಭಾಗದ ಜನರ ಬಹು ವರ್ಷಗಳ ಕನಸು ನನಸಾಗುತ್ತಿದೆ ಎಂದರು.
ಬಿಎಸ್‌ವೈ ಕನಸು ನನಸು: ಆನ್‌ಲೈನ್ ಮೂಲಕವೇ ಪೂಜೆ ಮಾಡಿ ಖುಷಿಪಟ್ಟ ಯಡಿಯೂರಪ್ಪ
ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಮಾತನಾಡಿ, ಇದೊಂದು ಐತಿಹಾಸಿಕ ಕಾರ್ಯಕ್ರಮವಾಗಿದೆ. ಶಿವಮೊಗ್ಗದಲ್ಲಿ ಮುಖ್ಯ ಎಂಜಿನಿಯರ್ ಕೇಂದ್ರ ವಲಯ ಮತ್ತು ರಾಷ್ಟ್ರೀಯ ಹೆದ್ದಾರಿ ವಿಭಾಗ ಕಚೇರಿಗಳನ್ನು ಆರಂಭಿಸುವ ಮೂಲಕ ಈ ಭಾಗದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಇನ್ನಷ್ಟುವೇಗ ದೊರೆಯಲಿದೆ. ಗುಣಮಟ್ಟದ ಕೆಲಸ ಇದರಿಂದ ಸಾಧ್ಯವಾಗಲಿದೆ ಎಂದು ತಿಳಿಸಿದರು.
ಹೆಚ್ಚಿನ ಕೈಗಾರಿಕೆ ಆರಂಭ:
ಸ್ಥಳೀಯ ವೇದಿಕೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ, ವಿಮಾನ ನಿಲ್ದಾಣದಿಂದಾಗಿ ಜಿಲ್ಲೆಯಲ್ಲಿ ಹೆಚ್ಚಿನ ಕೈಗಾರಿಕೆ ಆರಂಭವಾಗುವ ನಿರೀಕ್ಷೆ ಇದೆ. ಉದ್ಯಮಿಗಳಿಗೆ ಭೂಮಿ, ನೀರು, ವಿದ್ಯುತ್ ಸೇರಿದಂತೆ ಎಲ್ಲಾ ರೀತಿಯ ಸೌಲಭ್ಯಗಳನ್ನು ಕಲ್ಪಿಸಲಾಗುವುದು. ಕೈಗಾರಿಕೆಗಳು ಆರಂಭವಾಗುವುದರಿಂದ ಯುವ ಜನಾಂಗಕ್ಕೆ ಹೆಚ್ಚಿನ ಉದ್ಯೋಗಾವಕಾಶ ಸೃಷ್ಟಿಯಾಗಲಿದೆ. ಯಡಿಯೂರಪ್ಪ ಅವರು ವಿಮಾನ ನಿಲ್ದಾಣ ಯೋಜನೆಯ ಕನಸು ಹೊತ್ತಿದ್ದು, ವಿಮಾನ ನಿಲ್ದಾಣ ನಿರ್ಮಾಣವಾದರೆ ಶ್ರೀಮಂತರಿಗೆ ಮಾತ್ರ ಲಾಭ ಎಂಬ ಮಾತು ಸರಿಯಲ್ಲ. ದೇಶ, ವಿದೇಶಗಳ ಕೈಗಾರಿಕೋದ್ಯಮಿಗಳು ಇಲ್ಲಿ ಬಂದು ಹೂಡಿಕೆ ಮಾಡಿ ಸ್ಥಳೀಯರಿಗೂ ಉದ್ಯೋಗ ಸಿಗಲಿದೆ ಎಂದು ಅಭಿಪ್ರಾಯಪಟ್ಟರು.
ಸಂಸದ ಬಿ.ವೈ.ರಾಘವೇಂದ್ರ ಮಾತನಾಡಿ, ಕಳೆದ ಒಂದು ವರ್ಷ ಅವಧಿಯಲ್ಲಿ ಹಲವು ತಾಂತ್ರಿಕ ಸಮಸ್ಯೆಗಳನ್ನು ನಿವಾರಿಸಿಕೊಂಡು ವಿಮಾನ ನಿಲ್ದಾಣ ಕಾಮಗಾರಿಕೆ ಚಾಲನೆ ನೀಡಲಾಗಿದೆ. ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಹಲವಾರು ಅಭಿವೃದ್ಧಿ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ನುಡಿದರು.
ವಿಮಾನ ನಿಲ್ದಾಣಕ್ಕಾಗಿ ರೈತರು ಭೂಮಿ ನೀಡಿದ್ದು, 3,300 ಮೀಟರ್ ಉದ್ದದ ರನ್‌ವೇ ನಿರ್ಮಿಸಿದರೆ ಭವಿಷ್ಯದಲ್ಲಿ ಅನುಕೂಲವಾಗಲಿದೆ. ಈ ಸಂಬಂಧ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗುವುದು. ಭೂಮಿ ನೀಡಿದವರಿಗೆ ಪಾವತಿಸಬೇಕಾದ ಬಾಕಿ ಹಣವನ್ನು ಇನ್ನೊಂದು ವಾರದಲ್ಲಿ ನೀಡಬೇಕು. ಉಡಾನ್ ಯೋಜನೆಯಡಿ ಪ್ರಯಾಣಿಕರಿಗೆ ಶೇ.50ರಷ್ಟು ದರಟಲ್ಲಿ ಟಿಕೆಟ್ ಲಭ್ಯವಾಗಲಿದೆ. ಉಳಿದ ಹಣವನ್ನು ಸರ್ಕಾರವೇ ಭರಿಸಲಿದೆ ಎಂದರು.
ವಿಧಾನಪರಿಷತ್ ಸದಸ್ಯರಾದ ಆಯನೂರು ಮಂಜುನಾಥ್, ಪ್ರಸನ್ನ ಕುಮಾರ್, ಶಾಸಕರಾದ ಅರಗ ಜ್ಞಾನೇಂದ್ರ, ಕುಮಾರಬಂಗಾರಪ್ಪ, ಹರತಾಳು ಹಾಲಪ್ಪ ಇತರರು ಉಪಸ್ಥಿತರಿದ್ದರು.