ಬೆಂಗಳೂರು (ಅ. 15): ರಾಜ್ಯದಲ್ಲಿ ಸೆಪ್ಟೆಂಬರ್ ತಿಂಗಳಿಂದ ಈಚೆಗೆ ಆರು ಮಂದಿ ಎಚ್‌1ಎನ್‌1ಗೆ ಬಲಿಯಾಗಿರುವ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಬೆಂಗಳೂರು ನಗರಾಭಿವೃದ್ಧಿಯ ಖಾತೆಯ ಹೊಣೆ ಹೊತ್ತುಕೊಂಡಿರುವ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಅವರು ಬಿಬಿಎಂಪಿ ಮೇಯರ್ ಹಾಗೂ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲು ಸೂಚಿಸಿದ್ದಾರೆ.

ಎಚ್‌1ಎನ್‌1 ಪ್ರಕರಣಗಳು ಬೆಂಗಳೂರಿನಲ್ಲೇ ಅತಿ ಹೆಚ್ಚಾಗಿ ವರದಿಯಾಗುತ್ತಿವೆ. ಸಾವಿನ ಪ್ರಮಾಣವೂ ಬೆಂಗಳೂರಿನಲ್ಲೇ ಅಧಿಕವಾಗಿದೆ. ಈ ಹಿನ್ನೆಲೆಯಲ್ಲಿ ನಗರದಲ್ಲಿ ರೋಗ ನಿಯಂತ್ರಣಕ್ಕೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಅವರು ನಿರ್ದೇಶನ ನೀಡಿದರು.

ಸಭೆಯಲ್ಲಿ ರಾಜ್ಯದಲ್ಲಿ ಹಂದಿ ಜ್ವರ ಪ್ರಕರಣಗಳು ಉಲ್ಬಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ತೀವ್ರ ಕಟ್ಟೆಚ್ಚರ ವಹಿಸಬೇಕು. ಮುಖ್ಯವಾಗಿ ಬೆಂಗಳೂರಿನಲ್ಲಿ ಹೆಚ್ಚು ಪ್ರಕರಣ ವರದಿ ಆಗುತ್ತಿರುವುದರಿಂದ ಸೂಕ್ತ ಕ್ರಮ ಕೈಗೊಳ್ಳಬೇಕು. ಯಾವುದೇ ರೋಗ ಲಕ್ಷಣಗಳು ಕಂಡು ಬಂದರೂ ನಿರ್ಲಕ್ಷ್ಯ ವಹಿಸದೆ ಚಿಕಿತ್ಸೆ ನೀಡಬೇಕು. ಜತೆಗೆ ಸೋಂಕಿತರ ವಾಸ ಸ್ಥಳಕ್ಕೆ ಭೇಟಿ ನೀಡಿ ಅಲ್ಲಿನ ಹಂದಿ ಜ್ವರ ಹತೋಟಿಗೆ ತಡೆಯಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಆದೇಶಿಸಿದರು.

ರೋಗ ಲಕ್ಷಣದ ಬಗ್ಗೆ ಎಚ್ಚರ

ಇದಕ್ಕೂ ಮೊದಲು ಸಭೆಯಲ್ಲಿ ಮಾತನಾಡಿದ ಆರೋಗ್ಯಾಧಿಕಾರಿಗಳು, ಎಚ್‌1ಎನ್‌1 (ಹಂದಿ ಜ್ವರ) ಸೋಂಕು ಉಂಟಾದ ರೋಗಿಯಲ್ಲಿ ಶ್ವಾಸಕೋಶದ ಸೋಂಕು ಕಾಣಿಸಿಕೊಂಡು ನೆಗಡಿ, ಕೆಮ್ಮು, ಜ್ವರದ ಜೊತೆಗೆ ಉಸಿರಾಟದ ತೊಂದರೆ, ತೀವ್ರವಾದ ಮೈ-ಕೈ ನೋವು ಕಾಣಿಸಿಕೊಳ್ಳುತ್ತದೆ. ಇಂತಹ ಲಕ್ಷಣಗಳು ಕಂಡು ಬಂದ ಕೂಡಲೇ ವೈದ್ಯರನ್ನು ಸಂಪರ್ಕಿಸಿ ಸೂಕ್ತ ಚಿಕಿತ್ಸೆ ಪಡೆದುಕೊಳ್ಳಬೇಕು. ಈ ಬಗ್ಗೆ ಮಾಧ್ಯಮಗಳ ಮೂಲಕ ಸಾರ್ವಜನಿಕರಿಗೆ ಅರಿವು ಮೂಡಿಸಲಾಗುತ್ತಿದೆ ಎಂದು ಉಪ ಮುಖ್ಯಮಂತ್ರಿಗಳಿಗೆ ಮಾಹಿತಿ ನೀಡಿದರು.