ಮಂಡ್ಯ ಬಸ್ ಅಪಘಾತದಲ್ಲಿ 23 ಪ್ರಯಾಣಿಕರಿಗೆ ಗಾಯ, ಇಬ್ಬರು ಗಂಭೀರ ಗಾಯಗೊಂಡಿದ್ದಾರೆ. 40 ಮಂದಿ ಪ್ರಯಾಣಿಸುತ್ತಿದ್ದ ಬಸ್ ನಿಯಂತ್ರಣ ತಪ್ಪಿ ಹೆದ್ದಾರಿಯಲ್ಲಿ ಪಲ್ಟಿಯಾಗಿದೆ. ದೇವಸ್ಥಾನದಿಂದ ಮರಳುವಾಗ ಈ ಘಟನೆ ನಡೆದಿದೆ.
ಮಂಡ್ಯ (ಡಿ.07) ಮೈಸೂರು ಬೆಂಗಳೂರು ಹೆದ್ದಾರಿಯಲ್ಲಿ ಪ್ರಯಾಣಿಕರ ಖಾಸಗಿ ಬಸ್ ಪಲ್ಟಿಯಾಗಿ ಅಪಘಾತ ಸಂಭವಿಸಿದೆ. ಬೆಂಗಳೂರಿನ ನಿವಾಸಿಗಳು ಖಾಸಗಿ ಬಸ್ ಮೂಲಕ ದೇವಸ್ಥಾನ ಸಂದರ್ಶಿಸಿದ್ದರು. ಬೆಂಗಳೂರಿನ ಮಾಗಡಿ ನಗರದಿಂದ ಮದ್ದೂರಿನ ಶಿಂಷಾ ಮಾರಮ್ಮ ದೇವಾಲಯಕ್ಕೆ ತೆರಳಿದ ದರ್ಶನ ಪಡೆದಿದ್ದ 40 ಮಂದಿ ಬಳಿಕ ಖಾಸಗಿ ಬಸ್ ಮೂಲಕ ಬೆಂಗಳೂರಿಗೆ ಮರಳುತ್ತಿದ್ದ ವೇಳೆ ಅಪಘಾತ ನಡೆದಿದೆ. ಹೆದ್ದಾರಿಯಲ್ಲಿ ಬಸ್ ಡೈವೈಡ್‌ಗೆ ಡಿಕ್ಕಿಯಾಗಿ ಪಲ್ಟಿಯಾದ ಕಾರಣ ಬಸ್‌ನಲ್ಲಿದ್ದ 40 ಮಂದಿ ಪೈಕಿ 23 ಪ್ರಯಾಣಿಕರಿಗೆ ಗಾಯವಾಗಿದೆ. ಈ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದೆ.
ಮದ್ದೂರು ಸರ್ಕಾರಿ ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ
ಮಂಡ್ಯದ ಅಗರಲಿಂಗನದೊಡ್ಡಿ ಬಳಿ ಘಟನೆ ನಡೆದಿದೆ. ಗಾಯಾಳುಗಳನ್ನು ಮದ್ದೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.ಶಿಂಷಾ ಮಾರಮ್ಮ ದೇವಾಲಯದಿಂದ ಮರಳುತ್ತಿದ್ದ ವೇಳೆ ಬಸ್‌ನ ಆ್ಯಕ್ಸಿಲ್ ತುಂಡಾಗಿದೆ. ಇದರ ಪರಿಣಾಮ ಬಸ್ ನಿಯಂತ್ರಣ ಕಳೆದುಕೊಂಡಿದೆ. ಬಸ್ ಡಿಕ್ಕಿಯಾಗಿ ಪಲ್ಟಿಯಾಗಿದೆ. ಅಗರಲಿಂಗನದೊಡ್ಡಿಯ ಬೆಂ-ಮೈ ಹೆದ್ದಾರಿ ಪಕ್ಕದ ಸರ್ವೀಸ್ ರಸ್ತೆಯಲ್ಲಿ ಘಟನೆ ನಡೆದಿದೆ.
ಬಸ್ ಅಪಘಾತ ಬೆನ್ನಲ್ಲೇ ಸ್ಥಳಕ್ಕೆ ಧಾವಿಸಿದ ಮದ್ದೂರು ಸಂಚಾರಿ ಠಾಣಾ ಪೊಲೀಸರು ಸ್ಥಳೀಯರ ನೆರವಿನಿಂದ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಇತ್ತ ಕ್ರೇನ್ ಸಹಾಯದಿಂದ ಬಸ್ ಸ್ಥಳಾಂತರಿಸಲಾಗಿದೆ. ಹೆದ್ದಾರಿಯ ಪಕ್ಕದ ಸರ್ವೀಸ್ ರಸ್ತೆಯಲ್ಲಿ ಬಸ್ ಅಪಘಾತದಿಂದ ಹೆದ್ದಾರಿ ಕೂಡ ಜಾಮ್ ಆಗಿತ್ತು.
ಘಟನೆ ಆಘಾತ ವ್ಯಕ್ತಪಡಿಸಿದ ಹೆಚ್‌ಡಿ ಕುಮಾರಸ್ವಾಮಿ
ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಬೆಂಗಳೂರು - ಮೈಸೂರು ಹೆದ್ದಾರಿಯಲ್ಲಿನ ಅಗರಲಿಂಗನದೊಡ್ಡಿ ಗ್ರಾಮದ ಬಳಿ ಸಂಭವಿಸಿದ ಖಾಸಗಿ ಬಸ್ಸಿನ ಅಪಘಾತದಲ್ಲಿ 21ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಸುದ್ದಿ ತಿಳಿದು ತೀವ್ರ ಆಘಾತವಾಯಿತು. ವಿಷಯ ತಿಳಿದ ಕೂಡಲೇ ಜಿಲ್ಲಾಧಿಕಾರಿಗಳನ್ನು ದೂರವಾಣಿ ಮೂಲಕ ಸಂಪರ್ಕಿಸಿ ಗಾಯಾಳುಗಳಿಗೆ ಸೂಕ್ತ ಚಿಕಿತ್ಸಾ ಸೌಲಭ್ಯ ಕಲ್ಪಿಸುವಂತೆ ಸೂಚಿಸಿದ್ದೇನೆ. ಗಾಯಾಳುಗಳೆಲ್ಲರೂ ಶೀಘ್ರವೇ ಚೇತರಿಸಿಕೊಳ್ಳಲಿ. ಯಾರ ಪ್ರಾಣಕ್ಕೂ ಹಾನಿ ಆಗದೇ ಎಲ್ಲರೂ ಗುಣಮುಖರಾಗಿ ಮನೆಗಳಿಗೆ ಮರಳಲಿ ಎಂದು ಹಾರೈಸುತ್ತೇನೆ ಎಂದು ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
ಮದ್ದೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ಕುರಿತು ಸ್ಥಳೀಯರಿಂದ ಪೊಲೀಸರು ಮಾಹಿತಿ ಕಲೆ ಹಾಕಿದ್ದಾರೆ.


