ಬೆಂಗಳೂರು :  ರಾಜ್ಯದಲ್ಲಿ ಡಿ.4ರಿಂದ 6ರವರೆಗೆ ಸಾಧಾರಣದಿಂದ ಕೂಡಿದ ಹಗುರ ಮಳೆಯಾಗುವ ಸಾಧ್ಯತೆಗಳಿವೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ತಿಳಿಸಿದೆ.

ಕಳೆದ ತಿಂಗಳು ತಿತಿಲಿ, ಗಜ ಸೇರಿದಂತೆ ಚಂಡಮಾರುತ ಹಾಗೂ ವಾಯುಭಾರ ಕುಸಿತದಿಂದ ರಾಜ್ಯದಲ್ಲಿ ಸ್ವಲ್ಪ ಪ್ರಮಾಣದಲ್ಲಿ ಮಳೆಯಾಗಿದ್ದು ಬಿಟ್ಟರೆ ಹಿಂಗಾರು ಅಷ್ಟೊಂದು ಪ್ರಬಲವಾಗಿಲ್ಲ. ಇದೀಗ ಸ್ವಲ್ಪ ಚುರುಕುಗೊಂಡಂತೆ ಕಾಣುತ್ತಿದ್ದು, ಮುಂದಿನ ಮೂರು ದಿನಗಳಲ್ಲಿ ದಕ್ಷಿಣ ಭಾರತದ ರಾಜ್ಯಗಳಲ್ಲಿ ಮಳೆಯಾಗುವ ಲಕ್ಷಣಗಳು ಕಂಡುಬರುತ್ತಿವೆ.

ಮೇಲ್ಮೈ ಸುಳಿಗಾಳಿ ಪ್ರಭಾವದಿಂದ ತಮಿಳುನಾಡು, ಆಂಧ್ರಪ್ರದೇಶದ ದಕ್ಷಿಣ ಕರಾವಳಿ, ರಾಯಲಸೀಮೆ, ಕೇರಳ ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಡಿ.4ರಿಂದ ಮಳೆಯಾಗುವ ಸಾಧ್ಯತೆಗಳಿವೆ. ಡಿ.4ರ ಮಂಗಳವಾರ ತಮಿಳುನಾಡು, ಆಂಧ್ರಪ್ರದೇಶದಲ್ಲಿ ಮಳೆಯಾಗಲಿದೆ. ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮೋಡ ಕವಿದ ವಾತಾವರಣ ಉಂಟಾಗಲಿದ್ದು, ಅಲ್ಲಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗಲಿದೆ. ಡಿ.5ರಿಂದ ರಾಜ್ಯದ ದಕ್ಷಿಣ ಒಳನಾಡು ಸೇರಿದಂತೆ ಮಲೆನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಆದರೆ, ಭಾರಿ ಮಳೆಯಾಗುವ ಸೂಚನೆಗಳಿಲ್ಲ. ರಾಜ್ಯದ ಉತ್ತರ ಒಳನಾಡಿನಲ್ಲಿ ಕೆಲವು ಭಾಗದಲ್ಲಿ ಚದುರಿದಂತೆ ಮಳೆಯಾಗಲಿದೆ. ಡಿ.6ರವರೆಗೂ ರಾಜ್ಯದಲ್ಲಿ ಮಳೆ ಮುಂದುವರೆಯಲಿದೆ ಎಂದು ಕೆಎಸ್‌ಎನ್‌ಡಿಎಂಸಿ ವಿಜ್ಞಾನಿ ಸುನೀಲ್‌ ಗವಾಸ್ಕರ್‌ ‘ಕನ್ನಡಪ್ರಭ’ಕ್ಕೆ ತಿಳಿಸಿದ್ದಾರೆ.

ಮಳೆ ಪ್ರಮಾಣ ಕಡಿಮೆಯಾದ ಹಿನ್ನೆಲೆಯಲ್ಲಿ ತಾಪಮಾನದ ಹಾಗೂ ಚಳಿಯ ಪ್ರಮಾಣ ಹೆಚ್ಚಾಗಿತ್ತು. ಈಗ ಮತ್ತೆ ರಾಜ್ಯದಲ್ಲಿ ಮಳೆಯಾಗುವ ಮುನ್ಸೂಚನೆ ಕಂಡುಬರುತ್ತಿದ್ದು, ತಾಪಮಾನ ಮತ್ತು ಚಳಿಯ ಪ್ರಭಾವ ಕಡಿಮೆಯಾಗಿದೆ ಎಂದು ಅವರು ಹೇಳಿದರು.