ಐದು ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈ ನಿಟ್ಟಿನಲ್ಲಿ ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲು ಕೇರಳ ಮುಖ್ಯಮಂತ್ರಿ ಕಚೇರಿ ಸೂಚಿಸಿದೆ.
ತಿರುವನಂತಪುರ : ಕೇರಳ ಹಾಗೂ ಕರ್ನಾಟಕದಲ್ಲಿ ಭಾರೀ ಪ್ರಮಾಣದಲ್ಲಿ ಮಳೆ ಸುರಿದು ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಅಲ್ಪ ಪ್ರಮಾಣದಲ್ಲಿ ಚೇತರಿಸಿಕೊಳ್ಳುತ್ತಿದೆ.
ಆದರೆ ಇದೇ ವೇಳೆ ಮತ್ತೊಮ್ಮೆ ಕೇರಳದಲ್ಲಿ ಭಾರಿ ಮಳೆ ಸುರಿಯುವ ಬಗ್ಗೆ ಹೈ ಅಲರ್ಟ್ ನೀಡಲಾಗಿದೆ. ಸೆಪ್ಟೆಂಬರ್ 25 ಹಾಗೂ 26ರಂದು ಅತ್ಯಧಿಕ ಪ್ರಮಾಣದಲ್ಲಿ ಸುರಿಯಲಿದೆ ಎಂದು ಹವಾಮಾಣ ಇಲಾಖೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.
ತ್ರಿಶೂರ್, ಪಾಲಕ್ಕಾಡ್ ಇಡುಕ್ಕಿ, ವಯನಾಡು ಸೇರಿದಂತೆ ಐದು ಜಿಲ್ಲೆಗಳಲ್ಲಿ 64ರಿಂದ 124 ಮಿಲಿ ಮೀಟರ್ ಮಳೆ ಸುರಿಯಬಹುದು ಎಂದು ಮುಖ್ಯಮಂತ್ರಿ ಕಚೇರಿ ಎಚ್ಚರಿಕೆ ನೀಡಿದೆ.
ಅಲ್ಲದೇ ಈ ಐದು ಜಿಲ್ಲೆಗಳಲ್ಲಿ ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸರ್ಕಾರ ಜಿಲ್ಲಾಡಳಿತಗಳಿಗೆ ಸೂಚಿಸಿದೆ.
