ಬೆಂಗಳೂರು :  ಹಾಲಿನ ದರ ಏರಿಕೆ ಮಾಡುವ ಕುರಿತು ಕೆಎಂಎಫ್‌ ಚಿಂತನೆ ನಡೆಸಿದೆ ಎಂಬ ಮಾಹಿತಿ ಬೆನ್ನಲ್ಲೇ ರಾಜ್ಯ ಸರ್ಕಾರ ನಾಗರಿಕರಿಗೆ ಹಾಲನ್ನು ದುಬಾರಿ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದೆ.

ವಿಧಾನಸೌಧದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಪಶುಸಂಗೋಪನಾ ಇಲಾಖೆ ಸಚಿವ ವೆಂಕಟರಾವ್‌ ನಾಡಗೌಡ ಅವರು, ಹಾಲಿನ ದರ ಏರಿಕೆ ಮಾಡುವ ಯಾವುದೇ ಆಲೋಚನೆ ಸರ್ಕಾರದ ಮುಂದಿಲ್ಲ ಎಂದರು.

ಸ್ಥಳೀಯ ಸಂಸ್ಥೆ ಚುನಾವಣೆ ಮುಗಿದ ಹಿನ್ನೆಲೆಯಲ್ಲಿ ಹಾಲಿನ ದರ ಏರಿಕೆ ಮಾಡುವ ಕುರಿತು ಕರ್ನಾಟಕ ಹಾಲು ಉತ್ಪಾದಕರ ಮಹಾಮಂಡಲ (ಕೆಎಂಎಫ್‌), ಸರ್ಕಾರದ ಮುಂದೆ ಪ್ರಸ್ತಾವನೆ ಸಲ್ಲಿಸಲಿದೆ ಎಂಬ ಮಾತುಗಳು ಕೇಳಿ ಬಂದಿದ್ದವು. ಪಶು ಆಹಾರದ ಬೆಲೆಗಳ ಕುರಿತು ಸಮಾಲೋಚಿಸಲಾಗುತ್ತದೆ. ಆದರೆ ಈ ಹಂತದಲ್ಲಿ ಹಾಲಿನ ದರ ಹೆಚ್ಚಿಸುವ ಬಗ್ಗೆ ಪ್ರಸ್ತಾವನೆಯೂ ಸರ್ಕಾರದ ಮುಂದಿಲ್ಲ. ಹಾಗೆಯೇ ಆ ಕುರಿತು ಪ್ರಾರಂಭಿಕ ಹಂತದ ಚರ್ಚೆಯೂ ನಡೆದಿಲ್ಲ ಎಂದು ಸಚಿವರು ಹೇಳಿದರು.

ಪ್ರಸ್ತಾವನೆ ಸಲ್ಲಿಕೆಗೆ ಸಿದ್ಧತೆ:  ಹಾಲಿನ ದರ ಏರಿಕೆ ಇಲ್ಲ ಎಂದು ಸಚಿವರು ಹೇಳಿದ್ದರೂ ಕೆಎಂಎಫ್‌ ಮಾತ್ರ ಪ್ರತಿ ಲೀಟರ್‌ಗೆ ಎರಡು ರು. ಹೆಚ್ಚಳ ಮಾಡುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಮುಂದಾಗಿದೆ. ಈ ಸಂಬಂಧ ಮಂಡಳದ ಮುಂದಿನ ಸಭೆಯಲ್ಲಿ ಚರ್ಚಿಸಿ ಸ್ಪಷ್ಟನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಕೆಎಂಎಫ್‌ ವ್ಯವಸ್ಥಾಪಕ ನಿರ್ದೇಶಕ ರಾಕೇಶ್‌ ಸಿಂಗ್‌ ತಿಳಿಸಿದ್ದಾರೆ.

ಈ ಕುರಿತು ಕನ್ನಡಪ್ರಭಕ್ಕೆ ಮಾಹಿತಿ ನೀಡಿದ ಅವರು ಹಾಲಿನ ದರ ಏರಿಕೆ ಕುರಿತು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಸಿದ್ಧತೆ ನಡೆಸಲಾಗಿದೆ. ಪ್ರತೀ ಲೀಟರ್‌ ಹಾಲಿನ ದರ ಎರಡು ರು.ಗಳಂತೆ ಏರಿಕೆ ಮಾಡಲು ಸರ್ಕಾರ ಅನುಮತಿ ನೀಡಿದರೆ, ಅದರಲ್ಲಿ ರೈತರಿಗೆ ಲೀಟರ್‌ಗೆ . 1.15ರಿಂದ . 1.50 ನೀಡಲಾಗುವುದು. ಉಳಿದ 50 ಪೈಸೆ ಒಕ್ಕೂಟಕ್ಕೆ ಸಿಗಲಿದೆ. ಶೀಘ್ರವೇ ಮಹಾಮಂಡಳಿ ಸಭೆ ನಡೆಸಿ ಈ ಕುರಿತು ನಿರ್ಧಾರ ಕೈಗೊಂಡು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವುದಾಗಿ ಅವರು ತಿಳಿಸಿದರು.

ಇಂಧನ, ಪ್ಯಾಕಿಂಗ್‌, ವಿದ್ಯುತ್‌ ದರಗಳು ಕೂಡ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಹಾಲಿನ ದರ ಏರಿಕೆ ಅನಿವಾರ್ಯವಾಗಿದೆ. ಈ ಬಗ್ಗೆ ಕೆಎಂಎಫ್‌ ಸಭೆಯಲ್ಲಿ ತೀರ್ಮಾನ ಕೈಗೊಂಡು, ನಂತರ ಸರ್ಕಾರಕ್ಕೆ ಮನವರಿಕೆ ಮಾಡಿಕೊಡಲು ಮಹಾಮಂಡಳಿ ಚಿಂತನೆ ನಡೆಸಿದೆ.