ಅಲಹಾಬಾದ್(ಜು.19): ವಾರಾಣಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ನರೇಂದ್ರ ಮೋದಿ ಆಯ್ಕೆಯನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಅಲಹಾಬಾದ್ ಹೈಕೋರ್ಟ್, ಪ್ರಧಾನಿ ಮೋದಿಗೆ ನೋಟಿಸ್ ಜಾರಿ ಮಾಡಿದೆ.

ಮಾಜಿ ಬಿಎಸ್‌ಎಫ್ ಯೋಧ ತೇಜ್ ಬಹದ್ದೂರ್ ಯಾದವ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಕೆ.ಗುಪ್ತಾ, ಪ್ರಧಾನಿ ಮೋದಿಗೆ ನೋಟಿಸ್ ಜಾರಿ ಮಾಡಿದ್ದಾರೆ. ಅಲ್ಲದೇ ವಿಚಾರಣೆಯನ್ನು ಆಗಸ್ಟ್ 21ಕ್ಕೆ ಮುಂದೂಡಿದ್ದಾರೆ.

ಕಳೆದ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ಮೋದಿ ವಿರುದ್ಧ ಸಮಾಜವಾದಿ ಪಕ್ಷದಿಂದ ಸ್ಪರ್ಧಿಸಿದ್ದ ತೇಜ್ ಬಹದ್ದೂರ್ ಯಾದವ್ ಅವರ ನಾಮಪತ್ರವನ್ನು ತಿರಸ್ಕರಿಸಲಾಗಿತ್ತು. 

ಚುನಾವಣಾ ಅಧಿಕಾರಿಗಳು ಉದ್ದೇಶಪೂರ್ವಕವಾಗಿಯೇ ತಮ್ಮ ನಾಮಪತ್ರ ತಿರಸ್ಕರಿಸಿದ್ದು, ಮೋದಿ ಆಯ್ಕೆಯನ್ನು ಅಮಾನ್ಯಗೊಳಿಸಬೇಕು ಎಂದು ಕೋರಿ ಯಾದವ್ ಕೋರ್ಟ್ ಮೊರೆ ಹೋಗಿದ್ದರು.