ಬೆಂಗಳೂರು [ಸೆ.13]:   ಹಿಂದಿನ ಎಚ್‌.ಡಿ.ಕುಮಾರಸ್ವಾಮಿ ನೇತೃತ್ವದ ಜೆಡಿಎಸ್‌ ಮತ್ತು ಕಾಂಗ್ರೆಸ್‌ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ರಾಜಕಾರಣಿಗಳು, ಅಧಿಕಾರಿಗಳು ಹಾಗೂ ಉದ್ಯಮಿಗಳ ಫೋನ್‌ ಮಾತ್ರವಲ್ಲ, ನಾಡಿನ ಪ್ರಮುಖ ಮಠಾಧೀಶರ ಮೊಬೈಲ್‌ಗಳನ್ನೂ ಕದ್ದಾಲಿಕೆ ಮಾಡಲಾಗಿತ್ತು ಎಂಬ ಸಂಗತಿ ಸಿಬಿಐ ತನಿಖೆಯಲ್ಲಿ ಪತ್ತೆಯಾಗಿದೆ ಎನ್ನಲಾಗುತ್ತಿದೆ.

ಆದಿಚುಂಚನಗಿರಿ ಪೀಠದ ನಿರ್ಮಲಾನಂದ ಸ್ವಾಮೀಜಿ, ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ, ಮೈಸೂರಿನ ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಕನಕ ಗುರುಪೀಠದ ನಿರಂಜನಾನಂದ ಪುರಿ ಸ್ವಾಮೀಜಿ, ಹರಿಹರ ವಾಲ್ಮೀಕಿ ಪೀಠದ ಪ್ರಸನ್ನಾನಂದ ಸ್ವಾಮೀಜಿ, ಚಿತ್ರದುರ್ಗದ ಮಾದಾರ ಚೆನ್ನಯ್ಯ ಸ್ವಾಮೀಜಿ, ಕೂಡಲಸಂಗಮದ ಜಯ ಮೃತ್ಯುಂಜಯ ಸ್ವಾಮೀಜಿ ಹಾಗೂ ಬೋವಿ ಗುರುಪೀಠದ ಸಿದ್ದರಾಮೇಶ್ವರ ಸ್ವಾಮೀಜಿ ಸೇರಿದಂತೆ ಪ್ರಮುಖ ಮಠಾಧೀಶರ ಆಪ್ತ ಸಹಾಯಕರ ಕರೆಗಳಿಗೆ ಕಳ್ಳಗಿವಿ ಇಡಲಾಗಿತ್ತು ಎನ್ನಲಾಗಿದೆ.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಸರ್ಕಾರದ ಅಸ್ಥಿರತೆ ಬಗ್ಗೆ ಮಾತುಗಳು ಕೇಳಿಬಂದಾಗ ಕೆಲ ಶಾಸಕರು ತಮ್ಮ ಸಮುದಾಯದ ಮಠಾಧೀಶರನ್ನು ಸಂಪರ್ಕಿಸಿ ಸಲಹೆ ಸೂಚನೆ ಕೇಳುತ್ತಿದ್ದರು. ಇದರಿಂದಾಗಿ ಮಠಾಧೀಶರ ಹಾಗೂ ಆಪ್ತ ಸಹಾಯಕರ ಮೊಬೈಲ್‌ ಕರೆಗಳನ್ನು ಆಗಿನ ಮುಖ್ಯಮಂತ್ರಿ ಕುಮಾರಸ್ವಾಮಿ ಸೂಚನೆ ಮೇರೆಗೆ ಸಿಸಿಬಿ ಅಧಿಕಾರಿಗಳು ಕದ್ದಾಲಿಕೆ ಮಾಡಿದ್ದರು ಎಂದು ಹೇಳಲಾಗುತ್ತಿದೆ.

ಈ ಬಗ್ಗೆ ಸಿಬಿಐ ವಿಚಾರಣೆ ವೇಳೆ ಸಿಸಿಬಿ ತಾಂತ್ರಿಕ ವಿಭಾಗದ ಇನ್ಸ್‌ಪೆಕ್ಟರ್‌ ಒಬ್ಬರು ಹೇಳಿಕೆ ನೀಡಿದ್ದಾರೆ ಎನ್ನಲಾಗುತ್ತಿದೆ. ಮಠಾಧೀಶರ ಪೈಕಿ ಆದಿಚುಂಚನಗಿರಿ ಸ್ವಾಮೀಜಿ ಅವರ 720 ಗಂಟೆಗಳ ದೂರವಾಣಿ ಸಂಭಾಷಣೆಯನ್ನು ಕದ್ದು ಕೇಳಲಾಗಿತ್ತು. ಇದರಿಂದ ತಮ್ಮ ಒಕ್ಕಲಿಗ ಸಮುದಾಯದ ಶಾಸಕರ ನಡೆ ಬಗ್ಗೆ ಮುಖ್ಯಮಂತ್ರಿಗಳಿಗೆ ಮಾಹಿತಿ ಸಿಕ್ಕಿತು ಎಂದು ತಿಳಿದು ಬಂದಿದೆ.

ಇದುವರೆಗೆ ಕದ್ದಾಲಿಕೆ ಪ್ರಕರಣದಲ್ಲಿ ಆಡಳಿತ ಪಕ್ಷದ ಸಚಿವರು, ಶಾಸಕರು ಹಾಗೂ ಸರ್ಕಾರಿ ಅಧಿಕಾರಿಗಳು, ಪತ್ರಕರ್ತರ ಹೆಸರುಗಳು ಕೇಳಿಬಂದಿದ್ದವು. ಅದರಲ್ಲೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅಂದಿನ ಗೃಹ ಸಚಿವ ಎಂ.ಬಿ.ಪಾಟೀಲ್‌ ಸೇರಿದಂತೆ ಕಾಂಗ್ರೆಸ್‌ ನಾಯಕರೇ ಕದ್ದಾಲಿಕೆ ವಿರುದ್ಧ ತನಿಖೆಗೆ ಒತ್ತಾಯಿಸಿದ್ದರು. ಮೈತ್ರಿ ಸರ್ಕಾರದ ಸಂಕಷ್ಟದ ವೇಳೆ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಆಗಾಗ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡುತ್ತಿದ್ದರು. ಆದರೆ ಈಗ ಮಠಾಧಿಪತಿಗಳ ಮೊಬೈಲ್‌ ಕರೆಗಳನ್ನು ಕದ್ದಾಲಿಕೆ ಮಾಡಿರುವ ಆರೋಪವು ಗಂಭೀರ ಸ್ವರೂಪ ಪಡೆದುಕೊಂಡಿದೆ. ಸಿಬಿಐ ತನಿಖೆ ಮುಂದುವರೆದರೆ ಮಠಾಧ್ಯಕ್ಷರುಗಳಿಂದ ಸಹ ಹೇಳಿಕೆ ದಾಖಲಿಸಿಕೊಳ್ಳುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ.