ಶ್ರೀನಗರ(ಆ.02): ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿ ನಡೆಯುವ ಸಾಧ್ಯತೆ ಇದ್ದು, ಕೂಡಲೇ ಅಮರನಾಥ ಭಕ್ತರು ಯಾತ್ರೆಯನ್ನು ಮೊಟಕುಗೊಳಿಸಿ ರಾಜ್ಯವನ್ನು ತೊರೆಯುವಂತೆ ಜಮ್ಮು ಮತ್ತು ಕಾಶ್ಮೀರ ಸರ್ಕಾರ ಆದೇಶಿಸಿದೆ.

ಉಗ್ರರು ಅಮರನಾಥ ಯಾತ್ರೆಯನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವ ಬಗ್ಗೆ ಗುಪ್ತಚರ ಇಲಾಖೆ ಮಾಹಿತಿ ನೀಡಿದ್ದು, ಕಾಶ್ಮೀರ ಕಣಿವೆಯಲ್ಲಿ ಸದ್ಯದ ಭದ್ರತಾ ಪರಿಸ್ಥಿತಿ ಮತ್ತು ಯಾತ್ರಿಗಳ ಸುರಕ್ಷತೆಯನ್ನು ಗಮನಿಸಿ ರಾಜ್ಯ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.

ಈ ಕುರಿತು ಪ್ರಕಟಣೆ ಹೊರಿಡಿಸಿರುವ ಜಮ್ಮು ಮತ್ತು ಕಾಶ್ಮೀರ ಗೃಹ ಇಲಾಖೆ ಪ್ರಧಾನ ಕಾರ್ಯದರ್ಶಿ, ಆದಷ್ಟು ಬೇಗ ಕಣಿವೆ ತೊರೆಯುವಂತೆ ಯಾತ್ರಿಗಳಲ್ಲಿ ಮನವಿ ಮಾಡಿದ್ದಾರೆ.

ಕಾಶ್ಮೀರದಲ್ಲಿ ಉಗ್ರ ದಾಳಿಯ ಬೆದರಿಕೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಹೆಚ್ಚುವರಿಯಾಗಿ 25 ಸಾವಿರ ಕೇಂದ್ರ ಸಶಸ್ತ್ರ ಪಡೆ ಸಿಬ್ಬಂದಿಯನ್ನು ರವಾನಿಸಿದ್ದನ್ನು ಇಲ್ಲಿ ಸ್ಮರಿಸಬಹುದು.