ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದ ವಿವಿಧೆಡೆ ಚುನಾವಣಾ ತಂತ್ರಗಾರಿಕೆ, ಪ್ರಚಾರ ಪ್ರಕ್ರಿಯೆಯಲ್ಲಿ ತೊಡಗಿರುವ ಬಿಜೆಪಿ ಅಧ್ಯಕ್ಷ ಅಮಿತ್‌ ಶಾ, ಇಂದು ಹಾವೇರಿ ಹಾಗೂ ಬಾಗಲಕೋಟೆ ಜಿಲ್ಲೆಗೆ ಭೇಟಿ ನೀಡಲಿದ್ದಾರೆ.
ಬೆಂಗಳೂರು : ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದ ವಿವಿಧೆಡೆ ಚುನಾವಣಾ ತಂತ್ರಗಾರಿಕೆ, ಪ್ರಚಾರ ಪ್ರಕ್ರಿಯೆಯಲ್ಲಿ ತೊಡಗಿರುವ ಬಿಜೆಪಿ ಅಧ್ಯಕ್ಷ ಅಮಿತ್ ಶಾ, ಇಂದು ಹಾವೇರಿ ಹಾಗೂ ಬಾಗಲಕೋಟೆ ಜಿಲ್ಲೆಗೆ ಭೇಟಿ ನೀಡಲಿದ್ದಾರೆ.
ಮೊದಲಿಗೆ, ಹಾವೇರಿ ಜಿಲ್ಲೆಯಲ್ಲಿರುವ ಕನಕದಾಸರ ಜನ್ಮಭೂಮಿಯಾಗಿರುವ ಕಾಗಿನೆಲೆಯಲ್ಲಿ ನಡೆಯಲಿರುವ ಬಿಜೆಪಿ ಹಿಂದುಳಿದ ವರ್ಗಗಳ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ಶಾ ಅವರೊಂದಿಗೆ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರೂ ಭಾಗವಹಿಸಲಿದ್ದು, ಸುಮಾರು 2 ಲಕ್ಷಕ್ಕೂ ಅಧಿಕ ಮಂದಿ ಸೇರುವ ನಿರೀಕ್ಷೆಯಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಸಂಜೆ 5.30ಕ್ಕೆ ಬಾಗಲಕೋಟೆ ಜಿಲ್ಲೆ ಬಾದಾಮಿಯ ಶಿವಯೋಗ ಮಂದಿರಕ್ಕೆ ತೆರಳಲಿರುವ ಅಮಿತ್ ಶಾ ಅವರು, ಅಲ್ಲಿ ಪಂಚಾಚಾರ್ಯ ಶ್ರೀಗಳೊಂದಿಗೆ ಚರ್ಚೆ ನಡೆಸಲಿದ್ದಾರೆ. ವೀರಶೈವ- ಲಿಂಗಾಯತ ಪ್ರತ್ಯೇಕ ಧರ್ಮದ ವಿವಾದ ಹಿನ್ನೆಲೆಯಲ್ಲಿ ಈ ಭೇಟಿ ಅತ್ಯಂತ ಮಹತ್ವದ್ದು ಎಂದು ಹೇಳಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ನೆಲವಾದ ಮೈಸೂರು ಹಾಗೂ ಜೆಡಿಎಸ್ ಭದ್ರಕೋಟೆಯಾದ ಮಂಡ್ಯಗಳಲ್ಲಿ ಚುನಾವಣಾ ಪ್ರಚಾರ ಪ್ರವಾಸವನ್ನು ಮುಗಿಸಿರುವ ಅಮಿತ್ ಶಾ ನಿಗದಿಯಂತೆ ಸೋಮವಾರ ಬೆಳಗಾವಿ ಹಾಗೂ ಬಾಗಲಕೋಟೆಯಲ್ಲಿ ನಡೆಯಬೇಕಿದ್ದ ಕಾರ್ಯಕ್ರಮಗಳಲ್ಲಿ ಭಾಗವಹಿಸಬೇಕಿತ್ತು. ಆದರೆ ರಾಜ್ಯಸಭೆಯಲ್ಲಿ ಮಹತ್ವದ ಚರ್ಚೆ ಇರುವ ಕಾರಣ ಸೋಮವಾರ ನಡೆಯಬೇಕಿದ್ದ ಕಾರ್ಯಕ್ರಮದಲ್ಲಿ ಅಮಿತ್ ಶಾ ಪಾಲ್ಗೊಳ್ಳಲು ಸಾಧ್ಯವಾಗಿಲ್ಲ. ಈ ಕಾರ್ಯಕ್ರಮಗಳನ್ನು ಏ.12 ಮತ್ತು 13ಕ್ಕೆ ಮುಂದೂಡಲಾಗಿದೆ ಎಂದು ಬೆಳಗಾವಿ ಜಿಲ್ಲಾ ಬಿಜೆಪಿ ಮೂಲಗಳು ತಿಳಿಸಿವೆ.
