ಸಾರ್ವಜನಿಕರಿಗೆ ಉತ್ತಮ ವೈದ್ಯಕೀಯ ಸೇವೆ ನೀಡುವ ಸಂಬಂಧ ಸರ್ಕಾರ ಜಾರಿಗೊಳಿಸಿರುವ ಎಲ್ಲಾ ಆರೋಗ್ಯ ಯೋಜನೆಗಳನ್ನು ಒಟ್ಟುಗೂಡಿಸಿ ನವೆಂಬರ್ 1ರಿಂದ ‘ಆರೋಗ್ಯ ಭಾಗ್ಯ’ ಯೋಜನೆಗೆ ಚಾಲನೆ ನೀಡುತ್ತಿದ್ದೇವೆ. ಇದರಡಿ ಬಿಪಿಎಲ್ ಹಾಗೂ ಎಪಿಎಲ್ ಪಡಿತರ ಚೀಟಿದಾರರಿಗೂ ಅತಿ ಕಡಿಮೆ ದರದಲ್ಲಿ ಚಿಕಿತ್ಸೆ ದೊರೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ಬೆಂಗಳೂರು: ಸಾರ್ವಜನಿಕರಿಗೆ ಉತ್ತಮ ವೈದ್ಯಕೀಯ ಸೇವೆ ನೀಡುವ ಸಂಬಂಧ ಸರ್ಕಾರ ಜಾರಿಗೊಳಿಸಿರುವ ಎಲ್ಲಾ ಆರೋಗ್ಯ ಯೋಜನೆಗಳನ್ನು ಒಟ್ಟುಗೂಡಿಸಿ ನವೆಂಬರ್ 1ರಿಂದ ‘ಆರೋಗ್ಯ ಭಾಗ್ಯ’ ಯೋಜನೆಗೆ ಚಾಲನೆ ನೀಡುತ್ತಿದ್ದೇವೆ. ಇದರಡಿ ಬಿಪಿಎಲ್ ಹಾಗೂ ಎಪಿಎಲ್ ಪಡಿತರ ಚೀಟಿದಾರರಿಗೂ ಅತಿ ಕಡಿಮೆ ದರದಲ್ಲಿ ಚಿಕಿತ್ಸೆ ದೊರೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ನಗರದ ವಿಕ್ಟೋರಿಯಾ ಆಸ್ಪತ್ರೆ ಆವರಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ನೆಫ್ರೋ ಯುರಾಲಜಿ ಸಂಸ್ಥೆಯ ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ ಮತ್ತು ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯದ ವಿವಿಧ ಕಟ್ಟಡಗಳ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಸರ್ಕಾರವು ಬಡವರಿಗೆ ಅತ್ಯುತ್ತಮ ಆರೋಗ್ಯ ಸೇವೆ ನೀಡುವ ನಿಟ್ಟಿನಲ್ಲಿ ಎಲ್ಲಾ ರೀತಿಯ ಕ್ರಮಗಳನ್ನೂ ಕೈಗೊಂಡಿದೆ. ಇದರ ಪ್ರಕಾರ ಪ್ರಸ್ತುತ ಜಾರಿಯಲ್ಲಿರುವ ಯಶಸ್ವಿನಿ, ಆರೋಗ್ಯ ಶ್ರೀ ಸೇರಿದಂತೆ ವಿವಿಧ ಸರ್ಕಾರಿ ಯೋಜನೆಗಳನ್ನು ಒಟ್ಟುಗೂಡಿಸಿ ಎಲ್ಲಾ ಎಪಿಎಲ್ -ಬಿಪಿಎಲ್ ಕಾರ್ಡ್’ದಾರರಿಗೂ ಆರೋಗ್ಯ ಭಾಗ್ಯ ಯೋಜನೆ ನೀಡಲಾಗುವುದು. ಇದರಡಿ ಬಿಪಿಎಲ್ ಪಡಿತರ ಚೀಟಿದಾರರಿಗೆ ಉಚಿತ ಚಿಕಿತ್ಸೆ ದೊರೆತರೆ, ಎಪಿಎಲ್ ಪಡಿತರ ಚೀಟಿದಾರರಿಗೆ ಕಡಿಮೆ ದರದಲ್ಲಿ ವೈದ್ಯಕೀಯ ಸೇವೆ ಲಭಿಸಲಿದೆ ಎಂದರು.
ಪ್ರತಿ ಜಿಲ್ಲೆಗೂ ವೈದ್ಯಕೀಯ ಕಾಲೇಜು: ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ವೈದ್ಯಕೀಯ ಕಾಲೇಜು ಆರಂಭಿಸಲಾಗುವುದು. ಸದ್ಯ 16 ವೈದ್ಯಕೀಯ ಕಾಲೇಜುಗಳಿದ್ದು, ಮುಂದಿನ ವರ್ಷದಲ್ಲಿ ಬೌರಿಂಗ್ ಆಸ್ಪತ್ರೆ ಸೇರಿ 6 ಜಿಲ್ಲೆಗಳಲ್ಲಿ ಒಟ್ಟು 7 ವೈದ್ಯಕೀಯ ಕಾಲೇಜು ನಿರ್ಮಾಣಕ್ಕೆ ಚಾಲನೆ ನೀಡಲಾಗುತ್ತಿದೆ ಎಂದು ಸಿದ್ದರಾಮಯ್ಯ ಹೇಳಿದರು.
ನೆಫ್ರೋ ಯೂರಾಲಜಿ ಸ್ಥಳಾಂತರಕ್ಕೆ ಮನವಿ: ಮುಖ್ಯಮಂತ್ರಿಗಳ ಭಾಷಣಕ್ಕೂ ಮೊದಲು ಮಾತನಾಡಿದ ವಿಧಾನಪರಿಷತ್ ಸದಸ್ಯ ರಾಮಚಂದ್ರ ಗೌಡ, ವಿಕ್ಟೋರಿಯಾ ಆಸ್ಪತ್ರೆ ಆವರಣದಲ್ಲಿ ಜಾಗದ ಕೊರತೆ ಇದೆ. ಹೀಗಾಗಿ ನೆಫ್ರೋ ಯೂರಾಲಜಿ ಸಂಸ್ಥೆಯನ್ನು ಹಿಂದೆ ಗುರುತಿಸಿದ್ದ ಆನೆಕಲ್‌ನ 15 ಎಕರೆ ವಿಸ್ತೀರ್ಣದ ಜಾಗಕ್ಕೆ ಸ್ಥಳಾಂತರಿಸಬೇಕು ಎಂದು ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ, ಅಗತ್ಯವಿದ್ದರೆ ಮಾತ್ರ ನೆಫ್ರೋ ಯೂರಾಲಜಿಯನ್ನು ಸ್ಥಳಾಂತರಿಸಲಾಗುತ್ತದೆ ಎಂದರು.
ಈ ವೇಳೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ್, ಶಾಸಕ ಜಮೀರ್ ಅಹಮದ್ ಖಾನ್, ಅಧಿಕಾರಿಗಳಾದ ವಿ. ಮಂಜುಳ, ಪ್ರದೀಪ್‌ಸಿಂಗ್ ಖರೋಲ ಇದ್ದರು.
