ಮಂಗಳೂರು: ಇತ್ತೀಚೆಗೆ ಅಯೋಧ್ಯೆ ರಾಮಮಂದಿರ ವಿಚಾರವಾಗಿ ಹೇಳಿಕೆ ನೀಡಿದ್ದ ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ ಅವರನ್ನು ಎನ್‌ಕೌಂಟರ್‌ ಮಾಡುವಂತೆ ಒತ್ತಾಯಿಸುವ ಆಡಿಯೋ ಬಿಡುಗಡೆ ಮಾಡಿದವರ ವಿರುದ್ಧ ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ. 

ಈ ಪ್ರಕರಣದ ಆರೋಪಿಗಳನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳುವಂತೆ ಮಾಜಿ ಶಾಸಕ ಜೆ.ಆರ್‌. ಲೋಬೊ ಗುರುವಾರ ಮಂಗಳೂರು ನಗರ ಪೊಲೀಸ್‌ ಆಯುಕ್ತರಿಗೆ ದೂರು ನೀಡಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೂಜಾರಿ ಅವರು ಸ್ಪಷ್ಟವಾಗಿ ಹೇಳಿಕೆ ನೀಡಿದ್ದರೂ ಕೆಲವರು ತಪ್ಪಾಗಿ ಅರ್ಥೈಸಿಕೊಂಡಿದ್ದಾರೆ. ನಾವೆಲ್ಲರೂ ದೇವರ ಮೇಲೆ ನಂಬಿಕೆ ಇಟ್ಟಿರುವುದರಿಂದ ದೇವಾಲಯ, ಚಚ್‌ರ್‍, ಮಸೀದಿಗಳು ಬೇಕು. ಹಾಗಾಗಿ ಅವರ ಹೇಳಿಕೆಯನ್ನು ತಪ್ಪಾಗಿ ಗ್ರಹಿಸಬಾರದು ಎಂದು ಮನವಿ ಮಾಡಿದರು.

ಕುದ್ರೋಳಿ ಗೋಕರ್ಣನಾಥ ದೇವಾಲಯದಲ್ಲಿ ಇತ್ತೀಚೆಗೆ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವನ್ನು ಬೆಂಬಲಿಸಿ ಪೂಜಾರಿ ಹೇಳಿಕೆ ನೀಡಿದ್ದರು. ಇದರಿಂದ ಆಕ್ರೋಶಗೊಂಡ ವ್ಯಕ್ತಿಯೋರ್ವ ‘ಪೂಜಾರಿ ಅವರನ್ನು ಎನ್‌ಕೌಂಟರ್‌ ಮಾಡಬೇಕು’ ಎಂದು ಒತ್ತಾಯಿಸುವ ಆಡಿಯೊ ಮಾಡಿ ಜಾಲತಾಣಗಳಲ್ಲಿ ಹರಿಯಬಿಟ್ಟಿದ್ದ.