ಬೆಂಗಳೂರಿನಲ್ಲಿ ಸಂಚಾರ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ, ಪಾನಮತ್ತರಾಗಿದ್ದ 26 ಖಾಸಗಿ ಶಾಲಾ ವಾಹನ ಚಾಲಕರು ಸಿಕ್ಕಿಬಿದ್ದಿದ್ದಾರೆ. ಅಲ್ಲದೆ, ಏಕಮುಖ ಸಂಚಾರ ನಿಯಮ ಉಲ್ಲಂಘಿಸಿದ 5,458 ಪ್ರಕರಣಗಳನ್ನು ದಾಖಲಿಸಿ, ಸಾರ್ವಜನಿಕರ ಸುರಕ್ಷತೆಗೆ ಕ್ರಮ ಕೈಗೊಳ್ಳಲಾಗಿದೆ.

ಬೆಂಗಳೂರು: ನಿಶೆಯಲ್ಲಿದ್ದ ಕೆಲ ಖಾಸಗಿ ಶಾಲಾ ವಾಹನಗಳ ಚಾಲಕರಿಗೆ ಶುಕ್ರವಾರ ಬೆಳ್ಳಂಬೆಳಗ್ಗೆ ಸಂಚಾರ ವಿಭಾಗದ ಪೊಲೀಸರು ಬಿಸಿ ಮುಟ್ಟಿಸಿ ಮತ್ತು ಇಳಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ನಗರ ವ್ಯಾಪ್ತಿಯಲ್ಲಿ ಪಾನಮತ್ತ ಖಾಸಗಿ ಶಾಲಾ ವಾಹನಗಳ ಚಾಲಕರ ವಿರುದ್ಧ ಬೆಳಗ್ಗೆ 7 ರಿಂದ 10 ಗಂಟೆವರೆಗೆ ಸಂಚಾರ ವಿಭಾಗದ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದರು. ಈ ವೇಳೆ ಒಟ್ಟು 510 ವಾಹನಗಳ ತಪಾಸಣೆ ನಡೆಸಿದ ಪೊಲೀಸರು, ಪಾನಮತ್ತರಾಗಿದ್ದ 26 ಚಾಲಕರ ವಿರುದ್ಧ ಐಎಂವಿ ಕಾಯ್ದೆ ಪ್ರಕರಣ ದಾಖಲಿಸಿದ್ದಾರೆ. ಅಲ್ಲದೆ ಈ ಚಾಲಕರ ಚಾಲನಾ ಪರವಾನಿಗೆ ರದ್ದುಪಡಿಸುವಂತೆ ಸಾರಿಗೆ ಇಲಾಖೆಗೆ ರವಾನಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಏಕಮುಖ ಸಂಚಾರ: 

ಕಾನೂನು ಉಲ್ಲಂಘಿಸಿ ಏಕಮುಖ ಸಂಚಾರ ರಸ್ತೆಯಲ್ಲಿ ವಾಹನ ಚಲಾಯಿಸಿದವರಿಗೂ ಪೊಲೀಸರು ದಂಡಿಸಿದ್ದಾರೆ. ಈ ಸಂಬಂಧ ಬುಧವಾರ ಮತ್ತು ಗುರುವಾರ ಸಂಚಾರ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದ್ದು, ಈ ವೇಳೆ ಒಟ್ಟು 5,458 ಪ್ರಕರಣಗಳನ್ನು ದಾಖಲಿಸಿದ್ದಾರೆ. ಸಾರ್ವಜನಿಕರ ಸುರಕ್ಷತಾ ಸಂಚಾರವನ್ನು ಗಮನದಲ್ಲಿಟ್ಟುಕೊಂಡು ಈ ವಿಶೇಷ ಕಾರ್ಯಾಚರಣೆ ನಿರಂತರವಾಗಿ ಮುಂದುವರಿಸಲಾಗುತ್ತದೆ ಎಂದು ಜಂಟಿ ಆಯುಕ್ತರು (ಸಂಚಾರ) ತಿಳಿಸಿದ್ದಾರೆ.

ನಗರದಲ್ಲಿ ರಸ್ತೆ ಅಪಘಾತಗಳನ್ನು ತಡೆಗಟ್ಟುವ ಸಲುವಾಗಿ ಏಕಮುಖ ರಸ್ತೆಗಳಲ್ಲಿ ವಿರುದ್ಧವಾಗಿ ವಾಹನಗಳನ್ನು ಚಲಾಯಿಸುವ ಚಾಲಕರು ಮತ್ತು ಸವಾರರ ವಿರುದ್ಧ ಕ್ರಮ ಜರುಗಿಸಲಾಗುತ್ತಿದೆ ಎಂದು ಎಚ್ಚರಿಕೆ ನೀಡಿದ್ದಾರೆ.

------ಲೋಕಭವನಕ್ಕೆ ಹುಸಿ ಬಾಂಬ್‌ ಬೆದರಿಕೆ ಕರೆ

ಬೆಂಗಳೂರು: ಲೋಕ ಭವನಕ್ಕೆ ಬಾಂಬ್ ಇಟ್ಟು ಸ್ಫೋಟಿಸುವುದಾಗಿ ಕಿಡಿಗೇಡಿಯೊಬ್ಬ ಹುಸಿ ಬೆದರಿಕೆ ಸಂದೇಶ ಕಳುಹಿಸಿದ್ದ ಸಂಗತಿ ತಡವಾಗಿ ಬೆಳಕಿಗೆ ಬಂದಿದೆ.

ಜ.14 ರಂದು ಲೋಕಭವನದ ಅಧಿಕೃತ ಇ.ಮೇಲ್‌ಗೆ gaina_ramesh@outlook.com ಹೆಸರಿನಿಂದ ಬೆದರಿಕೆ ಮೇಲ್ ಬಂದಿದೆ. ಕೂಡಲೇ ಈ ಬಗ್ಗೆ ಪೊಲೀಸರಿಗೆ ರಾಜ್ಯಪಾಲರ ಕಚೇರಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ತಕ್ಷಣವೇ ಲೋಕಭವನಕ್ಕೆ ತೆರಳಿ ಬಾಂಬ್ ನಿಷ್ಕ್ರಿಯ ದಳ ಜತೆ ಪೊಲೀಸರು ತಪಾಸಣೆ ನಡೆಸಿದಾಗ ಹುಸಿ ಕರೆ ಎಂಬುದು ಖಚಿತವಾಗಿದೆ.

ಆರ್‌ಡಿಎಕ್ಸ್ ಬಾಂಬ್ ಇಟ್ಟಿದ್ದು ಜ.14 ರಂದು ಮಧ್ಯಾಹ್ನ ಬಾಂಬ್ ಸ್ಫೋಟಿಸುವುದಾಗಿ ಕಿಡಿಗೇಡಿ ಬೆದರಿಸಿದ್ದ. ಈ ಸಂಬಂಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.