ಶಿಕ್ಷಣ ಮತ್ತು ಉದ್ಯೋಗದಲ್ಲಿ ಜಾತಿ ಆಧಾರಿತ ಮೀಸಲಾತಿ ವಿರೋಧಿಸಿ ವಿವಿಧ ಸಂಘಟನೆಗಳು ಇಂದು ಭಾರತ್‌ ಬಂದ್‌ಗೆ ಕರೆ ನೀಡಿವೆ.

ನವದೆಹಲಿ: ಶಿಕ್ಷಣ ಮತ್ತು ಉದ್ಯೋಗದಲ್ಲಿ ಜಾತಿ ಆಧಾರಿತ ಮೀಸಲಾತಿ ವಿರೋಧಿಸಿ ವಿವಿಧ ಸಂಘಟನೆಗಳು ಇಂದು ಭಾರತ್‌ ಬಂದ್‌ಗೆ ಕರೆ ನೀಡಿವೆ.

 ಏ.2ರಂದು ದಲಿತ ಪರ ಸಂಘಟನೆಗಳು ಕರೆ ನೀಡಿದ್ದ ಭಾರತ್‌ ಬಂದ್‌ ವೇಳೆ ವ್ಯಾಪಕ ಹಿಂಸಾಚಾರ ನಡೆದು 10ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಇಂತಹ ಯಾವುದೇ ಅಹಿತರ ಘಟನೆಗಳು ನಡೆಯದಂತೆ ಕಟ್ಟೆಚ್ಚರ ವಹಿಸುವಂತೆ ಕೇಂದ್ರ ಸರ್ಕಾರ ಎಲ್ಲಾ ರಾಜ್ಯಗಳಿಗೆ ಸೂಚನೆ ನೀಡಿದೆ.

ಒಂದು ವೇಳೆ ತಮ್ಮ ವ್ಯಾಪ್ತಿಯಲ್ಲಿ ಯಾವುದೇ ಹಿಂಸಾಚಾರ ನಡೆದರೆ ಅದಕ್ಕೆ ಜಿಲ್ಲಾಧಿಕಾರಿಗಳು ಮತ್ತು ಎಸ್‌ಪಿಗಳನ್ನು ವೈಯಕ್ತಿಕವಾಗಿ ಹೊಣೆಗಾರರನ್ನಾಗಿ ಮಾಡಲಾಗುವುದು ಗೃಹ ಸಚಿವಾಲಯ ತಿಳಿಸಿದೆ.

ಜಾಟ್‌, ಗುಜ್ಜರ್‌, ಬ್ರಾಹ್ಮಣ ಮತ್ತು ರಜಪೂತರನ್ನು ಒಳಗೊಂಡ ‘ಸರ್ವ ಸಮಾಜ್‌’ ಸಂಘಟನೆ ಮಂಗಳವಾರದ ಬಂದ್‌ಗೆ ಕರೆ ನೀಡಿದೆ. ಈ ಸಂಬಂಧ ‘ಏಪ್ರಿಲ್‌ 10 ಭಾರತ್‌ ಬಂದ್‌ ಸಂಘರ್ಷ ಸಮಿತಿ’ಯನ್ನು ರಚಿಸಲಾಗಿದೆ. ಸಾಮಾಜಿಕ ಜಾಲತಾಣಗಳು ಮತ್ತು ವಾಟ್ಸಪ್‌ನಲ್ಲಿ ಬಂದ್‌ ಬಗ್ಗೆ ಪ್ರಚಾರ ಮಾಡಲಾಗುತ್ತಿದೆ. ಎಸ್‌ಸಿ/ಎಸ್‌ಟಿ ಕಾಯ್ದೆಯನ್ನು ದುರ್ಬಲಗೊಳಿಸಿದ್ದರ ವಿರುದ್ಧ ಏ.2ರಂದು ಕರೆ ನೀಡಿದ ಬಂದ್‌ಗೆ ವಿರುದ್ಧವಾಗಿ ಭಾರತ್‌ ಬಂದ್‌ಗೆ ಕರೆ ನೀಡಲಾಗಿದೆ ಎಂದು ಹೇಳಲಾಗುತ್ತಿದೆ.

ಈ ಹಿನ್ನೆಲೆಯಲ್ಲಿ ಸೂಕ್ಷ್ಮ ಸ್ಥಳಗಳಲ್ಲಿ ಕಾವಲನ್ನು ಹೆಚ್ಚಿಸುವಂತೆ ಮತ್ತು ಯಾವುದೇ ಜೀವ ಹಾನಿ ನಡೆಯುವುದನ್ನು ತಡೆಯುವಂತೆ ಸೂಚನೆ ರಾಜ್ಯಗಳಿಗೆ ಸಲಹೆ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.