ಬಿಜೆಪಿ ಮುಖಂಡ ತಮ್ಮ ಬೆಂಬಲಿಗರೊಂದಿಗೆ ಕಾಂಗ್ರೆಸ್ ಸೇರಿದ್ದಾರೆ. ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಈ ಮೂಲಕ ಶಾಕ್ ನೀಡಿದ್ದಾರೆ.
ಬೆಂಗಳೂರು : ಮೊಳಕಾಲ್ಮುರಿನ ಬಿಜೆಪಿ ಮುಖಂಡ, ಮಾಜಿ ಶಾಸಕ ತಿಪ್ಪೇಸ್ವಾಮಿ ಕೆಪಿಸಿಸಿ ಕಚೇರಿಯಲ್ಲಿ ತಮ್ಮ ಬೆಂಬಲಿಗರ ಜೊತೆ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸಮ್ಮುಖದಲ್ಲಿ ಕಾಂಗ್ರೆಸ್ ಸೇರಿದ ತಿಪ್ಪೇಸ್ವಾಮಿ ಅವರಿಗೆ ಪಕ್ಷದ ಧ್ವಜ ನೀಡಿ ನಾಯಕರು ಪಕ್ಷಕ್ಕೆ ಬರಮಾಡಿಕೊಂಡರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಶ್ರೀರಾಮುಲು ವಿರುದ್ಧ ಪರಾಭವಗೊಂಡಿದ್ದರು.
ಈ ವೇಳೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ತಿಪ್ಪೇಸ್ವಾಮಿ ಅವರ ಸೇರ್ಪಡೆಯಿಂದ ಪಕ್ಷಕ್ಕೆ ಮತ್ತಷ್ಟುಬಲಬಂದಂತಾಗಿದ್ದು, ಚಿತ್ರದುರ್ಗದಲ್ಲಿ ಮುಂದಿನ ಲೋಕಸಭಾ ಚುನಾವಣೆಯಲ್ಲೂ ಪಕ್ಷದ ಅಭ್ಯರ್ಥಿ ಮತ್ತಷ್ಟುಹೆಚ್ಚಿನ ಮತಗಳೊಂದಿಗೆ ಗೆಲ್ಲುವ ವಿಶ್ವಾಸ ಬಂದಿದೆ. ಪಕ್ಷದ ತತ್ವ ಸಿದ್ಧಾಂತಗಳನ್ನು ಒಪ್ಪಿ ಬಂದಿರುವ ತಿಪ್ಪೇಸ್ವಾಮಿ ಅವರಿಗೆ ಉತ್ತಮ ಜವಾಬ್ದಾರಿ ನೀಡಲಾಗುವುದು ಎಂದರು.
ಸಿದ್ದರಾಮಯ್ಯ ಸುವರ್ಣಯುಗ:
ಮಾಜಿ ಸಚಿವ ಎಚ್.ಆಂಜನೇಯ ಮಾತನಾಡಿ, ಸಿದ್ದರಾಮಯ್ಯ ಆಡಳಿತಾವಧಿ ಸುವರ್ಣ ಯುಗವಾಗಿತ್ತು. ಎಲ್ಲ ವರ್ಗದವರಿಗೂ ಪ್ರಾತಿನಿಧ್ಯ ನೀಡಲಾಗಿತ್ತು. ಆದರೆ, ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಹಿನ್ನಡೆಯಾಯಿತು. ಅದಕ್ಕೆ ಬೇರೆ ಬೇರೆ ಕಾರಣಗಳಿವೆ. ಆ ಬಗ್ಗೆ ಈಗ ಪ್ರತಿಕ್ರಿಯೆ ಬೇಕಿಲ್ಲ. ಆದರೆ ಕಾಂಗ್ರೆಸ್‌ಗೆ ಈಗಲೂ ಭದ್ರ ನೆಲೆಯಿದೆ ಎಂಬುದು ಸುಳ್ಳಲ್ಲ. ಅದನ್ನು ಅರಿತೇ ತಿಪ್ಪೇಸ್ವಾಮಿ ಕಾಂಗ್ರೆಸ್ ಸೇರಿದ್ದಾರೆ. ಅವರ ಸೇರ್ಪಡೆಯಿಂದ ಮತ್ತಷ್ಟುಬಲ ಬಂದಿದೆ. ಕಳೆದ ಬಾರಿ ಮೋದಿ ಅಲೆಯಲ್ಲೂ ಚಿತ್ರದುರ್ಗದಲ್ಲಿ ಕಾಂಗ್ರೆಸ್ ಗೆದ್ದಿತ್ತು. ಈಗ ಮತ್ತೆ ಲೋಕಸಭಾ ಕ್ಷೇತ್ರದಲ್ಲಿ ಗೆಲ್ಲುವುದರಲ್ಲಿ ಸಂಶಯವೇ ಇಲ್ಲ ಎಂದರು.
ಕಾರ್ಯಕ್ರಮದಲ್ಲಿ ಸಂಸದ ಚಂದ್ರಪ್ಪ, ಮಾಜಿ ಸಚಿವ ಸುಧಾಕರ್, ಶಾಸಕ ರಘುಮೂರ್ತಿ ಮತ್ತಿತರರು ಹಾಜರಿದ್ದರು.
