ಸಂಘಟನೆಯಲ್ಲಿ ಈಗಾಗಲೇ ನಮ್ಮ ಪಕ್ಷದಲ್ಲಿ ಮಹಿಳೆಯರಿಗೆ ಶೇ.33 ರಷ್ಟು ಮೀಸಲಾತಿ ಒದಗಿಸಲಾಗಿದೆ. ಬರುವ ವಿಧಾನಸಭಾ ಚುನಾವಣೆಯಲ್ಲಿ ಪ್ರತಿಯೊಂದು ಜಿಲ್ಲೆಗಳಲ್ಲಿ 6ಕ್ಕಿಂತ ಹೆಚ್ಚು ವಿಧಾನಸಭಾ ಕ್ಷೇತ್ರಗಳಿದ್ದರೆ 2 ಸೀಟುಗಳು 6ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ ಕನಿಷ್ಠ 1 ಸೀಟುಗಳನ್ನು ಮಹಿಳಾ ಅಭ್ಯರ್ಥಿಗೆ ಕೊಡುವಂತೆ ರಾಜ್ಯಾಧ್ಯಕ್ಷರಿಗೆ ಕೋರಿದ್ದೇವೆ.

ಹರಪನಹಳ್ಳಿ(ನ.26): ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪ್ರತಿ ಜಿಲ್ಲೆಯಲ್ಲಿ ಒಂದು ವಿಧಾನಸಭಾ ಕ್ಷೇತ್ರಕ್ಕೆ ಮಹಿಳೆಯರಿಗೆ ಬಿಜೆಪಿ ಟಿಕೆಟ್ ನೀಡುವುದಾಗಿ ಪಕ್ಷದ ವರಿಷ್ಠರು ಭರವಸೆ ನೀಡಿದ್ದಾರೆ ಎಂದು ಬಿಜೆಪಿ ಮಹಿಳಾ ಮೋರ್ಚಾ ರಾಜ್ಯಾಧ್ಯಕ್ಷೆ ಭಾರತಿ ಶೆಟ್ಟಿ ಹೇಳಿದರು. ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಸಂಘಟನೆಯಲ್ಲಿ ಈಗಾಗಲೇ ನಮ್ಮ ಪಕ್ಷದಲ್ಲಿ ಮಹಿಳೆಯರಿಗೆ ಶೇ.33 ರಷ್ಟು ಮೀಸಲಾತಿ ಒದಗಿಸಲಾಗಿದೆ. ಬರುವ ವಿಧಾನಸಭಾ ಚುನಾವಣೆಯಲ್ಲಿ ಪ್ರತಿಯೊಂದು ಜಿಲ್ಲೆಗಳಲ್ಲಿ 6ಕ್ಕಿಂತ ಹೆಚ್ಚು ವಿಧಾನಸಭಾ ಕ್ಷೇತ್ರಗಳಿದ್ದರೆ 2 ಸೀಟು ಗಳು 6ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ ಕನಿಷ್ಠ 1 ಸೀಟುಗಳನ್ನು ಮಹಿಳಾ ಅಭ್ಯರ್ಥಿಗೆ ಕೊಡುವಂತೆ ರಾಜ್ಯಾಧ್ಯಕ್ಷರಿಗೆ ಕೋರಿದ್ದೇವೆ. ವರಿಷ್ಠರು ಸಹ ಕನಿಷ್ಠ ಜಿಲ್ಲೆಗೊಬ್ಬರಿಗೆ ಮಹಿಳೆಯರಿಗೆ ಟಿಕೆಟ್ ನೀಡಲು ಒಪ್ಪಿದ್ದಾರೆ ಎಂದು ತಿಳಿಸಿದರು.

ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ರಕ್ಷಣೆ ಇಲ್ಲವಾಗಿದೆ. ಮುಖ್ಯಮಂತ್ರಿಯವರು ಎಲ್ಲದಕ್ಕೂ ಉಡಾಫೆ ಉತ್ತರ ನೀಡುತ್ತಾರೆ. ಅವರಿಗೆ ಜನರ ಬಗ್ಗೆ ಕಾಳಜಿ ಇಲ್ಲವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಧರ್ಮ, ಜಾತಿ ಒಡೆಯುವ ಕೆಲಸ ಮಾಡುತ್ತಿದ್ದಾರೆ. ಒಬ್ಬರು ಪ್ರತ್ಯೇಕ ಧರ್ಮ ಕೇಳಿದರೆ ನಾಳೆ ಮರಾಠ, ಬಂಟ್, ಕೊಂಕಣಿ ಹೀಗೆ ಎಲ್ಲರೂ ಪ್ರತ್ಯೇಕ ಧರ್ಮ ಕೇಳುತ್ತಾರೆ ಎಂದರು. ಮೌಢ್ಯ ನಿಷೇಧ ಕಾಯಿದೆ ಕೇವಲ ಹಿಂದೂ ಧರ್ಮಕ್ಕೆ ಸೀಮಿತವಾಗಬಾರದು. ಎಲ್ಲ ಧರ್ಮಕ್ಕೂ ಅನ್ವಯಿಸಬೇಕು.

ಸಿದ್ದರಾಮಯ್ಯ ವೋಟ್ ಬ್ಯಾಂಕ್ ರಾಜಕಾರಣ ಮಾಡುತ್ತಿದ್ದಾರೆ ಎಂದು ಆಪಾದಿಸಿದರು. ಮಾಜಿ ಸಚಿವ ಜಿ.ಕರುಣಾಕರ ರೆಡ್ಡಿ, ಬಿಜೆಪಿ ಅಧ್ಯಕ್ಷ ಲಕ್ಷ್ಮಣ, ಮುಖಂಡರಾದ ಕಣವಿಹಳ್ಳಿ ಮಂಜುನಾಥ, ಪುರಸಭಾ ಅಧ್ಯಕ್ಷ ಎಚ್.ಕೆ.ಹಾಲೇಶ, ಲೋಕೇಶ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಜಯಮ್ಮ, ಬಾಗಳಿ ಕೊಟ್ರೇಶಪ್ಪ, ಎಂ.ಪಿ.ನಾಯ್ಕ, ಸಣ್ಣ ಹಾಲಪ್ಪ, ಪ್ರಸನ್ನ, ಸಂತೋಷ ಮತ್ತಿತರರು ಉಪಸ್ಥಿತರಿದ್ದರು.