Asianet Suvarna News Asianet Suvarna News

ಒಂದು ಕಾಲದ ಎಚ್ ಡಿಕೆ ಆಪ್ತ, ಮಂಡ್ಯ ಕಾಂಗ್ರೆಸ್ ಪ್ರಭಾವಿ ಬಿಜೆಪಿಗೆ ?

ಮಾಜಿ ಸಂಸದ ಹಾಗೂ ಕಾಂಗ್ರೆಸ್ ಮುಖಂಡಗೆ ಬಿಜೆಪಿ ಗಾಳ ಹಾಕುತ್ತಿದ್ದು ಮಂಡ್ಯದಿಂದ ಲೋಕಸಭಾ ಚುನಾವಣೆಗೆ ಟಿಕೆಟ್ ನೀಡುವ ಸಾಧ್ಯತೆ ಇದೆ. 

BJP Has Tried To Poach Cheluvarayaswamy
Author
Bengaluru, First Published Oct 4, 2018, 10:40 AM IST

ಬೆಂಗಳೂರು : ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಸಂಘಟನಾ ಪ್ರಭಾವ ಇಲ್ಲದ ಮಂಡ್ಯ ಜಿಲ್ಲೆಯಲ್ಲಿ ನೆಲೆ ಕಂಡುಕೊಳ್ಳಲು ಮುಂದಾಗಿರುವ ಬಿಜೆಪಿ, ಮಾಜಿ ಸಂಸದ ಹಾಗೂ ಕಾಂಗ್ರೆಸ್‌ ಮುಖಂಡ ಎನ್‌.ಚಲುವರಾಯಸ್ವಾಮಿ ಅವರನ್ನು ಕರೆತರುವ ಪ್ರಯತ್ನ ನಡೆಸಿದೆ.

ಆದರೆ, ಜಿಲ್ಲೆಯಲ್ಲಿ ಯಾವುದೇ ವರ್ಚಸ್ಸು ಅಥವಾ ಗೆಲ್ಲುವ ಸಾಮರ್ಥ್ಯ ಇಲ್ಲದ ಬಿಜೆಪಿಗೆ ಚಲುವರಾಯಸ್ವಾಮಿ ವಲಸೆ ಬರುವುದು ತೀರಾ ಅನುಮಾನ. ಆದರೂ ಬಿಜೆಪಿ ನಾಯಕರು ಅವರನ್ನು ಸೆಳೆಯಲು ಮುಂದಾಗಿದ್ದಾರೆ. ಎರಡನೇ ಹಂತದ ಮುಖಂಡರ ಮೂಲಕ ಸಂದೇಶವನ್ನೂ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ.

ಹಾಗೆ ನೋಡಿದರೆ ಚಲುವರಾಯಸ್ವಾಮಿ ಅವರು ವಿಧಾನಸಭಾ ಚುನಾವಣೆಗೂ ಮೊದಲು ಬಿಜೆಪಿಗೆ ವಲಸೆ ಬರುವ ಬಗ್ಗೆ ಒಲವು ಹೊಂದಿದ್ದರು. ಜೆಡಿಎಸ್‌ ತೊರೆದು ಕಾಂಗ್ರೆಸ್ಸಿಗೆ ಸೇರ್ಪಡೆಯಾಗುವ ಮೊದಲು ಬಿಜೆಪಿ ನಾಯಕರ ಜೊತೆ ಮಾತುಕತೆಯೂ ನಡೆದಿತ್ತು. ಆದರೆ, ತಾವು ಮಂಡ್ಯ ಜಿಲ್ಲೆಯಲ್ಲಿ ಸ್ಪರ್ಧಿಸುವುದಿಲ್ಲ. ಬೆಂಗಳೂರು ನಗರದಲ್ಲಿ, ಅದರಲ್ಲೂ ರಾಜರಾಜೇಶ್ವರಿನಗರ ಕ್ಷೇತ್ರದಿಂದ ಟಿಕೆಟ್‌ ನೀಡುವಂತೆ ಬೇಡಿಕೆ ಇಟ್ಟಿದ್ದರು. ಇದಕ್ಕೆ ಬಿಜೆಪಿ ನಾಯಕರು ಒಪ್ಪದೇ ಇದ್ದುದರಿಂದ ಕಾಂಗ್ರೆಸ್ಸಿಗೆ ಸೇರ್ಪಡೆಯಾದರು.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋತಿರುವ ಚಲುವರಾಯಸ್ವಾಮಿ ಅವರು ಕಾಂಗ್ರೆಸ್‌ನಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಬಯಕೆ ಹೊಂದಿದ್ದಾರೆ. ಈಗ ಕಾಂಗ್ರೆಸ್‌ ಮತ್ತು ಜೆಡಿಎಸ್‌ ನಡುವೆ ಲೋಕಸಭಾ ಚುನಾವಣೆಗೆ ಸ್ಥಾನ ಹೊಂದಾಣಿಕೆಯಾದಲ್ಲಿ ಜೆಡಿಎಸ್‌ ಮಂಡ್ಯ ಕ್ಷೇತ್ರವನ್ನು ನೀಡುವಂತೆ ಪಟ್ಟು ಹಿಡಿಯುವುದು ನಿಶ್ಚಿತವಾಗಿದೆ. ಜಿಲ್ಲೆಯ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲೂ ಜೆಡಿಎಸ್‌ ಶಾಸಕರಿದ್ದಾರೆ. ಹೀಗಾಗಿ, ಬಿಜೆಪಿಗೆ ಬನ್ನಿ ಎಂಬ ಆಹ್ವಾನ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.

Follow Us:
Download App:
  • android
  • ios