ನವದೆಹಲಿ(ನ.3): ದೇಶ ಉಳಿಸುವ ಮುನ್ನ ನಿಮ್ಮ ಸ್ಥಾನ ಉಳಿಸಿಕೊಳ್ಳಿ ಎಂದು ಇತ್ತೀಚಿಗೆ ಕಾಂಗ್ರೆಸ್ ಜೊತೆ ಕೈಜೋಡಿಸಿದ ಆಂಧ್ರ ಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರಿಗೆ ಬಿಜೆಪಿ ತಿರುಗೇಟು ನೀಡಿದೆ.

ದೇಶ ಉಳಿಸಲು ಪ್ರತಿಪಕ್ಷಗಳೊಂದಿಗೆ ಕೈಜೋಡಿಸಿ ಎಂದಿದ್ದ ಆಂಧ್ರ ಸಿಎಂ ಹೇಳಿಕೆಗೆ ಪ್ರತಿಕ್ರಿಯಿಸಿದ ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್, ಟಿಡಿಪಿ ಮುಖ್ಯಸ್ಥ ಮೊದಲು ತಮ್ಮ ಸ್ಥಾನ ಉಳಿಸಿಕೊಳ್ಳಲಿ ನಂತರ ದೇಶ ಉಳಿಸುವ ಬಗ್ಗೆ ಚಿಂತಿಸಲಿ ಎಂದು ವ್ಯಂಗ್ಯವಾಡಿದ್ದಾರೆ.

ನಾಯ್ಡು ದೇಶ ಉಳಿಸುವ ಬಗ್ಗೆ ಮಾತನಾಡುವುದು ದೊಡ್ಡ ವಿಚಾರ. ಮೊದಲು ಅವರು ಆಂಧ್ರದಲ್ಲಿ ತಮ್ಮ ಸ್ಥಾನ ಉಳಿಸಿಕೊಳ್ಳಲು ಯತ್ನಿಸಲಿ. ಸದ್ಯದ ಆಂಧ್ರ ಪ್ರದೇಶ ಸರ್ಕಾರ ಜನ ವಿರೋಧಿಯಾಗಿದ್ದು, ಭ್ರಷ್ಟಾಚಾರದಲ್ಲಿ ತೊಡಗಿದೆ. 2019ರ ಚುನಾವಣೆಯಲ್ಲಿ ಟಿಡಿಪಿ ಖಂಡಿತ ಅಧಿಕಾರ ಕಳೆದುಕೊಳ್ಳಲಿದೆ ಎಂದು ಮಾಧವ್ ಅಭಿಪ್ರಾಯಪಟ್ಟಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡಲಿಲ್ಲ ಎಂಬ ಕಾರಣಕ್ಕೆ ಕಳೆದ ಮಾರ್ಚ್ ನಲ್ಲಿ ಬಿಜೆಪಿ ನೇತೃತ್ವದ ಎನ್ ಡಿಎ ತೊರೆದಿದ್ದ ನಾಯ್ಡು, ಎರಡು ದಿನಗಳ ಹಿಂದಷ್ಟೇ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯನ್ನು ಭೇಟಿ ಮಾಡಿ ಪ್ರತಿಪಕ್ಷಗಳ ಮೈತ್ರಿಕೂಟಕ್ಕೆ ಬೆಂಬಲ ಸೂಚಿಸಿದ್ದರು.