Asianet Suvarna News Asianet Suvarna News

ಶಾ - ಬಿಎಸ್‌ವೈ ದಿಢೀರ್‌ ಭೇಟಿಯ ಕಾರಣವೇನು.. ?

ಗುಜರಾತ್ ಗೆ ತೆರಳಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರನ್ನು ಭೇಟಿ ಮಾಡಿದ ಕಾರಣದ ಬಗ್ಗೆ ಇದೀಗ ಬಿಜೆಪಿ ರಾಜ್ಯಾಧ್ಯಕ್ಷ  ಬಿ.ಎಸ್ ಯಡಿಯೂರಪ್ಪ ಮಾಹಿತಿ ನೀಡಿದ್ದಾರೆ. 

BJP  Leader BS Yeddyurappa Says Not Interested in Toppling Kumaraswamy Govt

 ಬೆಂಗಳೂರು :  ಇದೇ ತಿಂಗಳ 29ರಂದು ನಡೆಯಲಿರುವ ರಾಜ್ಯ ಕಾರ್ಯಕಾರಿಣಿ ಸಭೆಯ ವಿಚಾರವಾಗಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರೊಂದಿಗೆ ಚರ್ಚಿಸಲು ಗುಜರಾತ್‌ಗೆ ತೆರಳಿದ್ದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ತಿಳಿಸಿದ್ದಾರೆ.

ಮಂಗಳವಾರ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಧ್ಯಮಗಳಲ್ಲಿ ವರದಿಯಾಗಿರುವಂತೆ ಸಮ್ಮಿಶ್ರ ಸರ್ಕಾರ ಪತನಗೊಳಿಸುವ ಕುರಿತು ಸಮಾಲೋಚನೆ ನಡೆಸುವುದಕ್ಕಾಗಿ ಅಮಿತ್‌ ಶಾ ಅವರನ್ನು ಭೇಟಿ ಮಾಡಿಲ್ಲ. ಸರ್ಕಾರ ಪತನಗೊಳಿಸುವ ಉದ್ದೇಶವೂ ನಮಗಿಲ್ಲ ಎಂದು ಸ್ಪಷ್ಟಪಡಿಸಿದರು.

ಕಾರ್ಯಕಾರಿಣಿ ಸಭೆಗೆ ಆಗಮಿಸುವಂತೆ ಅಮಿತ್‌ ಶಾ ಅವರಿಗೆ ಆಹ್ವಾನ ನೀಡಿದ್ದೇನೆ. ಸಾಧ್ಯವಾದರೆ ಬರುವುದಾಗಿ ಭರವಸೆ ನೀಡಿದ್ದಾರೆ. ಒಂದು ವೇಳೆ ಆಗದಿದ್ದರೆ ತಮ್ಮ ಪರವಾಗಿ ಬೇರೆಯವರನ್ನು ಕಳುಹಿಸುವುದಾಗಿಯೂ ಹೇಳಿದ್ದಾರೆ ಎಂದರು.

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪಕ್ಷ ರಾಜ್ಯದಲ್ಲಿ ಹೆಚ್ಚು ಸ್ಥಾನ ಗಳಿಸಬೇಕು ಎಂಬ ಉದ್ದೇಶವನ್ನು ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್‌ ಶಾ ಅವರು ಹೊಂದಿದ್ದಾರೆ. ಅವರ ಉದ್ದೇಶ ಈಡೇರಿಸಲು ನಾವೆಲ್ಲ ಒಟ್ಟಾಗಿ ಕೆಲಸ ಮಾಡುತ್ತೇವೆ. ಈಗಿನಿಂದಲೇ ಲೋಕಸಭಾ ಚುನಾವಣೆಗೆ ತಯಾರಿ ಆರಂಭಿಸುತ್ತೇವೆ. ಕಾರ್ಯಕಾರಿಣಿ ಸಭೆಯಲ್ಲಿ ಈ ಬಗ್ಗೆ ಸಮಾಲೋಚನೆ ನಡೆಸಲಾಗುವುದು ಎಂದು ತಿಳಿಸಿದರು.

ಸಮ್ಮಿಶ್ರ ಸರ್ಕಾರದ ಬಗ್ಗೆ ಪ್ರತಿಕ್ರಿಯಿಸದಂತೆ ಸೂಚನೆ

ಸಮ್ಮಿಶ್ರ ಸರ್ಕಾರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ಎಲ್ಲ ಬೆಳವಣಿಗೆಗಳನ್ನು ಮೌನವಾಗಿ ಗಮನಿಸಿ. ಆದರೆ, ಪ್ರತಿಕ್ರಿಯೆ ನೀಡಬೇಡಿ ಎಂಬುದಾಗಿ ಪಕ್ಷದ ಶಾಸಕರಿಗೆ ಸೂಚನೆ ನೀಡಿರುವುದಾಗಿ ಇದೇ ವೇಳೆ ಯಡಿಯೂರಪ್ಪ ಮಾಹಿತಿ ನೀಡಿದರು.

ರಾಜ್ಯ ಸರ್ಕಾರದ ಆಂತರಿಕ ಜಂಜಾಟಕ್ಕೂ ಮತ್ತು ನಮಗೂ ಯಾವುದೇ ಸಂಬಂಧವಿಲ್ಲ. ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಒಂದು ಹೇಳಿದರೆ, ಸಮನ್ವಯ ಸಮಿತಿ ಅಧ್ಯಕ್ಷರಾಗಿರುವ ಸಿದ್ದರಾಮಯ್ಯ ಮತ್ತೊಂದು ಹೇಳುತ್ತಾರೆ. ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದರೂ ಇದುವರೆಗೆ ಯಾವುದೇ ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ರಾಜ್ಯದಿಂದ ತೆರವಾಗಿರುವ ಮೂರು ಲೋಕಸಭಾ ಕ್ಷೇತ್ರಗಳ ಉಪಚುನಾವಣೆಯ ಬಗ್ಗೆ ಇನ್ನೂ ಸ್ಪಷ್ಟತೆ ಲಭಿಸಿಲ್ಲ. ಹೀಗಾಗಿ ಇನ್ನೂ ಅಭ್ಯರ್ಥಿಗಳ ತೀರ್ಮಾನ ಆಗಿಲ್ಲ ಎಂದು ಸ್ಪಷ್ಟಪಡಿಸಿದರು.

Follow Us:
Download App:
  • android
  • ios