ಬಳ್ಳಾರಿ [ಜು.14]: ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್‌ ಶಾ ರಾಜ್ಯದ ಸಮ್ಮಿಶ್ರ ಸರ್ಕಾರ ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿದ್ದು, ಬಿಜೆಪಿಯವರು ಕಾಂಗ್ರೆಸ್‌-ಜೆಡಿಎಸ್‌ ಶಾಸಕರನ್ನು ಸೆಳೆಯಲು 30ರಿಂದ 40 ಕೋಟಿ  ರು. ಆಮಿಷವೊಡ್ಡಿದ್ದಾರೆ ಎಂದು ಮಾಜಿ ಸಂಸದ ವಿ.ಎಸ್‌.ಉಗ್ರಪ್ಪ ಗಂಭೀರ ಆರೋಪಿಸಿದ್ದಾರೆ. 

ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಸಕರಿಗೆ ಭಾರೀ ಪ್ರಮಾಣದ ಆಮಿಷವೊಡ್ಡುತ್ತಿದ್ದರೂ ಆದಾಯ ತೆರಿಗೆ ಹಾಗೂ ಜಾರಿ ನಿರ್ದೇಶನಾಲಯದವರು ಏನು ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದರು. 

ಬಿಜೆಪಿಯವರು ಗೋವಾ ಹಾಗೂ ಆಂಧ್ರಪ್ರದೇಶದಲ್ಲೂ ಇದೇ ರೀತಿಯ ಪಕ್ಷಾಂತರ ಕಾರ್ಯ ನಡೆಸಿದ್ದರು. ಇದೀಗ ಕರ್ನಾಟಕದಲ್ಲಿ ಶುರು ಮಾಡಿದ್ದಾರೆ ಎಂದರು. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಆನಂದ್‌ ಸಿಂಗ್‌ ವಿರುದ್ಧ ಪರೋಕ್ಷವಾಗಿ ಹರಿಹಾಯ್ದ ಉಗ್ರಪ್ಪ, ಜನಮೆಚ್ಚಿದ ನಾಯಕ ಎಂದುಕೊಳ್ಳುವವರು ನಿದ್ರಾವಸ್ಥೆಯಲ್ಲಿದ್ದಾರೆ. 

ತುಂಗಭದ್ರಾ ಜಲಾಶಯದ ಹೂಳಿನ ಬಗ್ಗೆ ಮಾತನಾಡಲಿಲ್ಲ. ಸಕ್ಕರೆ ಕಾರ್ಖಾನೆಯ ಸಮಸ್ಯೆ ಬಗ್ಗೆ ಚಕಾರ ಎತ್ತಲಿಲ್ಲ. ಎಲ್ಲಿಂದ ಬಂದಿದ್ದರೋ ಅಲ್ಲಿಗೆ ಹೋಗಲು ಅಡಿಪಾಯ ಗಟ್ಟಿಮಾಡಿಕೊಳ್ಳುತ್ತಿದ್ದಾರೆ ಎಂದು ಟೀಕಿಸಿದರು.