ಕಲಬುರಗಿ/ ಚಿಂಚೋಳಿ[ಮೇ.06]: ಲೋಕಸಭಾ ಚುನಾವಣೆ ಫಲಿತಾಂಶದ ನಂತರ ರಾಜ್ಯ ರಾಜಕೀಯದಲ್ಲಿ ಸಾಕಷ್ಟುಬದಲಾವಣೆ ಆಗಲಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಜೂನ್‌ ಮೊದಲ ವಾರದಲ್ಲಿ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಶಾಸಕ ವಿ. ಸೋಮಣ್ಣ ಭವಿಷ್ಯ ನುಡಿದಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲೋಕಸಭೆ ಮತ್ತು ಸ್ಥಳೀಯ ಚುನಾವಣೆ ನಂತರ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಅಧಿಕಾರದಿಂದ ಕೆಳಗಿಳಿಯಲಿದ್ದಾರೆ. ರಾಜ್ಯ ಸರ್ಕಾರದ ಮೇಲಿನ ಜನರ ನಂಬಿಕೆಗಳು ಧೂಳೀಪಟವಾಗಿವೆ. ನೀರಿನ ಮೇಲಿನ ಗುಳ್ಳೆ ಹೇಗಿದಿಯೋ ಅದೇ ರೀತಿ ಸಮ್ಮಿಶ್ರ ಸರ್ಕಾರದ ಪರಿಸ್ಥಿತಿ ಇದೆ. ಮಾಜಿ ಪ್ರಧಾನಮಂತ್ರಿ ಎಚ್‌.ಡಿ. ದೇವೇಗೌಡರು ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಜೆಡಿಎಸ್‌ ಏಕಾಂಗಿಯಾಗಿ ಸ್ಪರ್ಧೆ ಮಾಡುತ್ತದೆ ಎನ್ನುತ್ತಾರೆ, ಮತ್ತೊಂದು ಕಡೆ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಧರ್ಮದ ಪಾಲನೆ ಆಗಿಲ್ಲವೆಂದು ಹೇಳುತ್ತಾರೆ. ಹೀಗೆ ಮೈತ್ರಿ ಸರ್ಕಾರ ಗೊಂದಲ ಸ್ಥಿತಿಯಲ್ಲಿದೆ ಎಂದರು. ನಾನು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿಯಲ್ಲ. ಉತ್ತರ ಕರ್ನಾಟಕ ಭಾಗದ ಯಾರಿಗಾದರೂ ಅಧ್ಯಕ್ಷ ಸ್ಥಾನ ಸಿಗಲಿದೆ ಎಂದು ಹೇಳಿದರು.

ವಿ. ಸೋಮಣ್ಣರವರ ಈ ಹೇಳಿಕೆ ಸದ್ಯ ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿದೆ.