ರಾಷ್ಟ್ರೀಯ ಗ್ರಾಮೀಣ ಕುಡಿಯುವ ನೀರಿನ ಯೋಜನೆಯಡಿ ಕೈಗೆತ್ತಿಕೊಳ್ಳುವಂತಿಲ್ಲ | ಸದನದಲ್ಲಿ ಸಚಿವ ಎಚ್‌.ಕೆ. ಪಾಟೀಲ್‌ ಹೇಳಿಕೆ

ಬೆಂಗಳೂರು: ರಾಜ್ಯದಲ್ಲಿ ಬಹುಗ್ರಾಮ ಕುಡಿಯುವ ನೀರಿನ ಹೊಸ ಯೋಜನೆಗಳನ್ನು ರಾಷ್ಟ್ರೀಯ ಗ್ರಾಮೀಣ ಕುಡಿಯುವ ನೀರಿನ ಯೋಜನೆಯಡಿಯಲ್ಲಿ ಕೈಗೆತ್ತಿಕೊಳ್ಳದಿರಲು ಕೇಂದ್ರ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನಿಯಂತ್ರಣ ಹೇರಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಎಚ್‌.ಕೆ. ಪಾಟೀಲ್‌ ತಿಳಿಸಿದ್ದಾರೆ.

ಬುಧವಾರ ಪ್ರಶ್ನೋತ್ತರ ವೇಳೆಯಲ್ಲಿ ಜೆಡಿಎಸ್‌ ಶಾಸಕ ಕೆ.ಎಂ. ತಿಮ್ಮರಾಯಪ್ಪ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಪಾವಗಡದ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಲು ಸೂಕ್ತವಾದ ಯೋಜನೆ ಮತ್ತು ತಾಂತ್ರಿಕ ಅನುಮೋದನೆಗಳನ್ನು ನೀಡಲಾಗಿದೆ. ರಾಷ್ಟ್ರೀಯ ಗ್ರಾಮೀಣ ಕುಡಿವ ನೀರಿನ ಯೋಜನೆ ಅಡಿಯಲ್ಲಿ ಕೈಗೆತ್ತಿಕೊಳ್ಳಲು ಅಡೆತಡೆಗಳು ಎದುರಾಗಿವೆ. ಇವುಗಳನ್ನು ನಿವಾರಿಸಲು ರಾಜ್ಯ ಸರ್ಕಾರವು ಸೂಕ್ತ ಪ್ರಯತ್ನಗಳನ್ನು ಮಾಡಲಿದೆ ಎಂದರು.

ಅಗತ್ಯ ಇರುವ ಹೊಸ ಯೋಜನೆಗಳನ್ನು ಕೈಗೆತ್ತಿಕೊಳ್ಳಲು ಅವಕಾಶ ಕಲ್ಪಿಸಬೇಕು ಎಂದು ಪತ್ರದ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗುವುದು. ಪಾವಗಡ ತಾಲೂಕಿಗೆ ಶಾಶ್ವತ ಕುಡಿಯುವ ನೀರನ್ನು ಒದಗಿಸುವುದಕ್ಕೆ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯನ್ನು ಕೈಗೆತ್ತಿಕೊಳ್ಳಲು ಕ್ರಮ ವಹಿಸಲಾಗುತ್ತಿದೆ. ಬಹುಗ್ರಾಮ ಕುಡಿಯುವ ನೀರಿನ ಯೋಜನೆಯನ್ನು ಡಿಬಿಓಟಿ ಆಧಾರದಲ್ಲಿ ಪಾವಗಡ ಪಟ್ಟಣ ಮತ್ತು ಗ್ರಾಮಗಳು, ಚಿತ್ರದುರ್ಗ ಜಿಲ್ಲೆಯ ಮೊಳ ಕಾಲ್ಮೂರು ಪಟ್ಟಣ ಮತ್ತು ಗ್ರಾಮಗಳು, ಚಳ್ಳಕೆರೆ ತಾಲೂಕಿನ ಗ್ರಾಮಗಳು ಮತ್ತು ಬಳ್ಳಾರಿ ಜಿಲ್ಲೆಯ ಕೂಡ್ಲಗಿ ತಾಲೂಕಿನ ಉಜ್ಜನಿ ಹಾಗೂ 216 ಗ್ರಾಮಗಳು, ಹೊಸಪೇಟೆ ತಾಲೂಕಿನ ಚಿಲಕನಹಟ್ಟಿಮತ್ತು 14 ಗ್ರಾಮಗಳಲ್ಲಿ ಅನುಷ್ಠಾನ ಗೊಳಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. 2014ರ ಜೂ.16ರಂದು ನಡೆದ ರಾಜ್ಯಮಟ್ಟದ ಯೋಜನಾ ಮಂಜೂರಾತಿ ಸಮಿತಿಯಲ್ಲಿ .1703.69 ಕೋಟಿಗಳಿಗೆ 70 ಎಲ್‌ಪಿಸಿಡಿ ಸೇವಾ ವಿನ್ಯಾಸದಲ್ಲಿ ಅನುಮೋದಿಸಲಾಗಿದೆ ಎಂದರು. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಮತ್ತು ಮೊಳಕಾರು, ತುಮಕೂರು ಜಿಲ್ಲೆಯ ಪಾವಗಡ ತಾಲೂಕಿಗೆ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸುವ ಯೋಜನೆಗೆ ತಗಲುವ ವೆಚ್ಚದಲ್ಲಿ ಶೇ.50ರಷ್ಟುಅನುದಾನವನ್ನು ಎಸ್‌ಸಿಪಿ/ಟಿಎಸ್‌ಪಿ ಅಡಿ ಯಲ್ಲಿ ಭರಿಸಿ ಉಳಿದ ಶೇ.50ರಷ್ಟುಹಣವನ್ನು ಗ್ರಾಮೀಣಾಭಿವೃದ್ಧಿ ಇಲಾಖೆ ಭರಿಸಲು ತೀರ್ಮಾನಿಸಿದೆ ಎಂದು ತಿಳಿಸಿದರು.