ನವದೆಹಲಿ: ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಅಕ್ರಮ ಹಣ ವರ್ಗಾವಣೆ ನಡೆಸಿದ್ದಾರೆ ಎಂಬ ಆರೋಪ ಸಂಬಂಧ ಮಧ್ಯಪ್ರದೇಶ ಮುಖ್ಯಮಂತ್ರಿ ಕಮಲ್‌ನಾಥ್‌ ಅವರನ್ನು ಸಿಬಿಐ ವಿಚಾರಣೆಗೆ ಒಳಪಡಿಸುವ ಸಾಧ್ಯತೆ ಇದೆ.

ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಮೂಲಕ ಆದಾಯ ತೆರಿಗೆ ಇಲಾಖೆಯಿಂದ ಈ ಕುರಿತು ಸಿಬಿಐಗೆ ದೂರು ಬಂದಿದೆ. ಅದರ ಆಧಾರದಲ್ಲಿ ಶೀಘ್ರದಲ್ಲೇ ಸಿಬಿಐ ತನಿಖೆ ಆರಂಭಿಸುವ ಸಾಧ್ಯತೆ ಇದೆ ಎಂದು ಮೂಲಗಳನ್ನು ಉಲ್ಲೇಖಿಸಿ ಟೀವಿ ವಾಹಿನಿಯೊಂದು ವರದಿ ಮಾಡಿದೆ.

ಮಧ್ಯಪ್ರದೇಶದ ವಿವಿಧ ಇಲಾಖೆಗಳಿಂದ ಅಕ್ರಮವಾಗಿ ಹಣ ಸಂಗ್ರಹಿಸಿ, ಅದನ್ನು ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದ್ದ ಅಭ್ಯರ್ಥಿಗಳು ಹಾಗೂ ದೆಹಲಿಯ ಪಕ್ಷದ ಕೇಂದ್ರ ಕಚೇರಿಗೆ ರವಾನಿಸಿದ್ದಾರೆ. ಹವಾಲಾ ಹಾಗೂ ಶೆಲ್‌ ಕಂಪನಿಗಳ ಮೂಲಕ ಈ ಹಣ ವರ್ಗಾವಣೆ ನಡೆದಿದೆ ಎಂಬ ಗಂಭೀರ ಆರೋಪ ಕಮಲ್‌ನಾಥ್‌ ವಿರುದ್ಧ ಕೇಳಿಬಂದಿದೆ. ಈ ಸಂಬಂಧ ಏಪ್ರಿಲ್‌ನಲ್ಲಿ ಮಧ್ಯಪ್ರದೇಶದಲ್ಲಿ ಕಮಲ್‌ನಾಥ್‌ ಆಪ್ತರಿಗೆ ಸೇರಿದ 50 ಸ್ಥಳಗಳ ಮೇಲೆ ಸಿಬಿಐ ದಾಳಿ ನಡೆಸಿತ್ತು.