ನವದೆಹಲಿ(ಜೂ.03): ಪಶ್ಚಿಮ ಬಂಗಾಳದ ಹೆಸರನ್ನು ಬಾಂಗ್ಲಾ ಎಂದು ಬದಲಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಈ ಮೂಲಕ ರಾಜ್ಯದ ಹೆಸರು ಬದಲಾಯಿಸಲು ಕೋರಿ ಟಿಎಂಸಿ ಸರ್ಕಾರ ಮಾಡಿದ್ದ ಮನವಿಯನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದೆ.

ಪ.ಬಂಗಾಳಕ್ಕೆ ಬಾಂಗ್ಲಾ ಎಂದು ಮರುನಾಮಕರಣ ಮಾಡಬೇಕು ಎಂದು ಆಗ್ರಹಿಸಿ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಸರ್ಕಾರ, ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. ಆದರೆ ರಾಜ್ಯದ ಹೆಸರು ಬದಲಾಯಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸ್ಪಷ್ಟಪಡಿಸಿದೆ.

ಈ ಕುರಿತು ರಾಜ್ಯಸಭೆಗೆ ಮಾಹಿತಿ ನೀಡಿದ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ್ ರೈ, ಪ.ಬಂಗಾಳದ ಮರುನಾಮಕರಣ ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. 

ಕಳೆದ ವರ್ಷ ಪಶ್ಚಿಮ ಬಂಗಾಳ ವಿಧಾನಸಭೆ ರಾಜ್ಯದ ಹೆಸರನ್ನು 'ಬಾಂಗ್ಲಾ' ಎಂದು ಬದಲಾಯಿಸುವ ನಿರ್ಣಯವನ್ನು ಅಂಗೀಕರಿಸಿ, ಕೇಂದ್ರ ಗೃಹ ಸಚಿವಾಲಯಕ್ಕೆ ಅನುಮೋದನೆಗಾಗಿ ಕಳುಹಿಸಿದ್ದನ್ನು ಇಲ್ಲಿ ಸ್ಮರಿಸಬಹುದು.