ಬೆಂಗಳೂರು [ಜು.13] :  ಸಮ್ಮಿಶ್ರ ಸರ್ಕಾರ ಉಳಿಸಿಕೊಳ್ಳಲು ಕೊನೆ ಹಂತದ ಕಸರತ್ತು ನಡೆಸುತ್ತಿರುವ ಕಾಂಗ್ರೆಸ್‌-ಜೆಡಿಎಸ್‌ ನಾಯಕರು ಶುಕ್ರವಾರ ಸಂಜೆ ಕುಮಾರಕೃಪಾ ಅತಿಥಿಗೃಹದಲ್ಲಿ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಕೆ.ಸಿ.ವೇಣುಗೋಪಾಲ್‌ ಹಾಗೂ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಮಹತ್ವದ ಸಭೆ ನಡೆಸಲಾಗಿದೆ.

ಎಚ್‌.ಡಿ.ಕುಮಾರಸ್ವಾಮಿ ಅವರ ಬುಧವಾರ ವಿಶ್ವಾಸ ಮತಯಾಚನೆಗೆ ಮುಂದಾಗಿರುವ ಹಿನ್ನೆಲೆಯಲ್ಲಿ ಅತೃಪ್ತ ಶಾಸಕರನ್ನು ಮನವೊಲಿಸುವ ಮೂಲಕ ಸಮ್ಮಿಶ್ರ ಸರ್ಕಾರ ಉಳಿಸಿಕೊಳ್ಳುವ ಬಗ್ಗೆ ಚರ್ಚೆ ನಡೆಸಲಾಯಿತು. ಇದೇ ವೇಳೆ ಸಮ್ಮಿಶ್ರ ಸರ್ಕಾರಕ್ಕೆ ಬೆಂಬಲ ಸೂಚಿಸಲು ಒಪ್ಪದ ಅತೃಪ್ತ ಶಾಸಕರನ್ನು ವಿಪ್‌ ಉಲ್ಲಂಘನೆ ಆಧಾರದ ಮೇಲೆ ಅನರ್ಹಗೊಳಿಸಲು ಗಂಭೀರ ಚಿಂತನೆ ನಡೆಸಲಾಗಿದೆ. ಮಂಗಳವಾರದವರೆಗೆ ಯತಾಸ್ಥಿತಿ ಕಾಪಾಡುವಂತೆ ಸುಪ್ರೀಂ ಕೋರ್ಟ್‌ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಬುಧವಾರ ಕೆಲ ಶಾಸಕರನ್ನು ಅನರ್ಹಗೊಳಿಸುವ ಬಗ್ಗೆಯೂ ಚರ್ಚೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಕೆ.ಸಿ.ವೇಣುಗೋಪಾಲ್‌, ಎಚ್‌.ಡಿ.ಕುಮಾರಸ್ವಾಮಿ, ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್‌ಗುಂಡೂರಾವ್‌ ಸೇರಿದಂತೆ ಕಾಂಗ್ರೆಸ್‌ ನಾಯಕರು ಚರ್ಚೆ ನಡೆಸಿದ್ದಾರೆ. ಅತೃಪ್ತರನ್ನು ಮನವೊಲಿಸುವ ಜತೆಗೆ ಮತ್ತ್ಯಾವ ಶಾಸಕರೂ ಆಪರೇಷನ್‌ ಕಮಲಕ್ಕೆ ಸಿಲುಕದಂತೆ ನೋಡಿಕೊಳ್ಳಬೇಕು. ಈ ನಿಟ್ಟಿನಲ್ಲಿ ತಾಜ್‌ ವಿವಾಂತ ಹೋಟೆಲ್‌ನಲ್ಲಿ ಉಳಿದುಕೊಂಡಿರುವ ಕಾಂಗ್ರೆಸ್‌ ಶಾಸಕರು ಹಾಗೂ ದೇವನಹಳ್ಳಿ ರೆಸಾರ್ಟ್‌ನಲ್ಲಿ ಉಳಿದುಕೊಂಡಿರುವ ಜೆಡಿಎಸ್‌ ಶಾಸಕರ ಮೇಲೆ ನಿಗಾ ಇಡಬೇಕು ಎಂದು ನಾಯಕರಿಗೆ ಕೆ.ಸಿ.ವೇಣುಗೋಪಾಲ್‌ ಸೂಚಿಸಿದರು.