ಬೆಂಗಳೂರು :  ಪೊಲೀಸರ ವೇತನ ಪರಿಷ್ಕರಣೆ ಕುರಿತು ನೇಮಕಗೊಂಡಿದ್ದ ಎಡಿಜಿಪಿ ರಾಘವೇಂದ್ರ ಔರಾದ್ಕರ್‌ ಸಮಿತಿ ಜತೆ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಸೋಮವಾರ ಸಭೆ ನಡೆಸಲಿದ್ದು, ಪೊಲೀಸರಿಗೆ ಸಿಹಿ ಸುದ್ದಿ ನೀಡಲಿದ್ದಾರೆಯೇ ಎಂಬುದನ್ನು ಕಾದು ನೋಡಬೇಕಿದೆ.

ಸೋಮವಾರ ಸಂಜೆ ಐದು ಗಂಟೆಗೆ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ವಿಧಾನಸೌಧದಲ್ಲಿ ನಡೆಯುವ ಸಮಿತಿಯಲ್ಲಿ ರಾಘವೇಂದ್ರ ಔರಾದ್ಕರ್‌ ಅವರ ಸಮಿತಿ ನೀಡಿದ್ದ ವರದಿಯ ಸಾಧಕ-ಬಾಧಕಗಳ ಬಗ್ಗೆ ಚರ್ಚಿಸಲಿದ್ದಾರೆ. ಸಭೆಯಲ್ಲಿ ಪೊಲೀಸರಿಗೆ ಸಂಬಂಧಿಸಿದ ಮೂಲಭೂತ ಸೌಲಭ್ಯ ಸೇರಿದಂತೆ ಅನೇಕ ವಿಚಾರಗಳು ಸಭೆಯಲ್ಲಿ ಚರ್ಚೆಗೆ ಬರಲಿದೆ ಎನ್ನಲಾಗಿದೆ.

ಕಳೆದ ನಾಲ್ಕು ವರ್ಷಗಳ ಹಿಂದೆ ಪೊಲೀಸರು ವೇತನ ಹೆಚ್ಚಳ ಸೇರಿದಂತೆ ವಿವಿಧ ಮೂಲಭೂತ ಸೌಲಭ್ಯಗಳಿಗೆ ಆಗ್ರಹಿಸಿ ಪ್ರತಿಭಟನೆಗೆ ಮುಂದಾಗಿದ್ದರು. ಈ ವೇಳೆ ಅಂದಿನ ಸರ್ಕಾರ ಪೊಲೀಸರ ವೇತನ ಹೆಚ್ಚಳಕ್ಕೆ ಎಡಿಜಿಪಿ ರಾಘವೇಂದ್ರ ಔರಾದ್ಕರ್‌ ಅವರ ನೇತೃತ್ವದಲ್ಲಿ ಸಮಿತಿಯನ್ನು ರಚಿಸಿತ್ತು. ಈ ಬಗ್ಗೆ ಅಧ್ಯಯನ ನಡೆಸಿದ್ದ ಸಮಿತಿ ವೇತನ ಹೆಚ್ಚಳಕ್ಕೆ ಸರ್ಕಾರಕ್ಕೆ ಶಿಫಾರಸ್ಸು ಮಾಡಿತ್ತು. 

ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದ ವೇಳೆ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಔರಾದ್ಕರ್‌ ಅವರ ಸಮಿತಿ ವರದಿ ಜಾರಿ ಎಂದಿದ್ದರು. ಬಜೆಟ್‌ನಲ್ಲಿ ಸಮಿತಿ ವರದಿ ಬಗ್ಗೆ ಸರ್ಕಾರ ಪ್ರಸ್ತಾಪಿಸಿರಲಿಲ್ಲ. ಈ ಹಿನ್ನೆಲೆಯಲ್ಲಿ ಸೋಮವಾರ ನಡೆಯಲಿರುವ ಸಭೆ ಮಹತ್ವ ಪಡೆದು ಕೊಂಡಿದ್ದು, ಪೊಲೀಸರಿಗೆ ಸಿಹಿ ಸುದ್ದಿ ಸಿಗಲಿದಿಯೇ ಎಂಬುದನ್ನು ನೋಡಬೇಕಿದೆ.