Asianet Suvarna News Asianet Suvarna News

ಕೊಡಗಿನ ಬಗ್ಗೆ ಎಚ್ಚರ ವಹಿಸಲು ಸಿಎಂ ಸೂಚನೆ

ನೆರೆ: ಕೊಡಗಿನ ಬಗ್ಗೆ ಎಚ್ಚರ ವಹಿಸಲು ಸಿಎಂ ಸೂಚನೆ | ಕೊಡಗು ಡೀಸಿಯಿಂದ ಮುನ್ನೆಚ್ಚರಿಕೆ ಕ್ರಮಗಳ ಮಾಹಿತಿ ಪಡೆದ ಎಚ್‌ಡಿಕೆ | ಕಳೆದ ವರ್ಷದ ಅನಾಹುತದ ಹಿನ್ನೆಲೆಯಲ್ಲಿ ಭೂಕುಸಿತದ ಬಗ್ಗೆ ಎಚ್ಚರಿಕೆ
 

CM Kumaraswamy instructs to take precautionary steps to avoid flood calamity
Author
Bengaluru, First Published May 16, 2019, 10:40 AM IST

ಬೆಂಗಳೂರು (ಮೇ. 16): ಕಳೆದ ವರ್ಷ ವರುಣನ ಆರ್ಭಟದಿಂದಾಗಿ ಕೊಡಗು ಜಿಲ್ಲೆಯಲ್ಲಿ ಉಂಟಾದ ಅತಿವೃಷ್ಟಿಅನಾಹುತದಿಂದ ಎಚ್ಚೆತ್ತ ರಾಜ್ಯ ಸರ್ಕಾರವು ಈ ಬಾರಿ ಮುಂಗಾರು ಹಂಗಾಮಿನಲ್ಲಿ ನೆರೆ ಅನಾಹುತ ತಡೆಗಟ್ಟಲು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದೆ.

ಬುಧವಾರ ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಬರ ಪರಿಸ್ಥಿತಿ ಕುರಿತು ಅಧಿಕಾರಿಗಳೊಂದಿಗೆ ವೀಡಿಯೋ ಸಂವಾದ ನಡೆಸಿದ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು, ಕೊಡಗು ಜಿಲ್ಲಾಧಿಕಾರಿಗೆ ಮುನ್ನಚ್ಚರಿಕೆ ಕ್ರಮ ಜರುಗಿಸುವಂತೆ ನಿರ್ದೇಶನ ನೀಡಿದರು.

ಕೊಡಗು ಜಿಲ್ಲೆಯಲ್ಲಿ ಭಾರತೀಯ ಭೂ ವಿಜ್ಞಾನ ಸಮೀಕ್ಷಾ ಇಲಾಖೆ (ಜಿಎಸ್‌ಐ) ನಡೆಸಿದ ಸಮೀಕ್ಷೆಯಲ್ಲಿ ಭೂ ಕುಸಿತವಾಗುವ ಸ್ಥಳಗಳನ್ನು ಗುರುತಿಸಲಾಗಿದೆ. ಈ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯವನ್ನು ಕೈಗೊಳ್ಳಲಾಗಿದೆ. ಸತತ ಮೇಲ್ವಿಚಾರಣೆಗೆ ನೋಡಲ್‌ ಅಧಿಕಾರಿಗಳ ನೇಮಕ ಮಾಡಲಾಗಿದೆ ಎಂದು ಕೊಡಗು ಜಿಲ್ಲಾಧಿಕಾರಿ ಅನೀಸ್‌ ಕಣ್ಮಣಿ ಜಾಯ್‌ ಅವರು ಮುಖ್ಯಮಂತ್ರಿಗಳಿಗೆ ಮಾಹಿತಿ ನೀಡಿದರು.

ಜಿಎಸ್‌ಐ ಗುರುತಿಸಿರುವ ಅಪಾಯಕಾರಿ ಸ್ಥಳಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ಆಶ್ರಯ ತಾಣಗಳನ್ನು ಪ್ರಾರಂಭಿಸಲು ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ. ಜಾನುವಾರುಗಳ ಸುರಕ್ಷತೆಯ ಬಗ್ಗೆಯೂ ಕ್ರಮ ವಹಿಸಲಾಗಿದೆ. ಪ್ರವಾಹ ಪರಿಸ್ಥಿತಿ ಎದುರಾದರೆ ತಕ್ಷಣವೇ ಪರಿಹಾರ ಕಾರ್ಯಗಳನ್ನು ಕೈಗೊಳ್ಳಲು ಎಂಟು ತಂಡಗಳನ್ನು ರಚಿಸಲಾಗಿದೆ. ಜೂನ್‌ ಕೊನೆ ವಾರದಲ್ಲಿ ರಾಷ್ಟ್ರೀಯ ವಿಪತ್ತು ಪರಿಹಾರ ತಂಡವನ್ನು ಕೊಡಗಿಗೆ ನಿಯೋಜಿಸಲು ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ ಎಂದು ಸಭೆಗೆ ವಿವರಿಸಿದರು.

ಹಾರಂಗಿ ಜಲಾಶಯದಲ್ಲಿ ಹೂಳೆತ್ತುವ ಕಾರ್ಯಕ್ಕೆ ಜಲಸಂಪನ್ಮೂಲ ಇಲಾಖೆ ಕ್ರಮ ಕೈಗೊಳ್ಳುತ್ತಿದೆ. ಅಗ್ನಿಶಾಮಕ ಇಲಾಖೆ ಮತ್ತು ಇತರ ಇಲಾಖೆಗಳಿಗೆ ರಕ್ಷಣಾ ಕಾರ್ಯಕ್ಕೆ ಅಗತ್ಯ ಇರುವ ಪರಿಕರಗಳ ಖರೀದಿಗೆ ಕ್ರಮ ವಹಿಸಲಾಗಿದೆ. ನೆರೆ ಸಂತ್ರಸ್ತರಿಗೆ ಗೃಹನಿರ್ಮಾಣ ಕಾರ್ಯ ಬಹುತೇಕ ಪೂರ್ಣಗೊಂಡಿದೆ ಎಂದು ತಿಳಿಸಿದರು.

ಇದೇ ವೇಳೆ ನಿರ್ಮಾಣವಾಗಿರುವ ಎರಡು ಬಡಾವಣೆಗಳಿಗೆ ರಸ್ತೆ ಸಂಪರ್ಕ, ಒಳಚರಂಡಿ ಸೇರಿದಂತೆ ಇತರೆ ಮೂಲಸೌಕರ್ಯ ಕಲ್ಪಿಸುವ ಪ್ರಸ್ತಾವನೆಗೆ ಮುಖ್ಯಮಂತ್ರಿಗಳು ಅನುಮೋದನೆ ನೀಡಿ ತ್ವರಿತವಾಗಿ ಕೆಲಸ ಪೂರ್ಣಗೊಳಿಸುವಂತೆ ಹೇಳಿದರು.
 

Follow Us:
Download App:
  • android
  • ios