ಬೆಂಗಳೂರು (ಅ. 24):  ರೈತರ ಕೃಷಿ ಸಾಲ ಮನ್ನಾ ಮಾಡಿದ ಬೆನ್ನಲ್ಲೇ ಜೆಡಿಎಸ್‌-ಕಾಂಗ್ರೆಸ್‌ ಸಮ್ಮಿಶ್ರ ಸರ್ಕಾರವು ಇದೀಗ ಅದೇ ಮಾದರಿಯಲ್ಲಿ ಬಡ ವಿದ್ಯಾರ್ಥಿಗಳು ಉನ್ನತ ವ್ಯಾಸಂಗಕ್ಕಾಗಿ ಪಡೆದಿರುವ ಸಾಲವನ್ನು ಮನ್ನಾ ಮಾಡುವ ಬಗ್ಗೆ ಗಂಭೀರವಾಗಿ ಚಿಂತನೆ ನಡೆಸಿದೆ. ಈ ಬಗ್ಗೆ ಖುದ್ದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಸುಳಿವು ನೀಡಿದ್ದಾರೆ.

ಮಂಗಳವಾರ ಬೆಂಗಳೂರು ಪ್ರೆಸ್‌ಕ್ಲಬ್‌ ಮತ್ತು ವರದಿಗಾರರ ಕೂಟ ಜಂಟಿಯಾಗಿ ಆಯೋಜಿಸಿದ್ದ ಸಂವಾದದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಉನ್ನತ ವ್ಯಾಸಂಗಕ್ಕಾಗಿ ಸಾಲ ಮಾಡಿ. ಬಳಿಕ ಉದ್ಯೋಗ ಸಿಗದೆ ಸಾಲ ತೀರಿಸಲು ಸಾಧ್ಯವಾಗದ ಬಡ ಕುಟುಂಬಗಳ ಮಾಹಿತಿಯನ್ನು ಸಿದ್ಧಪಡಿಸಿ ನೀಡುವಂತೆ ಅಧಿಕಾರಿಗಳಿಗೆ ತಿಳಿಸಲಾಗಿದೆ.

ರಾಜ್ಯದೆಲ್ಲೆಡೆಯಿಂದ ಮಾಹಿತಿ ಸಂಗ್ರಹಿಸಿದ ಬಳಿಕ ಶೈಕ್ಷಣಿಕ ಸಾಲ ಮನ್ನಾದ ಸಾಧಕ-ಬಾಧಕಗಳನ್ನು ಪರಿಶೀಲನೆ ನಡೆಸಲಾಗುವುದು. ಬಳಿಕ ಸಮರ್ಪಕವಾಗಿ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು.

ಜನತಾ ದರ್ಶನದಲ್ಲಿ ಶೈಕ್ಷಣಿಕ ಸಾಲದ ಬಗ್ಗೆ ಹಲವು ಮಂದಿ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. ವೃತ್ತಿಪರ ಶಿಕ್ಷಣ ಮುಗಿದ ಬಳಿಕ ಉದ್ಯೋಗ ಸಿಗದೆ ಸಾಲವನ್ನು ತೀರಿಸಲು ಸಾಧ್ಯವಾಗದೆ ಸಂಕಷ್ಟ ಅನುಭವಿಸುತ್ತಿರುವ ಕುಟುಂಬಗಳು ತಮ್ಮ ನೋವನ್ನು ಹೇಳಿಕೊಂಡಿವೆ. ಹೀಗಾಗಿ ಶೈಕ್ಷಣಿಕ ಸಾಲದ ಬಗ್ಗೆ ಮಾಹಿತಿ ಪಡೆದು ನೀಡುವಂತೆ ಅಧಿಕಾರಿಗಳಿಗೆ ತಿಳಿಸಲಾಗಿದೆ. ಯಾವುದೇ ಒಂದು ಸಮುದಾಯಕ್ಕೆ ಸಿಮೀತವಾಗದೆ ಎಲ್ಲಾ ವರ್ಗದ ವಿದ್ಯಾರ್ಥಿಗಳ ಸಾಲದ ಬಗ್ಗೆ ಮಾಹಿತಿ ಸಂಗ್ರಹಿಸಲಾಗುವುದು ಎಂದರು.