ಬೆಂಗಳೂರು (ಮೇ. 30):  ನರೇಂದ್ರ ಮೋದಿ ಅವರ ಪ್ರಮಾಣ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳುವ ಸಂಬಂಧ ಗುರುವಾರ ದೆಹಲಿಗೆ ತೆರಳುತ್ತಿರುವ ಮುಖ್ಯಮಂತ್ರಿ ಕುಮಾರಸ್ವಾಮಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಲಿದ್ದಾರೆ.

ಈ ಬಗ್ಗೆ ಖುದ್ದು ಕುಮಾರಸ್ವಾಮಿ ಅವರೇ ಮಾಹಿತಿ ನೀಡಿದ್ದಾರೆ. ಪ್ರಾದೇಶಿಕ ಮಾಧ್ಯಮಗಳೊಂದಿಗೆ ಮುನಿಸಿಕೊಂಡು ಪ್ರತಿಕ್ರಿಯಿಸುವುದನ್ನೇ ನಿಲ್ಲಿಸಿರುವ ಮುಖ್ಯಮಂತ್ರಿಗಳು ಬುಧವಾರ ಕುಮಾರಕೃಪಾ ಅತಿಥಿಗೃಹದ ಬಳಿ ರಾಷ್ಟ್ರೀಯ ಸುದ್ದಿವಾಹಿನಿಗಳ ಪ್ರತಿನಿಧಿಗಳ ಜೊತೆ ಮಾತನಾಡಿ, ನಾನು ಗುರುವಾರ ದೆಹಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡುತ್ತೇನೆ. ಈ ವೇಳೆ ಅವರು ಎಐಸಿಸಿ ಅಧ್ಯಕ್ಷರಾಗಿ ಮುಂದುವರೆಯುವಂತೆ ಒತ್ತಾಯ ಮಾಡುತ್ತೇನೆ ಎಂದು ತಿಳಿಸಿದರು.

ಇದೇ ವೇಳೆ ಕುಮಾರಸ್ವಾಮಿ ಅವರು ರಾಜ್ಯದಲ್ಲಿನ ಪ್ರಸಕ್ತ ವಿದ್ಯಮಾನಗಳ ಬಗ್ಗೆ ಹಾಗೂ ಲೋಕಸಭಾ ಚುನಾವಣೆಯಲ್ಲಿ ಮಿತ್ರ ಪಕ್ಷ ಕಾಂಗ್ರೆಸ್ಸಿನ ನಡೆಯ ಬಗ್ಗೆಯೂ ಮಾಹಿತಿ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.