ರಾಜ್ಯದಲ್ಲಿ ಬರ ಪರಿಸ್ಥಿತಿ ಎದುರಾಗಿರುವ ಹಿನ್ನೆಲೆಯಲ್ಲಿ ರೈತರಿಂದ ಯಾವುದೇ ಬ್ಯಾಂಕ್‌ಗಳು, ಸಹಕಾರ ಸಂಘಗಳು ಒತ್ತಾಯಪೂರ್ವಕವಾಗಿ ಸಾಲ ವಸೂಲಿ ಮಾಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಾಕೀತು ಮಾಡಿದ್ದಾರೆ. 

ಬೆಂಗಳೂರು(ಏ.02): ರಾಜ್ಯದಲ್ಲಿ ಬರ ಪರಿಸ್ಥಿತಿ ಎದುರಾಗಿರುವ ಹಿನ್ನೆಲೆಯಲ್ಲಿ ರೈತರಿಂದ ಯಾವುದೇ ಬ್ಯಾಂಕ್‌ಗಳು, ಸಹಕಾರ ಸಂಘಗಳು ಒತ್ತಾಯಪೂರ್ವಕವಾಗಿ ಸಾಲ ವಸೂಲಿ ಮಾಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಾಕೀತು ಮಾಡಿದ್ದಾರೆ. 

ಭಾನುವಾರ ಕೋರಮಂಗಲದಲ್ಲಿನ ಕೆಎಸ್‌ಆರ್‌ಪಿ ಮೈದಾನದಲ್ಲಿ ಭಾನುವಾರ ಆಯೋಜಿಸಿದ್ದ ಪೊಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮ ಬಳಿಕ ಸುದ್ದಿಗಾರರಿಗೆ ಹುಬ್ಬಳ್ಳಿಯಲ್ಲಿ ರೈತರಿಗೆ ನೊಟೀಸ್ ನೀಡಿ ೧೫ ದಿನದಲ್ಲಿ ಸಾಲ ತೀರಿಸಬೇಕು ಎಂದು ಸೂಚನೆ ನೀಡಿರುವ ಕುರಿತು ಪ್ರತಿಕ್ರಿಯೆ ನೀಡಿದರು. 

ರಾಜ್ಯದಲ್ಲಿ ಬರ ಇರುವ ಕಾರಣ ಸಾಲ ತೀರಿಸಲು ರೈತರಿಗೆ ಸಮಸ್ಯೆಯಾಗುತ್ತಿದೆ. ಹೀಗಾಗಿ ಬಲವಂತದ ಸಾಲ ವಸೂಲಿ ಮಾಡುವುದು ಬೇಡ. ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿಯ ಮೂಲಕ ಬ್ಯಾಂಕ್‌ಗಳಿಗೆ ಸೂಚನೆ ನೀಡಲಾಗುವುದು. ರೈತರು ಸಹ ಅಂತಹ ಸೂಚನೆ ನೊಟೀಸ್ ಬಂದಲ್ಲಿ ಸಂಬಂಧಪಟ್ಟ ಸರ್ಕಾರಿ ಅಧಿಕಾರಿಗಳ ಗಮನಕ್ಕೆ ತರುವಂತೆ ತಿಳಿಸಿದರು.

ಮಳೆ ಬಂದರೆ ತಮಿಳನಾಡಿಗೆ ನೀರು: 

ಕಾವೇರಿ ನೀರು ಸಮಸ್ಯೆ ಕುರಿತು ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ತಮಿಳುನಾಡಿನ ಅಧಿಕಾರಿಗಳ ನಿಯೋಗ ರಾಜ್ಯಕ್ಕೆ ಭೇಟಿ ನೀಡಿದ್ದು, ಈ ವೇಳೆ ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ಮತ್ತು ಅಧಿಕಾರಿಗಳ ತಂಡ ಅವರ ಜತೆ ಸಭೆ ನಡೆಸಿದೆ. ರಾಜ್ಯದ ಜಲಾಶಯಗಳಲ್ಲಿ ನೀರಿನ ಕೊರತೆ ಇದೆ. ನಮಗೆ ನೀರಿಲ್ಲದಿರುವುದರಿಂದ ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ ಎಂಬುದನ್ನು ತಮಿಳುನಾಡು ಅಧಿಕಾರಿಗಳಿಗೆ ಮನವರಿಕೆ ಮಾಡಲಾಗಿದೆ. ಒಂದು ವೇಳೆ ಮಳೆ ಬಂದು ನೀರು ಬಂದರೆ ತಮಿಳುನಾಡಿಗೆ ನೀರು ಬಿಡುತ್ತೇವೆ ಎಂದರು. 

ಲಾರಿ ಮುಷ್ಕರ ಕೇಂದ್ರದ ವಿಷಯ: 

ಲಾರಿ ಮುಷ್ಕರ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಲಾರಿ ಮಾಲೀಕರ ಬೇಡಿಕೆಯು ಕೇಂದ್ರ ಸರ್ಕಾರಕ್ಕೆ ಸಂಬಂಧಪಟ್ಟ ವಿಷಯವಾಗಿದೆ. ರಾಜ್ಯಕ್ಕೆ ಸಂಬಂಧಪಟ್ಟ ವಿಷಯಕ್ಕೆ ಸಂಬಂಧಿಸಿದಂತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಲಾರಿ ಮಾಲೀಕರ ಒಕ್ಕೂಟದ ಜತೆ ಮಾತುಕತೆ ನಡೆಸಿದ್ದಾರೆ. ತಮ್ಮಿಂದ ಸಾಧ್ಯವಾದಷ್ಟು ನೆರವು ನೀಡಲು ಸರ್ಕಾರ ಬದ್ಧವಿದ್ದು, ಜನತೆಗೆ ತೊಂದರೆಯಾಗುವುದನ್ನು ತಪ್ಪಿಸಲು ಸೂಕ್ತ ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದರು.