ಬೆಂಗಳೂರು (ಆ. 05): ಕೃಷ್ಣಾ ನದಿಯಲ್ಲಿ ಪ್ರವಾಹ ಉಂಟಾಗಿ ಜನಜೀವನ ಅಸ್ತವ್ಯಸ್ತಗೊಂಡಿರುವ ಹಿನ್ನೆಲೆಯಲ್ಲಿ ತುರ್ತು ಪರಿಹಾರ ಕಾರ್ಯ ಕೈಗೊಂಡು ಜನತೆಯನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿ, ಶೀಘ್ರವೇ ಪುನರ್ವಸತಿ ಕಾರ್ಯಗಳನ್ನು ಸಮರೋಪಾದಿಯಲ್ಲಿ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ನಿರ್ದೇಶನ ನೀಡಿದ್ದಾರೆ.

ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ  ಪ್ರವಾಹಪೀಡಿತ ರಾಯಚೂರು, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಯಾದಗಿರಿ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಅವರು ವಿಡಿಯೋ ಸಂವಾದ ನಡೆಸಿದರು. ಪರಿಸ್ಥಿತಿ ನಿಭಾಯಿಸಲು ಕೈಗೊಂಡಿರುವ ಕ್ರಮಗಳ ಕುರಿತು ಜಿಲ್ಲಾಧಿಕಾರಿಗಳಿಂದ ಮಾಹಿತಿ ಪಡೆದುಕೊಂಡು ಜನತೆಯ ಸುರಕ್ಷತೆ ದೃಷ್ಟಿಯಿಂದ ಮುಂದೆ ಕೈಗೊಳ್ಳಬೇಕಾದ ಕ್ರಮಗಳನ್ನು ಯುದ್ಧೋಪಾದಿಯಲ್ಲಿ ಕೈಗೊಳ್ಳುವಂತೆ ಸೂಚನೆ ನೀಡಿದರು.

ಮಹಾರಾಷ್ಟ್ರದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಕೃಷ್ಣಾ ನದಿಗೆ ಅಧಿಕ ಪ್ರಮಾಣದಲ್ಲಿ ನೀರು ಹರಿದು ಪ್ರವಾಹ ಉಂಟಾಗಿ ಜನರು ಸಂಕಷ್ಟಕ್ಕೊಳಗಾಗಿದ್ದಾರೆ. ಇದನ್ನು ಗಮನಿಸಿದ ಮುಖ್ಯಮಂತ್ರಿ ಯಡಿಯೂರಪ್ಪ, ಪರಿಹಾರ ಕ್ರಮಗಳನ್ನು ರೂಪಿಸುವಂತೆ ಮುಖ್ಯ ಕಾರ್ಯದರ್ಶಿಗಳ ಮೂಲಕ ಸಂಬಂಧಪಟ್ಟಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಮತ್ತು ಜಿಲ್ಲಾಧಿಕಾರಿಗಳಿಗೆ ಆದೇಶ ನೀಡಿದರು.

ಪ್ರವಾಹದಿಂದಾಗಿ ಹಲವೆಡೆ ರಸ್ತೆ ಸಂಪರ್ಕ ಕಡಿತಗೊಂಡಿದ್ದು, ಗ್ರಾಮಗಳು ನಡುಗಡ್ಡೆಗಳಾಗಿ ಮಾರ್ಪಟ್ಟಿವೆ. ಅಲ್ಲಿ ಸಿಲುಕಿರುವ ಜನ-ಜಾನುವಾರುಗಳನ್ನು ಸುರಕ್ಷಿತ ಸ್ಥಳಗಳಿಗೆ ಕೊಂಡೊಯ್ಯಬೇಕು. ಜಿಲ್ಲಾಧಿಕಾರಿಗಳು ಆಹಾರ, ವಸ್ತ್ರಗಳು ಸೇರಿದಂತೆ ಇತರೆ ಸೌಕರ್ಯಗಳನ್ನು ನಿರಾಶ್ರಿತರಿಗೆ ಒದಗಿಸುವುದರ ಜತೆಗೆ ಜಾನುವಾರುಗಳಿಗೆ ಮೇವಿನ ವ್ಯವಸ್ಥೆ ಮಾಡಬೇಕು.

ಎನ್‌ಡಿಆರ್‌ಎಫ್‌ (ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ), ಎಸ್‌ಡಿಆರ್‌ಎಫ್‌ (ರಾಜ್ಯ ವಿಪತ್ತು ನಿರ್ವಹಣಾ ತಂಡ), ಸೇನೆ, ಇತರೆ ಪಡೆಗಳ ಸಹಾಯ ಪಡೆದುಕೊಂಡು ರಕ್ಷಣಾ ಕಾರ್ಯಗಳನ್ನು ಚುರುಕುಗೊಳಿಸಬೇಕು. ಎನ್‌ಡಿಆರ್‌ಎಫ್‌ನ ಮೂರು ತಂಡಗಳು ಬೆಳಗಾವಿ, ರಾಯಚೂರು ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಅಗತ್ಯವಿದ್ದರೆ ಹೆಚ್ಚಿನ ತಂಡಗಳನ್ನು ನಿಯೋಜಿಸಬೇಕು. ಅಗ್ನಿಶಾಮಕ ದಳ, ಪೊಲೀಸ್‌, ಕಂದಾಯ ಇತರೆ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಅಹೋರಾತ್ರಿ ಪರಿಹಾರ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು ಎಂದು ನಿರ್ದೇಶನ ನೀಡಿದರು.

ಪುನರ್ವಸತಿ ಕೇಂದ್ರದಲ್ಲಿ ಉತ್ತಮ ಆಹಾರ, ಶುದ್ಧ ಕುಡಿಯುವ ನೀರು, ಹಾಲು ಇತರೆ ತುರ್ತು ಸೌಕರ್ಯಗಳನ್ನು ಆದ್ಯತೆಯ ಮೇರೆಗೆ ಒದಗಿಸಬೇಕು. ಮಹಾರಾಷ್ಟ್ರದ ಹಲವು ಅಣೆಕಟ್ಟುಗಳಿಂದ ದಿಢೀರ್‌ ನೀರು ಬಿಡುಗಡೆಯಿಂದಾಗಿ ರಾಜ್ಯದ ಕೆಳಮಟ್ಟದಲ್ಲಿರುವ ಪ್ರದೇಶದಲ್ಲಿ ಪ್ರವಾಹ ಉಂಟಾಗಿ ಅಪಾರ ಹಾನಿಯಾಗಿದೆ.

ನಮ್ಮ ರಾಜ್ಯದ ವ್ಯಾಪ್ತಿಯ ಕೃಷ್ಣಾ ನದಿ ತೀರದ ಗ್ರಾಮಗಳು ಮತ್ತು ಕೃಷಿ ಜಮೀನುಗಳು ಮುಳುಗಡೆಯಾಗಿವೆ. ಅಣೆಕಟ್ಟುಗಳಿಂದ ನೀರು ಬಿಡುಗಡೆ ಮಾಡುವ ಮುನ್ನ ಸೂಕ್ತ ಮುನ್ನೆಚ್ಚರಿಕೆ ಕೈಗೊಳ್ಳುವುದು ಅಗತ್ಯ ಎಂದು ಹೇಳಿದರು.

ಮಹಾರಾಷ್ಟ್ರದ ನೀರಾವರಿ ಇಲಾಖೆ ಅಧಿಕಾರಿಗಳೊಡನೆ ಸಂಪರ್ಕ ಸಾಧಿಸಿ, ಅಣೆಕಟ್ಟುಗಳಿಂದ ನೀರು ಹರಿಸುವ ಮುನ್ನ ಮಾಹಿತಿ ನೀಡುವಂತೆ ಮತ್ತು ನದಿ ತೀರದ ಜನರನ್ನು ಎಚ್ಚರಿಸಲು ಕ್ರಮ ಕೈಗೊಳ್ಳಬೇಕು. ಸಂಕಷ್ಟಕ್ಕೊಳಗಾದ ಜನ ಮತ್ತು ಜಾನುವಾರುಗಳ ರಕ್ಷಣೆ ಸರ್ಕಾರದ ಆದ್ಯತೆಯ ಕ್ರಮವಾಗಿದೆ.

ಜತೆಗೆ ಪುನರ್ವಸತಿ ಕಾರ್ಯಗಳ ಮೇಲೆ ಹೆಚ್ಚಿನ ನಿಗಾವಹಿಸಬೇಕು. ಬೆಳಗಾವಿ ಜಿಲ್ಲೆಯ ಗೋಕಾಕ್‌ ತಾಲೂಕಿನ ಅಂಕಲಗಿ ಗ್ರಾಮದ ಶಿವಾನಂದ ಶಂಕರ ನಾಯಕ್‌ ಎಂಬ ಯುವಕ ಪ್ರವಾಹದಲ್ಲಿ ಕೊಚ್ಚಿಹೋದ ದಾರುಣ ಘಟನೆ ಜರುಗಿದೆ. ಅಲ್ಲದೇ, ಹಲವಾರು ಬ್ಯಾರೇಜ್‌ಗಳು ಮುಳುಗಿವೆ. ತಕ್ಷಣವೇ ಸುರಕ್ಷತೆ ಕ್ರಮ ಕೈಗೊಂಡು ಪರಿಹಾರ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗುವಂತೆ ತಿಳಿಸಲಾಗಿದೆ ಎಂದರು.

ಅನುದಾನದ ಕೊರತೆ ಇಲ್ಲ:

ಪರಿಹಾರ ಕಾರ್ಯಗಳಿಗೆ ಅನುದಾನ ಕೊರತೆ ಇಲ್ಲವಾಗಿದ್ದು, ಅಗತ್ಯವಿದ್ದಲ್ಲಿ ಹೆಚ್ಚುವರಿ ಅನುದಾನ ಒದಗಿಸಲು ಸರ್ಕಾರ ಸಿದ್ಧವಿದೆ. ಬೆಳಗಾವಿ ಜಿಲ್ಲಾಧಿಕಾರಿಗಳ ಪಿ.ಡಿ. ಖಾತೆಯಲ್ಲಿ 11.42 ಕೋಟಿ ರು., ವಿಜಯಪುರ ಜಿಲ್ಲಾಧಿಕಾರಿ ಪಿ.ಡಿ. ಖಾತೆಯಲ್ಲಿ 9.10 ಕೋಟಿ ರು., ಬಾಗಲಕೋಟೆ ಜಿಲ್ಲಾಧಿಕಾರಿ ಪಿ.ಡಿ. ಖಾತೆಯಲ್ಲಿ 10.55 ಕೋಟಿ ರು., ರಾಯಚೂರು ಜಿಲ್ಲಾಧಿಕಾರಿ ಪಿ.ಡಿ. ಖಾತೆಯಲ್ಲಿ 13.02 ಕೋಟಿ ರು., ಯಾದಗಿರಿ ಜಿಲ್ಲಾಧಿಕಾರಿ ಪಿ.ಡಿ. ಖಾತೆಯಲ್ಲಿ 10.29 ಕೋಟಿ ರು. ಅನುದಾನ ಲಭ್ಯ ಇದೆ. ಅದನ್ನು ಜಿಲ್ಲೆಗಳ ತುರ್ತು ಅವಶ್ಯಕತೆಗೆ ಬಳಸಿಕೊಳ್ಳಿ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಸೂಚಿಸಿದರು.